ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರಸಿಂಹರಾಜಪುರ: ಹಂದೂರು ಸಂಪರ್ಕ ಸೇತುವೆ ಕಾಮಗಾರಿ ಚುರುಕು

ತ್ವರಿತವಾಗಿ ಕಾಮಗಾರಿ ಮುಗಿಸಲು ಮುಖ್ಯಮಂತ್ರಿ ಸೂಚನೆ
Published 1 ಜೂನ್ 2024, 7:42 IST
Last Updated 1 ಜೂನ್ 2024, 7:42 IST
ಅಕ್ಷರ ಗಾತ್ರ

ನರಸಿಂಹರಾಜಪುರ: ತಾಲ್ಲೂಕು ಕೇಂದ್ರದಿಂದ ಹೊನ್ನೆಕೂಡಿಗೆ ಗ್ರಾಮ ಪಂಚಾಯಿತಿಗೆ ಸೇರಿದ ಹಂದೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಭದ್ರಾ ಹಿನ್ನೀರಿಗೆ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಚುರುಕುಗೊಂಡಿದೆ.

2016ರಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಟ್ಟಣಕ್ಕೆ ಭೇಟಿ ನೀಡಿದ್ದಾಗ ಆಗ ವಿಧಾನಪರಿಷತ್ ಸದಸ್ಯರಾಗಿದ್ದ ಎಂ.ಶ್ರೀನಿವಾಸ್ ಅವರು ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಇದಕ್ಕಾಗಿ ₹4.90 ಕೋಟಿ ಅನುದಾನ ಬಿಡುಗಡೆಯಾಗಿತ್ತು. 2017ರಲ್ಲಿ ಸಿದ್ಧರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದ್ದರು. ಸೇತುವೆ ನಿರ್ಮಾಣಕ್ಕೆ ₹20ಕೋಟಿ ವೆಚ್ಚ ತಗಲುತ್ತದೆ ಎಂದು ತಾಂತ್ರಿಕ ಸಮಿತಿ ವರದಿ ನೀಡಿತ್ತು. ನಂತರ ಸೇತುವೆ ನಿರ್ಮಾಣಕ್ಕೆ ₹34.85ಕೋಟಿ ಅನುದಾನ ಬಿಡುಗಡೆಯಾಯಿತು.2018ರಲ್ಲಿ ಆರಂಭವಾಗಿದ್ದ ಕಾಮಗಾರಿ 2021ರಲ್ಲಿ ಪೂರ್ಣಗೊಳ್ಳಬೇಕಾಗಿತ್ತು. ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕಾಮಗಾರಿ ಕುಂಟುತ್ತಾ ಸಾಗಿತ್ತು.

ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಎಂ.ಶ್ರೀನಿವಾಸ್ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾದ ಮೇಲೆ ಸಂಬಂಧಪಟ್ಟ ಇಲಾಖೆಗೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಮೂಲಕ ಸೂಚನೆ ನೀಡಿದ್ದು, ಈಗ ಸೇತುವೆ ನಿರ್ಮಾಣದ ಕಾಮಗಾರಿ ತ್ವರಿತವಾಗಿ ನಡೆದಿದೆ.

ಸೇತುವೆ ನಿರ್ಮಾಣಕ್ಕಾಗಿ ಈಗಾಗಲೇ 14 ಪಿಲ್ಲರ್‌ಗಳ ಕಾಮಗಾರಿ ಪೂರ್ಣಗೊಂಡಿದೆ. ಪಿಲ್ಲರ್‌ಗಳ ಮೇಲೆ ಗಟರ್‌ ಅಳವಡಿಸುವ ಕಾರ್ಯ ಆರಂಭವಾಗಿದ್ದು 42 ಗಟರ್‌ಗಳಲ್ಲಿ ಈಗಾಲೇ 12ಕ್ಕೂ ಹೆಚ್ಚು ಗಟರ್‌ಗಳನ್ನು ಅಳವಡಿಸಲಾಗಿದೆ. ಇನ್ನು ಒಂದು ವಾರ ಮಳೆ ಬಾರದಿದ್ದರೆ ಪಿಲ್ಲರ್‌ಗಳಿಗೆ ಗಟರ್ ಅಳವಡಿಸುವ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕಾಮಗಾರಿಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವವರು ಹೇಳಿದರು.

ಸೇತುವೆ ಕಾಮಗಾರಿ ಪೂರ್ಣಗೊಂಡರೆ ಹೊನ್ನೆಕೂಡಿಗೆ ಗ್ರಾಮ ಪಂಚಾಯಿತಿಯ ಬಹುತೇಕ ಗ್ರಾಮದ ಜನರು 10 ಕಿ.ಮೀ ಅಂತರದಲ್ಲಿ ತಾಲ್ಲೂಕು ಕೇಂದ್ರ ತಲುಪಬಹುದು ಎಂದು ಸ್ಥಳೀಯ ನಿವಾಸಿ ಸುನಿಲ್ ಕುಮಾರ್ ಹೇಳಿದರು.

ಸೇತುವೆ ಕಾಮಗಾರಿ ಭದ್ರಾ ಹಿನ್ನೀರಿನ ಪ್ರದೇಶದಲ್ಲಿ ನಡೆಯುತ್ತಿರುವುದರಿಂದ ಹಾಗೂ ಭದ್ರಾ ಹಿನ್ನೀರು ಕಡಿಮೆಯಾಗಿರುವುದರಿಂದ ಸುತ್ತಲೂ ಉತ್ತಮವಾದ ಪರಿಸರ ಇರುವುದರಿಂದ ಈ ಸ್ಥಳವು ಪ್ರಸ್ತುತ ಜನಾಕರ್ಷಣೆಯ ಕೇಂದ್ರವಾಗಿದ್ದು ಜನರು ಸೇತುವೆ ಕಾಮಗಾರಿ ವೀಕ್ಷಿಸಲು ತಂಡಗಳಲ್ಲಿ ಬರುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಸೇತುವೆ ಕಾಮಗಾರಿ ತ್ವರಿತಗೊಳಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಒಂದು ವಾರದಲ್ಲಿ ಸೇತುವೆಗೆ ಗಟರ್‌ಗಳನ್ನು ಅಳವಡಿಸುವ ಕಾಮಗಾರಿ ಪೂರ್ಣಗೊಳ್ಳಲಿದೆ. ಪ್ರತಿನಿತ್ಯ ಕಾಮಗಾರಿಯ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. 2024ರ ಡಿಸೆಂಬರ್ ಅಂತ್ಯದೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳಿಸಿ ಸಂಚಾರ ಮುಕ್ತಗೊಳಿಸಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ’ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT