ಚಿಕ್ಕಮಗಳೂರು: ‘ಧ್ವನಿ ಇಲ್ಲದ ಜನರ ಸೇವೆ ಮಾಡಬೇಕು ಎಂಬುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಉದ್ದೇಶ. ಅದಕ್ಕೆ ಪೂರಕವಾಗಿ ಕೆಲಸ ಮಾಡುವವರಿಗೆ ಪಕ್ಷದಲ್ಲಿ ಗುರುತಿಸಿ ಜವಾಬ್ದಾರಿ ನೀಡಿದ್ದಾರೆ’ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ತಿಳಿಸಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಯುವಕರಿಗೆ ಹೆಚ್ಚು ಅಧಿಕಾರ ನೀಡಲು ರಾಹುಲ್ ಗಾಂಧಿ ಮುಂದಾಗಿದ್ದಾರೆ. ಸಮಾಜದ ಎಲ್ಲಾ ವರ್ಗದ ಜನರನ್ನು ನೇರ ಸಂಪರ್ಕಿಸಬೇಕೆಂಬ ಉದ್ದೇಶದಿಂದ ಭಾರತ್ ಜೋಡೊ ಪಾದಯಾತ್ರೆ ಮಾಡಿದ್ದಾರೆ ಎಂದರು.
‘ದೇಶದ ವಿವಿಧ ರಾಜ್ಯಗಳಲ್ಲಿ ಸೇವೆ ಸಲ್ಲಿಸಿದ್ದು, ಮುಂದೆ ಚುನಾವಣೆ ನಡೆಯುತ್ತಿರುವ ರಾಜ್ಯದ ಉಸ್ತುವಾರಿಯನ್ನು ನೀಡಿದ್ದಾರೆ. ಮೂರನೇ ಬಾರಿಗೆ ನನ್ನನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಾರೆ. ಅನುಭವದ ಜೊತೆಗೆ ಪಕ್ಷಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂಬ ಗುರಿ ಹೊಂದಿದ್ದೇನೆ’ ಎಂದು ತಿಳಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯಿತ್ರಿ ಶಾಂತೇಗೌಡ ಮಾತನಾಡಿ, ‘ಪಕ್ಷ ನೀಡಿದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದಾಗ ಪಕ್ಷ ನಮ್ಮನ್ನು ಗುರುತಿಸುತ್ತದೆ’ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಎಲ್. ವಿಜಯಕುಮಾರ್ ಮಾತನಾಡಿ, ‘21 ರಾಜ್ಯಗಳಲ್ಲಿ ಬಿ.ಎಂ. ಸಂದೀಪ್ ಉತ್ತಮ ಕೆಲಸ ಮಾಡಿದ್ದಾರೆ. ಪರಿಶ್ರಮ, ಶ್ರದ್ಧೆ, ಪಕ್ಷ ಸಂಘಟನೆಗೆ ನೀಡಿದ ಜವಾಬ್ದಾರಿಯನ್ನು ಗಂಭೀರವಾಗಿ ಪರಿಗಣಿಸಿದೆ’ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ನಗರ ಕಾಂಗ್ರೆಸ್ ಅಧ್ಯಕ್ಷ ತನೂಜ್ ಕುಮಾರ್, ಪರಿಶಿಷ್ಟ ಜಾತಿ ಘಟಕ ಜಿಲ್ಲಾ ಅಧ್ಯಕ್ಷ ಮಲ್ಲೇಶಸ್ವಾಮಿ, ಮುಖಂಡರಾದ ಪ್ರಕಾಶ್ ರೈ, ಲಕ್ಷ್ಮಣ, ಮಧು, ಅನಿಲ್, ಬೆಟ್ಟಗೆರೆ ಪ್ರವೀಣ್, ಖಲಂದರ್, ಪರಮೇಶ್, ಶಾದಬ್ ಅಲಂಖಾನ್, ಶಿವಾನಂದ್, ನಾಗಭೂಷಣ್, ಪ್ರಕಾಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.