ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

Published 12 ಮಾರ್ಚ್ 2024, 2:40 IST
Last Updated 12 ಮಾರ್ಚ್ 2024, 2:40 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಗೆ ಅನುಗುಣವಾಗಿ ಸರ್ಕಾರಿ ಇಲಾಖೆ, ಉದ್ಯಮ, ಮಳಿಗೆ ಸೇರಿ ವಿವಿಧ ಕಡೆ ಅಳವಡಿಸುವ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಮೀನಾನಾಗರಾಜ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯ ಬಳಕೆ ಕುರಿತು ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಕನ್ನಡ ಭಾಷೆ ಕಡ್ಡಾಯವಾಗಿ ಅನುಷ್ಠಾನಗೊಳಿಸುವ ಕುರಿತು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ – 2022 ಮತ್ತು ತಿದ್ದುಪಡಿ 2024ನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಶೈಕ್ಷಣಿಕ ಸಂಸ್ಥೆಗಳು, ಬ್ಯಾಂಕ್‍ಗಳು, ಇತರೆ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು, ಹೋಟೆಲ್‍ಗಳ ನಾಮಫಲಕಗಳು ಮತ್ತು ಫಲಕದಲ್ಲಿರುವ ಹೆಸರುಗಳು ಮೇಲಿನ ಅರ್ಧಭಾಗ ಕಡ್ಡಾಯವಾಗಿ ಕನ್ನಡದಲ್ಲಿ ಶೇ. 60, ಇತರೆ ಭಾಷೆ ಶೇ. 40 ಇರಬೇಕು. ಇದನ್ನು ಪ್ರತಿಯೊಬ್ಬರು ತಪ್ಪದೇ ಪಾಲಿಸಬೇಕು ಎಂದರು.

ರಸ್ತೆಗಳು ಮತ್ತು ಬಡಾವಣೆ ಪ್ರದೇಶಗಳ ಹೆಸರು, ಸರ್ಕಾರಿ ಅಥವಾ ಸ್ವಯತ್ತ ಪ್ರಾಧಿಕಾರದ ಟೆಂಡರ್ ಅಧಿಸೂಚನೆ, ಜಾಹೀರಾತು, ಅರ್ಜಿ ನಮೂನೆ, ಡಿಜಿಟಲ್ ನಮೂನೆ, ಪ್ರಮಾಣ ಪತ್ರ ಮತ್ತು ಅಧಿಸೂಚನೆಗಳು, ಸರ್ಕಾರ, ಸ್ಥಳೀಯ ಪ್ರಾಧಿಕಾರ, ಅನುದಾನಿತ ಅಥವಾ ಅನುದಾನ ರಹಿತ ಸಂಸ್ಥೆಗಳು ನಡೆಸುವ ಕಾರ್ಯಕ್ರಮಗಳ ಕುರಿತ ಕರಪತ್ರ, ಬ್ಯಾನರ್, ಪ್ಲೆಕ್ಸ್, ಎಲೆಕ್ಟ್ರಾನಿಕ್ ಪ್ರದರ್ಶನ ಫಲಕ, ಮಾಹಿತಿಗಳು, ನೋಟಿಸ್‍ಗಳು ಕನ್ನಡದಲ್ಲಿಯೇ ಇರಬೇಕು ಎಂದು ಹೇಳಿದರು.

ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಕೈಗಾರಿಕೆ ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆ ಸಾಧ್ಯವಾದಷ್ಟು ಕನ್ನಡದಲ್ಲಿ ಇರುವಂತೆ ನೋಡಿಕೊಳ್ಳಬೇಕು. ಯಾವುದೇ ಕೈಗಾರಿಕೆ, ಅಂಗಡಿ, ಫಾರ್ಮ್ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕ ಅಥವಾ ಉಸ್ತುವಾರಿ ವ್ಯಕ್ತಿಗಳು ಕನ್ನಡ ಭಾಷೆ ಅನುಷ್ಠಾನಗೊಳಿಸುವಲ್ಲಿ ವಿಫಲರಾದರೆ ಸಂಬಂಧಪಟ್ಟ ಸಂಸ್ಥೆ ಹಾಗೂ ವ್ಯಕ್ತಿ ವಿರುದ್ಧ ನಿಯಮಾನುಸಾರ ದಂಡ ವಿಧಿಸಿ ಪರವಾನಗಿ ರದ್ದುಪಡಿಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ. ಗೋಪಾಲಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ರಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ನಗರಸಭೆ ಆಯುಕ್ತ ಎಚ್‌.ಟಿ. ಕೃಷ್ಣಮೂರ್ತಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT