ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಭದ್ರ ಸರ್ಕಾರಕ್ಕೆ ಪಣತೊಡಿ

10ನೇ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಕೆ.ಅಮರನಾರಾಯಣ ಸಲಹೆ
Last Updated 25 ಜನವರಿ 2020, 10:03 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಮತದಾನ ಒಂದು ಮೂಲಭೂತ ಹಕ್ಕು. ಹೊಸದಾಗಿ ಮತಪಟ್ಟಿಗೆ ಸೇರ್ಪಡೆಯಾಗುವ ಯುವ ಮತದಾರರು ತಮ್ಮ ಮತವನ್ನು ಚಲಾಯಿಸುವ ಮೂಲಕ ಸುಭದ್ರವಾದ ಸರ್ಕಾರ ನಿರ್ಮಾಣ ಮಾಡುವುದಕ್ಕೆ ಪಣತೊಡಬೇಕು’ ಎಂದು ಎಂದು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಕೆ.ಅಮರನಾರಾಯಣ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಚುನಾವಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ 10ನೇ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮತದಾರರು ದೇಶದ ಅಳಿವು, ಉಳಿವಿನ ಬಗ್ಗೆ ಚಿಂತಿಸಿ, ನಮಗೆ ಯಾವ ಸರ್ಕಾರ ಬೇಕು ಎಂಬುದನ್ನು ನಿರ್ಧರಿಸಿ, ಮತ ಚಲಾಯಿಸುವ ಮೂಲಕ ಯೋಗ್ಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ನಾವು ಮೊದಲು ಪ್ರಾಮಾಣಿಕರಾಗಿ ಉಳಿಯುವ ಜತೆಗೆ ಪ್ರಾಮಾಣಿಕರಿಗೆ ಮತ ಹಾಕಬೇಕು. ಆಗ ಮಾತ್ರ ದೇಶವನ್ನು ಸ್ವಚ್ಛವಾಗಿಡಲು ಸಾಧ್ಯ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಗೌರವ, ಘನತೆ ತರಲು ಸಾಧ್ಯ’ ಎಂದು ತಿಳಿಸಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಇಚ್ಛೆಯಂತೆ ಆಡಳಿತ ನಡೆಯಬೇಕು. ಮತದಾನದಿಂದ ಮಾತ್ರ ಮುಂದಿನ ಭವಿಷ್ಯ ನಿರ್ಧರಿಸುವುದು ಸಾಧ್ಯ. ಹೀಗಾಗಿ, 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರಾಗಿ ಹೆಸರು ನೋಂದಾಯಿಸಿಕೊಳ್ಳುವ ಜತೆಗೆ ಪ್ರತಿ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡಬೇಕು. ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ‘ಪ್ರತಿಯೊಬ್ಬ ಮತದಾರರು ಮತದಾನದ ದಿನ ಎಚ್ಚೆತ್ತುಕೊಂಡು ಮತ ನೀಡಬೇಕು. ಮತದಾನಕ್ಕೆ ಅರ್ಹರಾದ ಯಾರೊಬ್ಬರು ಮತದಾನದಿಂದ ಹೊರಗುಳಿಯಬಾರದು. ಮತವನ್ನು ಯಾರೂ ಮಾರಾಟ ಮಾಡಿಕೊಳ್ಳಬಾರದು. ಯುವ ಮತದಾರರು ನಿಮ್ಮ ಮನೆಯವರಿಗೆ ಮತದಾನದ ಬಗ್ಗೆ ಅರಿವು ಮೂಡಿಸಿ ಮತದಾನ ಮಾಡುವಂತೆ ಪ್ರೇರೇಪಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಮಾತನಾಡಿ, ‘ದೇಶದ ಆಡಳಿತ ನಿರ್ಧರಿಸುವುದು ಮತದಾರರಿಂದ ಮಾತ್ರ ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಶ್ರೀಮಂತ, ಬಡವನ ಮತಕ್ಕೆ ಮೌಲ್ಯ ಒಂದೇ. ಮತ ಎಂಬುದು ಒಂದು ಅಸ್ತ್ರ ಇದ್ದಂತೆ. ಯೋಗ್ಯ ವ್ಯಕ್ತಿಯನ್ನು ಚುನಾವಣೆಯಲ್ಲಿ ಆಯ್ಕೆ ಮಾಡುವುದು ನಮ್ಮೆಲ್ಲರ ಕರ್ತವ್ಯ. ಮತದ ಮೂಲಕ ನಮ್ಮ ನಿಲುವನ್ನು ವ್ಯಕ್ತಪಡಿಸಬಹುದು’ ಎಂದು ತಿಳಿಸಿದರು.

ರಾಷ್ಟ್ರೀಯ ಮತದಾರ ದಿನಾಚರಣೆ ಪ್ರಯುಕ್ತ ಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಿದ್ದ ಪ್ರಬಂಧ, ಚರ್ಚೆ ಹಾಗೂ ರಸಪ್ರಶ್ನೆ ಸ್ಪರ್ಥೆಗಳ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ಹೊಸ ಯುವ ಮತದಾರರಿಗೆ ಮತದಾನದ ಗುರುತಿ ಚೀಟಿ ವಿತರಿಸಲಾಯಿತು. ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

3ನೇ ಜಿಲ್ಲಾ ಸಿವಿಲ್ ನ್ಯಾಯಾಧೀಶೆ ಭಾನುಮತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ದೇವರಾಜು, ವಕೀಲರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ತಮ್ಮೇಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಉಪವಿಭಾಗಾಧಿಕಾರಿ ಎ.ಎನ್. ರಘುನಂದನ್, ತಹಶೀಲ್ದಾರ್ ಕೆ.ನರಸಿಂಹಮೂರ್ತಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT