ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧು ಪತ್ತಾರ ಸಾವಿನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ರಾಯಚೂರಿನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ಪತ್ತಾರ ಸಾವಿನ ಪ್ರಕರಣ ಖಂಡನೆ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ
Last Updated 23 ಏಪ್ರಿಲ್ 2019, 10:31 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ರಾಯಚೂರಿನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ಪತ್ತಾರ ಅವರನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ತನಿಖೆಗೆ ವಹಿಸಿ ಸಮಗ್ರವಾಗಿ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿ ವಿಶ್ವಕರ್ಮ ಉತ್ಸವ ಸಮಿತಿಯ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ನಗರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಬಿ.ನವೀನ್ ಕುಮಾರ್ ಮಾತನಾಡಿ, ‘ಮಧು ಅವರ ಸಾವಿನ ಪ್ರಕರಣ ಇಡೀ ರಾಜ್ಯದ ಜನ ತಲೆ ತಗ್ಗಿಸುವಂತಾಗಿದೆ. ವಿದ್ಯಾರ್ಥಿನಿಯ ಸಾವನ್ನು ಆತ್ಮಹತ್ಯೆ ಎಂದು ಬಿಂಬಿಸಿ, ಈ ಪ್ರಕರಣದ ದಿಕ್ಕು ತಪ್ಪಿಸಲು ಹುನ್ನಾರ ನಡೆಯುತ್ತಿದೆ. ಆದ್ದರಿಂದ ತಕ್ಷಣ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ಒಪ್ಪಿಸಬೇಕು’ ಎಂದು ಆಗ್ರಹಿಸಿದರು.

‘ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದ ಈ ಕೃತ್ಯದಿಂದ ಜನಸಾಮಾನ್ಯರು ಬೆಚ್ಚಿಬೀಳುವಂತಾಗಿದೆ. ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿದಾಗ ಮಾತ್ರ ಇಂತಹ ಪ್ರಕರಣಗಳು ಮರುಕಳುಹಿಸುವುದಿಲ್ಲ. ಸರ್ಕಾರದಿಂದ ಮೃತಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

‘ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಇಂತಹ ಪ್ರರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು, ಅತ್ಯಾಚಾರಗಳು ಜನಸಾಮಾನ್ಯರಲ್ಲಿ ಭಯದ ವಾತಾವರಣ ಸೃಷ್ಟಿ ಆಗಿದೆ. ಸರ್ಕಾರ ಕಠಿಣ ಕ್ರಮ ಕೈಗೊಂಡು ಇವುಗಳನ್ನು ತಡೆಯಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರು ಭುವನೇಶ್ವರಿ ವೃತ್ತದಿಂದ ತಾಲ್ಲೂಕು ಕಚೇರಿ ವರೆಗೆ ಮೆರವಣಿಗೆ ನಡೆಸಿ, ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಸಮಿತಿಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಜಯಚಂದ್ರ, ಕಾಳಿಕಾಂಭ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕ ಅಧ್ಯಕ್ಷೆ ಸುಬ್ಬಲಕ್ಷ್ಮಿ ಬ್ರಹ್ಮಚಾರಿ, ಮುಖಂಡರಾದ ಮಂಜುನಾಥ್, ಶ್ರೀಧರ್, ಆನಂದ್, ವಿ.ಭಾರತಿ , ಜಮುನಾ ರಾಮಕೃಷ್ಣಾಚಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT