ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶ್ರಯ ನಿವೇಶನ; ಸಮಸ್ಯೆ ಪರಿಹಾರ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಭರವಸೆ
Last Updated 21 ಸೆಪ್ಟೆಂಬರ್ 2021, 16:22 IST
ಅಕ್ಷರ ಗಾತ್ರ

ಕೊಪ್ಪ: ‘ಆಶ್ರಯ ನಿವೇಶನ ಸಮಸ್ಯೆ ಬಗೆಹರಿಸಲು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕೊಪ್ಪ, ಎನ್.ಆರ್.ಪುರ, ಶೃಂಗೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಸುದ್ದಿಗೋಷ್ಠಿ ನಡೆಸಿದ ಅವರು, ‘ಆಶ್ರಯ ನಿವೇಶನ ಹಂಚಿಕೆ ಮಾಡಲು ತೊಡಕಾಗಿರುವ ಸೆಕ್ಷನ್ 4, ಡೀಮ್ಡ್ ಫಾರೆಸ್ಟ್, ಮೀಸಲು ಅರಣ್ಯ ಇತರೆ ತೊಡಕುಗಳ ನಿವಾರಣೆಗಾಗಿ ಈಗಾಗಲೇ ಜಿಲ್ಲಾಧಿಕಾರಿ, ಅಧಿಕಾರಿಗಳ ಜತೆಯಲ್ಲಿ ಚರ್ಚೆ ನಡೆಸಲಾಗಿದೆ’ ಎಂದರು.

‘ವಿವಿಧ ತೊಡಕುಗಳ ಕಾರಣದಿಂದ ನಿವೇಶನ ರಹಿತರಿಗೆ ನಿವೇಶನ ನೀಡಲಾಗುತ್ತಿಲ್ಲ. ಗ್ರಾಮ ಪಂಚಾಯಿತಿ ಹದ್ದುಬಸ್ತಿನಲ್ಲಿ ಆಸ್ತಿಗಳು ಇವೆ. ಆದರೆ ಅದರ ಉಪಯೋಗವಾಗುತ್ತಿಲ್ಲ. ಸೆಕ್ಷನ್ 4 ಕುರಿತ ಸಮಸ್ಯೆ ಬಗೆಹರಿಸಲು ಸರ್ಕಾರ ಅರಣ್ಯ ವ್ಯವಸ್ಥಾಪನಾಧಿಕಾರಿಯೊಬ್ಬರನ್ನು ನೇಮಿಸಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಅಗತ್ಯವಿರುವ ಜಾಗವನ್ನು ಗುರುತಿಸಿ, ಸೆಕ್ಷನ್ 4ನಿಂದ ಕೈಬಿಡಲು ಆಕ್ಷೇಪಣೆ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.

‘ಜಲಜೀವನ್ ಮಿಷನ್ ಯೋಜನೆಗೆ 25ರಂದು ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ. ಭೂಮಿಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆ ಅಡಿಯಲ್ಲಿ ಪ್ರತಿ ಮನೆಗೂ ಕುಡಿಯುವ ನೀರನ್ನು ಸರಬರಾಜು ಮಾಡುವುದಾಗಿದ್ದು, ಜಿಲ್ಲೆಯಲ್ಲಿ 3,000 ಗ್ರಾಮ ಹಾಗೂ ಕೊಪ್ಪ ತಾಲ್ಲೂಕಿನಲ್ಲಿ 182 ಗ್ರಾಮಗಳನ್ನು ಪಟ್ಟಿ ಮಾಡಲಾಗಿದೆ’ ಎಂದು ವಿವರಿಸಿದರು.

‘ಗ್ರಾಮದ ರಸ್ತೆಗಳ ಇಕ್ಕೆಲಗಳಲ್ಲಿ ಬೆಳೆದಿರುವ ಕಳೆ ಗಿಡಗಳನ್ನು ತೆರವು ಮಾಡಲು ನಿರ್ಮಲ ಗ್ರಾಮ ಘಟಕಗಳನ್ನು ತೆರೆದು ವರ್ಷಕ್ಕೆ ಮೂರು ಭಾರಿ ಅಭಿಯಾನದ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಸರ್ಕಾರದ ಯೋಜನೆ ಸಮರ್ಪಕವಾಗಿ ಜನರನ್ನು ತಲುಪುತ್ತಿದೆಯೇ ಎಂಬುದನ್ನು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಿದ್ದೇನೆ’ ಎಂದು ತಿಳಿಸಿದರು.

ಕೊಪ್ಪ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಡಿ.ನವೀನ್ ಕುಮಾರ್, ಎನ್.ಆರ್.ಪುರ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನಯನ, ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೆ.ಇ.ಜಯರಾಮ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT