ಭಾನುವಾರ, ಜುಲೈ 3, 2022
27 °C
ಕೊಪ್ಪ: ಬಿಜೆಪಿಯ ‘ಜನಸೇವಕ್’ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಅಶೋಕ್

ಕಸ್ತೂರಿರಂಗನ್‌ ವರದಿ ತಿರಸ್ಕಾರ, ಕೇಂದ್ರಕ್ಕೆ ಪತ್ರ: ಸಚಿವ ಆರ್.ಅಶೋಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪ: ‘ಕಸ್ತೂರಿರಂಗನ್ ವರದಿ ಜಾರಿಯಿಂದ ಹಳ್ಳಿಗಳ ಅಭಿವೃದ್ಧಿ ಅಸಾಧ್ಯ. ಆದ್ದರಿಂದ ವರದಿ ತಿರಸ್ಕರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಮೂಲಕ ಪತ್ರ ಬರೆಯಲಾಗಿದೆ. ಸುಪ್ರೀಂ ಕೋರ್ಟ್‌ಗೆ ಎಸ್‌ಎಲ್‌ಪಿ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸರ್ಕಾರ ಅನುಮತಿ ನೀಡಿದೆ’ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಬಿಜೆಪಿ ತಾಲ್ಲೂಕು ಘಟಕದ ವತಿಯಿಂದ ಭಾನುವಾರ ಪಟ್ಟಣದ ಪುರಭವನದಲ್ಲಿ ಹಮ್ಮಿಕೊಂಡಿದ್ದ ‘ಜನ ಸೇವಕ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾಫಿ ಒತ್ತುವರಿಯ ಪ್ರದೇಶವನ್ನು ಕೇರಳ ಮಾದರಿಯಲ್ಲಿ ಲೀಸ್ ಕೊಡುವ ಬಗ್ಗೆ ದಾಖಲಾತಿಗಳನ್ನು ತರಿಸುತ್ತಿದ್ದೇನೆ. ಆ ಮಾದರಿ ಅನುಸರಿಸುವುದರಿಂದ ಸರ್ಕಾರಕ್ಕೆ ಆದಾಯ ಸಿಗುವುದ ರೊಂದಿಗೆ, ರೈತರಿಗೂ ಅನುಕೂಲ ವಾಗಲಿದೆ’ ಎಂದು ತಿಳಿಸಿದರು.

‘ಭೂ ಕಬಳಿಕೆ ನಿಷೇಧ ಕಾಯ್ದೆ ಜಾರಿಯನ್ನು ಗ್ರಾಮೀಣ ಪ್ರದೇಶ ಹೊರತುಪಡಿಸಿ, ನಗರ ಪ್ರದೇಶಕ್ಕೆ ಸೀಮಿತಗೊಳಿಸುವ ನಿಟ್ಟಿನಲ್ಲಿ ಕಳೆದ ವಿಧಾನಸಭೆಯಲ್ಲಿ ಚರ್ಚೆಯಾಗಿದ್ದು, ಮುಂದಿನ ಅಧಿವೇಶನದಲ್ಲಿ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾದ ಕಡೂರು ಶಾಸಕ ಬೆಳ್ಳಿ ಪ್ರಕಾಶ್, ‘ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತವರು, ಜನ ಸೇವೆಯಲ್ಲಿ ತೊಡಗಿಸಿಕೊಂಡರೆ ಮುಂದೆ ಗೆಲವು ಖಚಿತ’ ಎಂದರು.

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ತರೀಕೆರೆ ಶಾಸಕ ಸುರೇಶ್, ‘ಜಿಲ್ಲೆಯ 123 ಸಹಕಾರ ಸಂಘಗಳಿಗೆ ಹೆಚ್ಚುವರಿ ಸಾಲದ ಬೇಡಿಕೆಗೆ ಸ್ಪಂದಿಸಿ, ಒಟ್ಟು 128 ಕೋಟಿ ಸಾಲ ನೀಡಲಾಗಿದೆ’ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಮಾತನಾಡಿ, ‘ಪಂಚಾಯಿತಿ ಚುನಾವಣೆ ಪರಾಜಿತ ಅಭ್ಯರ್ಥಿಗಳು ವಿಚಲಿತರಾಗಬಾರದು. ಮೋದಿ ಅಧಿಕಾರಕ್ಕೆ ಬಂದ ನಂತರ ಕೇಂದ್ರದ ಅನುದಾನ ನೇರವಾಗಿ ಗ್ರಾಮ ಪಂಚಾಯಿತಿಗೆ ಹೋಗುವಂತೆ ಮಾಡಿದರು. ಮಧ್ಯವರ್ತಿಗಳ ಹಾವಳಿ ತಡೆದಿದ್ದಾರೆ’ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಅಭಿನಂದಿಸಲಾಯಿತು. ಮಂಡಲ ಬಿಜೆಪಿ ಅಧ್ಯಕ್ಷ ಅದ್ದಡ ಸತೀಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ದಿವ್ಯಾ ದಿನೇಶ್, ಎಸ್.ಎನ್.ರಾಮಸ್ವಾಮಿ, ಕವಿತಾ ಲಿಂಗರಾಜು, ತಾಲ್ಲೂಕು ಪಂಚಾ ಯಿತಿ ಅಧ್ಯಕ್ಷೆ ಜಯಂತಿ ನಾಗರಾಜ್, ಉಪಾಧ್ಯಕ್ಷೆ ಜೆ.ಎಸ್.ಲಲಿತಾ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಜಾತಾ, ಉಪಾಧ್ಯಕ್ಷೆ ರೇಖಾ, ಮ್ಯಾಮ್ಕೋಸ್ ಉಪಾಧ್ಯಕ್ಷ ವೈ.ಎಸ್.ಸುಬ್ರಹ್ಮಣ್ಯ, ಎಚ್.ಕೆ.ದಿನೇಶ್ ಹೊಸೂರು, ಜೆ.ಪುಣ್ಯಪಾಲ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು