ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣಕ್ಕೆ ಜಗತ್ತು ಗೆಲ್ಲುವ ಶಕ್ತಿಯಿದೆ

ಕೆ.ಬಿ.ಪಿಳ್ಳಪ್ಪ ಸ್ಮಾರಕ ದತ್ತಿ ವತಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ವಿವಿಧ ಕ್ಷೇತ್ರಗಳ ಗಣ್ಯರಿಗೆ ಸನ್ಮಾನ
Last Updated 28 ಜುಲೈ 2018, 11:13 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಹಣ ಮತ್ತು ತೋಳ್ಬಲದಿಂದ ಜಗತ್ತನ್ನು ಗೆಲ್ಲಲ್ಲು ಸಾಧ್ಯವಿಲ್ಲ. ಜ್ಞಾನ ಬಲದಿಂದ ಮಾತ್ರ ಇವತ್ತು ಇಡೀ ಜಗತ್ತನ್ನು ಗೆಲ್ಲಲು ಸಾಧ್ಯ. ಇದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು’ ಎಂದು ಜೆಡಿಎಸ್‌ ರಾಷ್ಟ್ರೀಯ ಘಟಕದ ಉಪಾಧ್ಯಕ್ಷ ಪಿ.ಜಿ.ಆರ್‌.ಸಿಂಧ್ಯಾ ತಿಳಿಸಿದರು.

ಕೆ.ಬಿ.ಪಿಳ್ಳಪ್ಪ ಸ್ಮಾರಕ ದತ್ತಿ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ 15 ನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಶಿಕ್ಷಣದಿಂದ ಮಾತ್ರ ವಿದ್ಯಾರ್ಥಿ ಜೀವನಕ್ಕೆ ಬೇಕಾದ ಮೌಲ್ಯಗಳನ್ನು ಪಡೆಯಲು ಸಾಧ್ಯ. ಜ್ಞಾನ ಸಂಪತ್ತಿನಿಂದ ಮಾತ್ರ ಭವಿಷ್ಯ ಉತ್ತಮವಾಗಿರುತ್ತದೆ. ವಿದ್ಯಾರ್ಥಿಗಳು ಸಮಾಜಕ್ಕೆ ಏಳಿಗೆಗೆ ಶ್ರಮಿಸಿದ ಮಹನೀಯರ ಆದರ್ಶಗಳನ್ನು ಪಾಲಿಸುತ್ತ ಉತ್ತಮ ಬದುಕು ಕಟ್ಟಿಕೊಳ್ಳಬೇಕು’ ಎಂದು ಹೇಳಿದರು.

‘ಉನ್ನತ ಉದ್ಯೋಗ ಪ್ರತಿಯೊಬ್ಬ ಯುವಕರ ಕನಸು. ಆದರೆ ಇವತ್ತು ಮುಖ್ಯವಾಗಿ ದೇಶದ ಕೃಷಿ ವ್ಯವಸ್ಥೆಯನ್ನು ಉಳಿಸುವುದು ಸಮಾಜ ಮತ್ತು ಸರ್ಕಾರದ ಕರ್ತವ್ಯವಾಗಬೇಕು. ಈ ನಿಟ್ಟಿನಲ್ಲಿ ಯುವಕರು ಸಹ ಕೃಷಿಯಿಂದ ನೆಮ್ಮದಿ ಜೀವನ ಸಾಗಿಸಬಹುದು ಎಂಬ ನಂಬಿಕೆ ಹುಟ್ಟಿಸುವ ಅಗತ್ಯವಿದೆ. ಅದಕ್ಕಾಗಿ ಕೃಷಿಯಲ್ಲಿ ಹೆಚ್ಚು ತಾಂತ್ರಿಕತೆ ಅಳವಡಿಸಿಕೊಳ್ಳುವ ಅಗತ್ಯವಿದೆ’ ಎಂದರು.

‘ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಕ್ಕೆ ಒತ್ತು ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್‌ನಲ್ಲಿ ಇಸ್ರೇಲ್ ಮಾದರಿ ಕೃಷಿ ಯೋಜನೆ ಘೋಷಿಸಿದ್ದಾರೆ. ರೈತರು ಆ ತಂತ್ರಜ್ಞಾನದ ಬಗ್ಗೆ ತಿಳಿದುಕೊಳ್ಳುವ ಅಗತ್ಯವಿದೆ. ಕೃಷಿ ಉಳಿದರೆ ದೇಶದ ಸಂಸ್ಕೃತಿಯನ್ನು ಉಳಿಸಿದಂತಾಗುತ್ತದೆ’ ಎಂದು ಹೇಳಿದರು.

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ‘ವಿದ್ಯಾರ್ಥಿಗಳು ಉತ್ತಮ ಭವಿಷ್ಯಕ್ಕಾಗಿ ಬದುಕಿನಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೆಲ ಸನ್ನಿವೇಶಗಳು ಬದುಕಿನಲ್ಲಿ ಸೋಲುಂಟು ಮಾಡಿದರೂ ಎದೆಗುಂದಬಾರದು. ಸೋಲನ್ನು ಸವಾಲಾಗಿ ಸ್ವೀಕರಿಸಿ, ಪೋಷಕರ ಕನಸು ನನಸಾಗಿಸುವ ನಿಟ್ಟಿನಲ್ಲಿ ಶ್ರಮಿಸಬೇಕು’ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 90 ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಲಾಯಿತು.

ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ, ಕೆ.ಬಿ.ಪಿಳ್ಳಪ್ಪ ಸ್ಮಾರಕ ದತ್ತಿ ಅಧ್ಯಕ್ಷ ಡಾ.ಶ್ರೀನಿವಾಸಮೂರ್ತಿ, ಕಾರ್ಯದರ್ಶಿ ಕೆ.ಪಿ.ಬಚ್ಚೇಗೌಡ, ಮುಖಂಡ ಜಿ.ಆರ್‌.ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT