ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಕ್ರಾಮಿಕ ರೋಗ ತಡೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ

Last Updated 21 ಮೇ 2019, 14:45 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ತಡೆಗೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾಂಕ್ರಾಮಿಕ ರೋಗ ತಡೆ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗುವ ಪ್ರದೇಶಗಳನ್ನು ಗುರುತಿಸಬೇಕು. ರಸ್ತೆ, ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಹೆಚ್ಚು ನೀರು ನಿಲ್ಲುವ ಕಡೆ ಲಾರ್ವ ಸೇವಿಸುವ ಗಪ್ಸಿ ಮೀನುಮರಿಗಳನ್ನು ಬಿಡಬೇಕು. ಡೆಂಗಿ, ಚಿಕೂನ್ ಗುನ್ಯಾ, ಮಲೇರಿಯಾ ನಿಯಂತ್ರಣಕ್ಕೆ ಮುಂಜಾಗ್ರತೆ ವಹಿಸಬೇಕು ಎಂದರು.

ತಾಲ್ಲೂಕಿನ ಇಂದಾವರದಲ್ಲಿರುವ ನಗರಸಭೆ ಕಸ ವಿಲೇವಾರಿ ಘಟಕದಲ್ಲಿ ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರ ವಹಿಸಬೇಕು. ಕಸದ ಮೇಲೆ ಸೊಳ್ಳೆ ನಾಶಕ ದ್ರಾವಣ ಸಿಂಪಡಿಸಬೇಕು. ಅಲ್ಲಿಗೆ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.
ಆರೋಗ್ಯ ಇಲಾಖೆಯ ಎಚ್.ಕೆ.ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ 4 ಡೆಂಗಿ, 4 ಮೆದುಳು ಜ್ವರ, 1ಚಿಕೂನ್ ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್‌ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕುಮಾರ್ ನಾಯಕ್, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT