ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡಿಗೆರೆ: ಹುಲಿ ಹತ್ಯೆಯ ಪ್ರಮುಖ ಆರೋಪಿ ಸೆರೆ

Published 1 ಮೇ 2024, 13:56 IST
Last Updated 1 ಮೇ 2024, 13:56 IST
ಅಕ್ಷರ ಗಾತ್ರ

ಮೂಡಿಗೆರೆ: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಅರಣ್ಯ ಇಲಾಖೆ ಈ ಹಿಂದಿನ ವಾಚರ್ ಆಗಿದ್ದ ಕುಂಡ್ರ ಗ್ರಾಮದ ಸುರೇಶ್ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮೂಡಿಗೆರೆ ಸಮೀಪದ ಕುಂಡ್ರ ಎಂಬಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಸಂಬಂಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾಗಿದ್ದ ಸುರೇಶ್ ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ. ಆತನ ಬಂಧನಕ್ಕೆ ಅರಣ್ಯ ಇಲಾಖೆ ಹುಡುಕಾಟ ನಡೆಸಿತ್ತು.

ಮಂಗಳವಾರ ಸುರೇಶ್ ಮೂಡಿಗೆರೆ ನ್ಯಾಯಾಲಯಕ್ಕೆ ಶರಣಾಗಲು ಬರುತ್ತಾನೆ ಎಂಬ ಮಾಹಿತಿ ಮೇರೆಗೆ ಮೂಡಿಗೆರೆ ನ್ಯಾಯಾಲಯದ ಸಮೀಪ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಹರೆ ಹಾಕಿದ್ದರು. ಸಂಜೆ ಸುಮಾರು 5 ಗಂಟೆಯ ಸಮಯದಲ್ಲಿ ಸುರೇಶ್‌ನನ್ನು ನ್ಯಾಯಾಲಯದ ಸಮೀಪ ವಶಕ್ಕೆ ಪಡೆಯಲಾಗಿತ್ತು. ಆರೋಪಿಯನ್ನು ವಶಕ್ಕೆ ಪಡೆದು ಮೂಡಿಗೆರೆ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದರೊಂದಿಗೆ ಈ ಪ್ರಕರಣದಲ್ಲಿ ಒಟ್ಟು ಆರು ಮಂದಿ ಬಂಧನವಾದಂತಾಗಿದೆ. ಈಗಾಗಲೇ ಬಂಧಿಸಲ್ಪಟ್ಟಿದ್ದ ಐವರು ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ.

ಈ ಪ್ರಕರಣದ ಆರೋಪಿಯೊಬ್ಬ ಹುಲಿ ಹತ್ಯೆಯ ಬಗ್ಗೆ ಎಳೆ ಎಳೆಯಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಒಂದನೇ ಆರೋಪಿಯೆಂದು ಬಂಧಿತನಾಗಿರುವ ಸತೀಶ್ ಅವರ ಬೈಕಿಗೆ ಹುಲಿ ಅಂಗಾಂಗಗಳನ್ನು ಇಟ್ಟು ಪ್ರಕರಣದಲ್ಲಿ ಸಿಲುಕಿಸಿರುವ ಬಗ್ಗೆಯೂ ಆತ ಹೇಳಿಕೆ ನೀಡಿದ್ದಾನೆ’ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT