ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು | ಡೆಂಗಿ ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ

ನಗರ ಪ್ರದೇಶದಲ್ಲೇ ಡೆಂಗಿ ಪ್ರಕರಣ ಸಂಖ್ಯೆ ಹೆಚ್ಚಳ
Published 1 ಜೂನ್ 2024, 14:00 IST
Last Updated 1 ಜೂನ್ 2024, 14:00 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಮಳೆಗಾಲ ಆರಂಭವಾಗಿದ್ದು ಜಿಲ್ಲೆಯಲ್ಲಿ ಡೆಂಗಿ ಪ್ರಕರಣಗಳು ಕಂಡು ಬರುತ್ತಿವೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜನರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ತಡೆಗಟ್ಟುವ ಸಂಬಂಧ ಶುಕ್ರವಾರ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲೇ ಡೆಂಗಿ ಪ್ರಕರಣಗಳು ಹೆಚ್ಚು ದಾಖಲಾಗಿವೆ. ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಪ್ರತಿ ಮನೆಗಳಲ್ಲಿ ಲಾರ್ವಾ ಸಮೀಕ್ಷೆ ಕೈಗೊಳ್ಳಬೇಕು. ಸ್ವಚ್ಛತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ನಗರದ ಪ್ರತಿ ವಾರ್ಡ್‍ಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಫಾಂಗಿಂಗ್ ಮಾಡುವಂತೆ ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು ಮಾತನಾಡಿ, ಮಳೆಗಾಲದ ಆರಂಭ ಜೂನ್‌ನಿಂದ ಸೆಪ್ಟೆಂಬರ್‌ವರೆಗೂ ಸಾಮಾನ್ಯವಾಗಿ ಡೆಂಗಿ ಜ್ವರ ಕಾಣಿಸಿಕೊಳ್ಳುತ್ತದೆ. ಹಗಲು ವೇಳೆಯಲ್ಲಿ ಈಡೀಸ್ ಈಜಿಪ್ಟ್ ಎಂಬ ಸೊಳ್ಳೆ ಕಚ್ಚುವುದರಿಂದ ಡೆಂಗಿ ಹರಡುತ್ತದೆ. ಮನೆಗಳಲ್ಲಿ ಸೊಳ್ಳೆಗಳು ಹೆಚ್ಚಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮನೆಯ ಸಿಮೆಂಟ್ ತೊಟ್ಟಿ, ಡ್ರಮ್‌ಗಳಲ್ಲಿ ದೀರ್ಘಕಾಲದವರೆಗೆ ನೀರು ಸಂಗ್ರಹಿಸಬಾರದು. ಮುಖ್ಯವಾಗಿ ಘನ ತ್ಯಾಜ್ಯಗಳಾದ ಟೈಯರ್, ಎಳನೀರು ಚಿಪ್ಪು, ಒಡೆದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಅನುಪಯುಕ್ತ ವಸ್ತು ಇವುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು.

ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದಲ್ಲಿ ಡೆಂಗಿ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಗೋಪಾಲಕೃಷ್ಣ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಬಾಲಕೃಷ್ಣ, ಜಿಲ್ಲಾ ಆರ್‍ಸಿಹೆಚ್ ಡಾ. ಮಂಜುನಾಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಭರತ್ ಕುಮಾರ್, ಚಿಕ್ಕಮಗಳೂರು ತಾಲ್ಲೂಕು ಆರೋಗ್ಯ ಅಧಿಕಾರಿ ಸೀಮಾ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಹರೀಶ್ ಬಾಬು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT