ತರೀಕೆರೆ (ಚಿಕ್ಕಮಗಳೂರು ಜಿಲ್ಲೆ): ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ರೈತರು ಮತ್ತು ವಿವಿಧ ಪಕ್ಷಗಳ ಮುಖಂಡರು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಲಕ್ಕವಳ್ಳಿ ಹೋಬಳಿಯ ಗುರುಪುರ ಗ್ರಾಮದ ಕೃಷಿಕ ಮಣಿ ಬಿನ್ ವೇಲಾಯುಧನ್ (28) ಸಾವಿಗೀಡಾಗಿದ್ದಾರೆ.
ಲಕ್ಕವಳ್ಳಿ ವಲಯ ಅರಣ್ಯಾಧಿಕಾರಿ ಕಚೇರಿಯ ಮುಂದೆ ರೈತರ ಹಿತರಕ್ಷಣಾ ಸಮಿತಿ ವತಿಯಿಂದ ಬುಧವಾರ ಪ್ರತಿಭಟನೆ ನಡೆದಿತ್ತು. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮನವಿ ಪತ್ರ ಸ್ವೀಕರಿಸಿ ಮಾತನಾಡುತ್ತಿದ್ದಾಗ ಮಣಿ ಕುಸಿದು ಬಿದ್ದಿದ್ದಾರೆ. ಲಕ್ಕವಳ್ಳಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.