ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಸಂಘ ನಿರ್ಣಯ

7ನೇ ವೇತನ ಆಯೋಗ, ಹಳೆ ಪಿಂಚಣಿ ಯೋಜನೆ ಮರುಜಾರಿಗೆ ಆಗ್ರಹ
Published 7 ಜುಲೈ 2024, 14:29 IST
Last Updated 7 ಜುಲೈ 2024, 14:29 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿಯ ಶಿಫಾರಸು ಜಾರಿಗೊಳಿಸುವುದು, ಹಳೆ ಪಿಂಚಣಿ ಯೋಜನೆ ಮರು ಜಾರಿ ಹಾಗೂ ‘ಆರೋಗ್ಯ ಸಂಜೀವಿನಿ’ ಯೋಜನೆ ಜಾರಿಗೆ ಒತ್ತಾಯಿಸಿ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವ ಕುರಿತು ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆ ಭಾನುವಾರ ನಿರ್ಣಯ ಕೈಗೊಂಡಿದೆ.

ನಗರದ ಸೀತಾ ದಯಾನಂದ ಪೈ ಕಲ್ಯಾಣ ಮಂಟಪದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಷಡಾಕ್ಷರಿ ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಈ ಪ್ರಸ್ತಾಪವನ್ನು ಒಕ್ಕೊರಲಿನಿಂದ ಅನುಮೋದಿಸಲಾಗಿದೆ.

ಹೋರಾಟದ ಮೊದಲ ಹಂತವಾಗಿ ಇದೇ 8ರಿಂದ 14ರವರೆಗೆ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಮನವಿ ಸಲ್ಲಿಸುವುದು. ನಂತರ ಬೆಂಗಳೂರಿನಲ್ಲಿ ಮತ್ತೊಮ್ಮೆ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸುವುದು. ಸ್ಪಂದಿಸದಿದ್ದಲ್ಲಿ ಈ ತಿಂಗಳ ಕೊನೆಯಲ್ಲಿ ಅಥವಾ ಆಗಸ್ಟ್ ಮೊದಲವಾರದಲ್ಲಿ ಕರ್ತವ್ಯಕ್ಕೆ ಗೈರು ಹಾಜರಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಸಭೆ ತೀರ್ಮಾನಿಸಿದೆ.

ಸಭೆಯಲ್ಲಿ ವಿವಿಧ ಇಲಾಖೆ ನೌಕರರ ಸಂಘಗಳ ಪ್ರಮುಖರು ಮಾತನಾಡಿ, ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟ ಅನಿವಾರ್ಯವಾಗಿದೆ. ರಾಜ್ಯದ ಆರು ಲಕ್ಷ ಸರ್ಕಾರಿ ನೌಕರರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಷಡಾಕ್ಷರಿ ಪ್ರಾಸ್ತಾವಿಕವಾಗಿ ಮಾತನಾಡಿ, 7ನೇ ವೇತನ ಆಯೋಗ ವರದಿ ನೀಡಿ 19 ತಿಂಗಳಾದರೂ ಜಾರಿಗೊಳಿಸಲು ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನೇ ಮುಂದುವರಿಸಬೇಕು, ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ಯಾವುದೇ ಬೇಡಿಕೆಗಳಿಗೂ ರಾಜ್ಯ ಸರ್ಕಾರ ಎರಡು ವರ್ಷಗಳಿಂದ ಸ್ಪಂದಿಸಿಲ್ಲ ಎಂದು ಆರೋಪಿಸಿದರು.

ಸರ್ಕಾರಿ ನೌಕರರ ಸಂಘದ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಳನೇ ವೇತನ ಆಯೋಗದ ವರದಿಯ ಶಿಫಾರಸನ್ನು ಶೀಘ್ರ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು. ಬಳಿಕ ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಜಾರಿ ಮಾಡುವುದಾಗಿ ಹೇಳಿದ್ದರು. ಆದರೆ ಆ ಭರವಸೆ ಈಡೇರದೆ ನಮ್ಮ ನಿರೀಕ್ಷೆ ಹುಸಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸಂಘದ ಪದಾಧಿಕಾರಿಗಳು ಹಲವು ಬಾರಿ ಮುಖ್ಯಮಂತ್ರಿ ಭೇಟಿಯಾಗಿ ಮನವಿ ಸಲ್ಲಿಸಿದ್ದರೂ ಉಪಯೋಗವಾಗಿಲ್ಲ. ರಾಜ್ಯ ಸರ್ಕಾರಕ್ಕೆ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮನಸ್ಸಿಲ್ಲ ಎಂದು ದೂರಿದರು.

ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಕಾರ್ಯಕ್ರಮ ಉದ್ಘಾಟಿಸಿ, ‘ಸರ್ಕಾರಿ ನೌಕರರಿಗೂ ಹೆಂಡತಿ, ಮಕ್ಕಳು, ಸಂಸಾರ ಇರುವುದನ್ನು ಸರ್ಕಾರ ಮನಗಾಣಬೇಕು. ನಾಡಿನ ಮತ್ತು ಜನರ ಏಳಿಗೆಗೆ ದುಡಿಯುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು’ ಎಂದರು.

ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಗೌರವಾಧ್ಯಕ್ಷ ವೆಂಕಟೇಶಯ್ಯ, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ್, ಹಿರಿಯ ಉಪಾಧ್ಯಕ್ಷ ಎಂ.ವಿ. ರುದ್ರಪ್ಪ, ಎಸ್. ಬಸವರಾಜ್, ಖಜಾಂಚಿ ಡಾ. ಸಿದ್ದರಾಮಣ್ಣ, ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ದೇವೇಂದ್ರ, ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಟ ಅನಿವಾರ್ಯ. ರಾಜ್ಯದ ಎಲ್ಲ ಸರ್ಕಾರಿ ನೌಕರರೂ ಮುಷ್ಕರಕ್ಕೆ ಬೆಂಬಲಿಸಬೇಕು. ಅಮಾನತು ವರ್ಗಾವಣೆ ಅಥವಾ ಎಸ್ಮಾ ಜಾರಿ ಸೇರಿ ಯಾವುದೇ ಒತ್ತಡ ಬೆದರಿಕೆಗೂ ಬಗ್ಗದೇ ಕರ್ತವ್ಯವನ್ನು ಬಹಿಷ್ಕರಿಸಿ ಚಳುವಳಿ ನಡೆಸಬೇಕು
-ಷಡಕ್ಷರಿ ಸರ್ಕಾರಿ ನೌಕರರ ಸಂಘ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT