ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಜನತೆ ಸಂವಿಧಾನದ ಆಶಯ ಅರಿಯಬೇಕು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್

72ನೇ ಗಣರಾಜ್ಯೋತ್ಸವ ದಿನಾಚರಣೆ ಸಂದೇಶದಲ್ಲಿ ಕಿವಿಮಾತು
Last Updated 26 ಜನವರಿ 2021, 12:05 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ದೇಶಕ್ಕೆ ವಿಶ್ವಕ್ಕೆ ಮಾದರಿಯಾದ ಹಾಗೂ ಅತಿ ದೊಡ್ಡ ಸಂವಿಧಾನ ಕೊಟ್ಟ ಕೀರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಅಂತಹ ಮಹಾನ್ ಮಾನವತಾವಾದಿ ರಚಿಸಿದ ಸಂವಿಧಾನದಲ್ಲಿನ ಹಕ್ಕು ಕರ್ತವ್ಯಗಳನ್ನು ಅರಿತುಕೊಳ್ಳುವ ಜತೆಗೆ ಅವರ ಆಶಯಗಳನ್ನು ಯುವಜನತೆ ಅರ್ಥ ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜರುಗಿದ 72ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಅವರು ತಮ್ಮ ಗಣರಾಜ್ಯೋತ್ಸವದ ಸಂದೇಶ ನೀಡಿದರು.

‘ಇವತ್ತು ದೇಶ ಸ್ವಾತಂತ್ರ್ಯಾ ನಂತರ ತನ್ನದೇ ಆದ ಸಂವಿಧಾನ ಜಾರಿಗೊಳಿಸಿ ಸ್ವತಂತ್ರ ಗಣತಂತ್ರ ರಾಷ್ಟ್ರವಾದ ದಿನ. ಈ ಸಂದರ್ಭದಲ್ಲಿ ನಮ್ಮ ಸಂವಿಧಾನದ ಮೂಲ ಆಶಯಗಳು, ಭರವಸೆಗಳು ಎಷ್ಟರ ಮಟ್ಟಿಗೆ ಕಾರ್ಯರೂಪಕ್ಕೆ ಬಂದಿವೆ? ಕಳೆದ ಏಳು ದಶಕಗಳಲ್ಲಿ ನಮ್ಮ ಸಾಧನೆಯನ್ನು ವಿಶ್ಲೇಷಿಸಬೇಕು ಹಾಗೂ ನಮ್ಮ ಸಾಧನೆಯು ದೇಶದ ಎಲ್ಲ ಜನತೆಯನ್ನು ತಲುಪಿದೆಯೇ ಎಂಬುದನ್ನು ನೋಡಬೇಕಿದೆ’ ಎಂದು ತಿಳಿಸಿದರು.

‘ಕೋವಿಡ್-19 ನಿಯಂತ್ರಣದಲ್ಲಿ ರಾಜ್ಯ ಇಡೀ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಅದೇ ರೀತಿ ಲಸಿಕೆ ವಿತರಣೆಯಲ್ಲೂ ಮೊದಲ ಸ್ಥಾನದಲ್ಲಿದ್ದು, ಈವರೆಗೆ 2 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಇನ್ನು ಚಿಕ್ಕಬಳ್ಳಾಪುರ ಲಸಿಕೆ ವಿತರಣೆಯಲ್ಲಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದ್ದು, ಈವರೆಗೆ ಸುಮಾರು 5,000 ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ. ಈ ಸಾಧನೆ ಎಲ್ಲಾ ಇಲಾಖೆಗಳ ಸಮನ್ವಯದಿಂದ ಸಾಧ್ಯವಾಗಿದೆ’ ಎಂದು ಶ್ಲಾಘಿಸಿದರು.

‘ಜಿಲ್ಲೆಯಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನೀರಾವರಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲಾಗಿದೆ. ಶುದ್ದೀಕರಿಸಿದ ತ್ಯಾಜ್ಯ ನೀರನ್ನು ಜಿಲ್ಲೆಯ 44 ಕೆರೆಗಳಿಗೆ ಹರಿಸುವ ಯೋಜನೆಗೆ ದೇಶದಲ್ಲೇ ಪ್ರಪ್ರಥಮ ಬಾರಿಗೆ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚಾಲನೆ ನೀಡಲಾಗಿದೆ’ ಎಂದು ತಿಳಿಸಿದರು.

‘2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಶೇ 92.37 ಫಲಿತಾಂಶ ಪಡೆದು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ. ಸಕಾಲದಲ್ಲಿ ಸಾರ್ವಜನಿಕರಿಗೆ ಸೇವೆಯನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡುವ ಮೂಲಕ ಡಿಸೆಂಬರ್‌ನಲ್ಲಿ ಜಿಲ್ಲೆಯು ಸಕಾಲ ಸೇವೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಇದರಿಂದಾಗಿ ಜಿಲ್ಲಾಡಳಿತ ವ್ಯವಸ್ಥೆಯು ಜನಸ್ನೇಹಿಯಾಗಿದೆ’ ಎಂದರು.

‘ಜಿಲ್ಲೆಯಲ್ಲಿ ₹650 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣ ಕಾಲೇಜು ಕಟ್ಟಡ ಮತ್ತು ₹8 ಕೋಟಿ ಮೊತ್ತದಲ್ಲಿ 50 ಹಾಸಿಗೆಯ ಆಯುಷ್ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾರ್ಯವು ಪ್ರಗತಿಯಲ್ಲಿದೆ. ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಕಂದವಾರ ಕೆರೆಯ ಆವರಣದ ಜಾಗವನ್ನು ಉದ್ಯಾನವನ್ನಾಗಿ ಅಭಿವೃದ್ದಿಪಡಿಸಲು ₹11 ಕೋಟಿ ಕಾಮಗಾರಿ ಕೈಗೆತ್ತುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ₹3 ಕೋಟಿ ವಿಶೇಷ ಅನುದಾನದಲ್ಲಿ ಗ್ಯಾಸ್ ಚಿತಾಗಾರ ನಿರ್ಮಾಣ ಪ್ರಗತಿಯಲ್ಲಿದೆ’

ಕೋವಿಡ್ ಕಾರಣಕ್ಕೆ ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿರಲಿಲ್ಲ. ಪರೇಡ್‌ ಕಮಾಂಡರ್‌ ಟಿ.ಮಂಜುನಾಥ್ ಅವರ ನೇತೃತ್ವದಲ್ಲಿ ಜಿಲ್ಲಾ ನಾಗರಿಕ ಪೊಲೀಸ್‌, ಜಿಲ್ಲಾ ಮಹಿಳಾ ಪೊಲೀಸ್‌, ಅರಣ್ಯ ಇಲಾಖೆ, ಜಿಲ್ಲಾ ಗೃಹ ರಕ್ಷಕ ದಳದ ತುಕಡಿಗಳು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳ ತುಕಡಿ ಕವಾಯತು ನಡೆಸಿದವು.

ಕೋವಿಡ್ ನಿಯಂತ್ರಣದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಂಗಾಮಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ವಿ.ರಮೇಶ್ ಮತ್ತು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಎಲ್.ವಿಜಯಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಕರ್ನಾಟಕ ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜು, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಅರಸಲನ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ತಹಶೀಲ್ದಾರ್ ನಾಗಪ್ರಶಾಂತ್, ನಗರಸಭೆ ಅಧ್ಯಕ್ಷ ಆನಂದರೆಡ್ಡಿ, ನಗರಸಭೆ ಆಯುಕ್ತ ಲೋಹಿತ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT