ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.5ರಿಂದ 15ರೊಳಗೆ ಸಚಿವ ಸಂಪುಟ ವಿಸ್ತರಣೆ: ಈಶ್ವರ್‌ ಖಂಡ್ರೆ

Last Updated 14 ಅಕ್ಟೋಬರ್ 2018, 15:12 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ, ಮಂಡಳಿಗಳಿಗೆ ನೇಮಕವು ನವೆಂಬರ್‌ 5ರಿಂದ 15ರೊಳಗೆ ನಡೆಯಲಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಇಲ್ಲಿ ಭಾನುವಾರ ತಿಳಿಸಿದರು.

‘ಶಿವಮೊಗ್ಗ, ಮಂಡ್ಯ ಕ್ಷೇತ್ರಗಳ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಇದೆ. ಮೈತ್ರಿ ಅಚಲವಾಗಿದೆ. ಎರಡೂ ಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸುತ್ತೇವೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

‘ಬಳ್ಳಾರಿ ಕ್ಷೇತ್ರಕ್ಕೆ ಇಬ್ಬರ ಹೆಸರು ಮುಂಚೂಣಿಯಲ್ಲಿದೆ. ಇನ್ನು ಒಂದು ದಿನದಲ್ಲಿ ಹೈಕಮಾಂಡ್‌ ಅಭ್ಯರ್ಥಿಯನ್ನು ಅಖೈರುಗೊಳಿಸಲಿದೆ. ಮೈತ್ರಿ ಸರ್ಕಾರ ಸಂದರ್ಭದಲ್ಲಿ ಹೊಂದಾಣಿಕೆ ಅಗತ್ಯ ಮತ್ತು ಅನಿವಾರ್ಯ’ ಎಂದು ಪ್ರತಿಕ್ರಿಯಿಸಿದರು.

‘ರಾಜ್ಯದಲ್ಲಿ ಸುಮಾರು 40 ಕಡೆಗಳಲ್ಲಿ ಇಂದಿರಾ ಕ್ಯಾಂಟಿನ್‌ಗಳು ಶುರುವಾಗಿಲ್ಲ. ಈ ಬಗ್ಗೆ ಸಮನ್ವಯ ಸಮಿತಿಯಲ್ಲಿ ಚರ್ಚಿಸಲಾಗಿದೆ. ಕ್ಯಾಂಟಿನ್‌ಗಳನ್ನು ಶೀಘ್ರದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಗಮನಹರಿಸಲಾಗುವುದು’ ಎಂದು ಉತ್ತರಿಸಿದರು.

‘ಲೋಕಸಭೆ ಚುನಾವಣೆಗೆ ಸೀಟು ಹೊಂದಾಣಿಕೆ ಬಗ್ಗೆ ಮೈತ್ರಿ ಪಕ್ಷದೊಂದಿಗೆ ಇನ್ನು ಮಾತುಕತೆ ಮಾಡಿಲ್ಲ. ಉಪಚುನಾವಣೆಗೆ ಸೀಮಿತವಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಉಪಚುನಾವಣೆ ನಂತರ ಸೀಟು ಹೊಂದಾಣಿಕೆ ಮುಖಂಡರೊಂದಿಗೆ ಚರ್ಚಿಸಿ ಪ್ರಕ್ರಿಯೆ ಮಾಡಿಕೊಳ್ಳುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು–ಉಡುಪಿ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿ ಕಣಕ್ಕಿಳಿಸಲು ತಲಾಶ್‌ ಆರಂಭಿಸಿದ್ದೇವೆ’ ಎಂದರು.

‘ಕಾಂಗ್ರೆಸ್‌ ಪಕ್ಷವು ತಳಮಟ್ಟದಲ್ಲಿ ಸುಭದ್ರವಾಗಿದೆ. ಪಕ್ಷದಲ್ಲಿ ಸಣ್ಣಪುಟ್ಟ ಅಭಿಪ್ರಾಯ ಭೇದಗಳಿವೆ. ಚರ್ಚಿಸಿ ಪರಿಹರಿಸಲಾಗುವುದು. ಲೋಕಸಭೆ ಚುನಾವಣೆಗೆ ಸಜ್ಜಾಗುವ ‌ಸವಾಲು ಇದೆ. ಈ ನಿಟ್ಟಿನಲ್ಲಿ ಈ ಕಾರ್ಯಪ್ರವೃತ್ತರಾಗಿದ್ದೇವೆ. ಜನಸಂಪರ್ಕ ಅಭಿಯಾನ ಆರಂಭಿಸಿದ್ದೇವೆ. ನವೆಂಬರ್‌ 19ರವರೆಗೆ ಅಭಿಯಾನ ನಡೆಯಲಿದ್ದು, ಹಿಂದಿನ ಕಾಂಗ್ರೆಸ್‌ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲಾಗುವುದು’ ಎಂದರು.

‘ಪ್ರತಿಪಕ್ಷಗಳು ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ ಮಾಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಪ್ರಧಾನಿ ಮೋದಿ ಈಡೇರಿಸಿಲ್ಲ. ಕಾಳಧನ ವಾಪಸ್‌, ಉದ್ಯೋಗ ಸೃಷ್ಟಿಯಲ್ಲಿ ವಿಫಲರಾಗಿದ್ದಾರೆ. ಯುವಪೀಳಿಗೆ ಭ್ರಮನಿರಸನರಾಗಿದ್ದಾರೆ. ರಫೇಲ್‌ ಯುದ್ಧ ವಿಮಾನ ಖರೀದಿ ಹಗರಣದಲ್ಲಿ ಬಿಜೆಪಿ ಸಿಲುಕಿಕೊಂಡಿದೆ. ಜಾತಿ, ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಸುತ್ತಿದ್ದಾರೆ. ದೇಶದಲ್ಲಿ ‘ಜಂಗಲ್‌ರಾಜ್‌’ ಆಡಳಿತ ನಡೆಯುತ್ತಿದೆ’ ಎಂದು ಆರೋಪಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಅವಲೋಕನ ಮಾಡಿಕೊಂಡು ಪಕ್ಷ ಸಂಘಟನೆ ಮಾಡುತ್ತೇವೆ. ಗತವೈಭವ ಮರುಕಳಿಸುವಂತೆ ಪಕ್ಷ ಸಂಘಟಿಸುವ ಗುರಿ ಇಟ್ಟುಕೊಂಡಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನ ಗೆಲ್ಲುವ ಸಂಕಲ್ಪ ಮಾಡುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT