ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು, ಮೇವು ಒದಗಿಸುವಂತೆ ಆಗ್ರಹ

ತಾಲ್ಲೂಕು ಕಚೇರಿ ಎದುರು ರಾಜ್ಯ ಪ್ರಾಂತ ರೈತಸಂಘದ ಪದಾಧಿಕಾರಿಗಳ ಪ್ರತಿಭಟನೆ
Last Updated 3 ಆಗಸ್ಟ್ 2019, 13:48 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಸತತ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಯಲ್ಲಿ ಜನ ಜಾನುವಾರುಗಳಿಗೆ ನೀರು ಮತ್ತು ಮೇವು ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಪ್ರಾಂತ ರೈತಸಂಘದ ಪದಾಧಿಕಾರಿಗಳು ಶನಿವಾರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ‘ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ವಾರ್ಷಿಕ ಕನಿಷ್ಠ 200 ದಿನಗಳ ಕೆಲಸ ಒದಗಿಸಬೇಕು. ₹600 ರಂತೆ ಕೂಲಿ ನಿಗದಿ ಮಾಡಬೇಕು. ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಋಣಮುಕ್ತ ಕಾಯ್ದೆಯನ್ನು ಜಾರಿಗೆ ತರಬೇಕು’ ಎಂದು ಆಗ್ರಹಿಸಿದರು.

‘ಕೃಷಿ ಕ್ಷೇತ್ರದ ಆಧುನೀಕರಣದಿಂದಾಗಿ ಗ್ರಾಮೀಣ ಪ್ರದೇಶದಲ್ಲಿನ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿಕಾರರಿಗೆ 15 ದಿನಗಳು ಕೆಲಸ ಸಿಗುತ್ತಿಲ್ಲ. ಸಾಲಬಾಧೆಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಸೃಷ್ಟಿಯಾಗಿದೆ. ಬೆಳೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದಂತಾಗಿದೆ. ಅನ್ನದಾತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರಗಳು ನಿರ್ಲಕ್ಷ್ಯ ತೋರಿಸುತ್ತಿವೆ’ ಎಂದು ಹೇಳಿದರು.

‘ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು. ಎಂ.ಎಸ್‌.ಸ್ವಾಮಿನಾಥನ್ ವರದಿ ಶಿಫಾರಸುಗಳನ್ನು ಜಾರಿ ಮಾಡಬೇಕು. ಬೆಳೆ ನಷ್ಟ ಪರಿಹಾರ ನೀಡಬೇಕು. ಹಾಲಿನ ದರದಲ್ಲಿ ಹೆಚ್ಚಳ ಮಾಡಬೇಕು. ಕೆರೆ ಒತ್ತುವರಿ ತೆರವುಗೊಳಿಸಬೇಕು. ಮಹಿಳಾ ಸ್ವ ಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚನ್ನರಾಯಪ್ಪ ಮಾತನಾಡಿ, ‘ರೈತರು, ಕೃಷಿ ಕೂಲಿಕಾರರು ಮತ್ತು ಎಲ್ಲ ಸಣ್ಣ ಗೇಣಿದಾರರು ಕಸಬುದಾರರಿಗೆ ಬಡ್ಡಿ ರಹಿತ ಅಗತ್ಯ ಸಾಲವನ್ನು ಬ್ಯಾಂಕ್‌ಗಳಿಂದ ಕಡ್ಡಾಯವಾಗಿ ದೊರಕಿಸಲು ಕ್ರಮ ಕೈಗೊಳ್ಳಬೇಕು. ಕೃಷಿಯನ್ನು ಸಂರಕ್ಷಿಸಲು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಬೇಕು’ ಎಂದು ತಿಳಿಸಿದರು.

‘ಬಡ, ಮಧ್ಯಮ ರೈತರು, ಕೂಲಿಕಾರರು ಮತ್ತು ಕಸಬುದಾರರಿಗೆ ತಲಾ ಮಾಸಿಕ ₹5,000 ಪಿಂಚಣಿ ಯೋಜನೆ ಮತ್ತು ಕಲ್ಯಾಣ ಯೋಜನೆಗಳನ್ನು ರೂಪಿಸಬೇಕು. ಕೃಷಿ ಉತ್ಪನ್ನಗಳ ಉತ್ಪಾದನಾ ವೆಚ್ಚದ ಮೇಲೆ ಶೇ 50 ರಷ್ಟು ಲಾಂಭಾಂಶ ಸೇರಿಸಿ ಕನಿಷ್ಠ ಬೆಂಬಲ ದೊರೆಯುವಂತೆ ಕಾಯ್ದೆ ರಚಿಸಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರು ಉಪ ವಿಭಾಗಾಧಿಕಾರಿ ಶಿವಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯ ಪ್ರಾಂತ ರೈತ ಸಂಘದ ಪದಾಧಿಕಾರಿಗಳಾದ ಮಂಜುನಾಥ ರೆಡ್ಡಿ, ಪದಾಧಿಕಾರಿಗಳಾದ ಎ.ಎನ್.ಶ್ರೀರಾಮಪ್ಪ, ಆರ್.ಚಂದ್ರಶೇಖರ್ ರೆಡ್ಡಿ, ರಮಣ, ವೆಂಕಟೇಶಮ್ಮ, ಜಯನಾ ಬಿ, ಸುಶೀಲಮ್ಮ,ಅನುಸೂಯಮ್ಮ, ಕೆ.ಎನ್.ಚಂದ್ರಶೇಖರ್‍ ರೆಡ್ಡಿ , ಮುನಿಯಪ್ಪ, ವೆಂಕಟರಾಯಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT