ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಫಿ ಸಣ್ಣ ಬೆಳೆಗಾರರಿಗೆ ಕೃಷಿ ಸಿಂಚಾಯಿ: ಸಚಿವೆ ಶೋಭಾ ಕರಂದ್ಲಾಜೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ
Last Updated 19 ಆಗಸ್ಟ್ 2021, 1:12 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಕೃಷಿ ಸಿಂಚಾಯಿ ಯೋಜನೆಯನ್ನು ಕಾಫಿ ಸಣ್ಣ ಬೆಳೆಗಾರರಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಲ್ಲಿ ಬುಧವಾರ ತಿಳಿಸಿದರು.

‘ಐದು ಎಕರೆವರೆಗೆ ಕಾಫಿ ತೋಟವಿರುವ ಬೆಳೆಗಾರರನ್ನು ಸಿಂಚಾಯಿ ಯೋಜನೆಯ ಹನಿ ನೀರಾವರಿಗೆ ಜೋಡಿಸಬೇಕು, ಸಹಾಯ ಧನ ಒದಗಿಸಬೇಕು ಎಂದು ತೀರ್ಮಾನಿಸಲಾಗಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಶಿವಮೊಗ್ಗದ ಕೃಷಿ ವಿಶ್ವವಿದ್ಯಾಲಯದವರು ತರೀಕೆರೆ ತಾಲ್ಲೂಕಿನ ಬಾವಿಕೆರೆಯಲ್ಲಿ ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ಸ್ಥಾಪನೆ ಪ್ರಸ್ತಾವ ಸಲ್ಲಿಸಿದ್ದಾರೆ. ಅನುಮೋದನೆಗೆ ಕ್ರಮ ವಹಿಸುತ್ತೇನೆ. ಜಿಲ್ಲೆಯಲ್ಲಿ ಸ್ಪೈಸ್‌ ಪಾರ್ಕ್‌ ಸ್ಥಾಪನೆಗೆ ಹೊಸಕೋಟೆ ಬಳಿ ಜಾಗ ಗುರುತಿಸಲಾಗಿದೆ. ತೆಂಗು ಅಭಿವೃದ್ಧಿ ಮಂಡಳಿಗೆ ರೈತನನ್ನೇ ಅಧ್ಯಕ್ಷರನ್ನಾಗಿ ನೇಮಿಸಲು ತೀರ್ಮಾನಿಸಲಾಗಿದೆ. ತೆಂಗು ಉತ್ಪನ್ನಗಳ ರಫ್ತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

‘ರೈತರು ಕೃಷಿ ಜತೆಗೆ ಉಪಕಸಬು ಮಾಡುವಂತೆ ಪ್ರೋತ್ಸಾಹಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಅನುದಾನ ಮೀಸಲಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ರೈತರ ಜಮೀನಿನಲ್ಲಿನ ಮರಗಳನ್ನು ಕಡಿಯಲು ಅವಕಾಶ ಇಲ್ಲ. ಬೇರೆ ರಾಜ್ಯಗಳಲ್ಲಿ ಇದು ಇಲ್ಲ. ನಮ್ಮ ರಾಜ್ಯದಲ್ಲೂ ಈ ಕಾನೂನು ಸಡಿಲಿಸುವಂತೆ ಅರಣ್ಯ ಸಚಿವ ಉಮೇಶ್‌ ಕತ್ತಿ ಅವರೊಂದಿಗೆ ಚರ್ಚಿಸಲಾಗಿದೆ’ ಎಂದರು.

‘ದೇಶದಲ್ಲಿ 10 ಸಾವಿರ ‘ರೈತ ಉತ್ಪಾದಕ ಸಂಘಟನೆ’ (ಎಫ್‌ಪಿಒ) ಆರಂಭಿಸಲು ಉದ್ದೇಶಿಸಲಾಗಿದೆ. ಕೃಷಿ ಮೂಲಸೌಕರ್ಯ ಅಭಿವೃದ್ಧಿ ನಿಧಿಯಲ್ಲಿ ₹1 ಲಕ್ಷ ಕೋಟಿ ಅನುದಾನ ಮೀಸಲಿಡಲಾಗಿದೆ. ಕೃಷಿಗೆ ಸಂಬಂಧಿಸಿದ 25 ಯೋಜನೆಗಳ ಅನುಷ್ಠಾನಕ್ಕೆ ಅನುದಾನ ಬಳಕೆಗೆ ಅವಕಾಶ ಇದೆ’ ಎಂದು ತಿಳಿಸಿದರು.

ಬೆಳೆ ವಿಮೆ‌

ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ಮೂರು ವರ್ಷದಲ್ಲಿ 21 ಕೋಟಿ ರೈತರಿಗೆ ₹ 1.57 ಲಕ್ಷ ಕೋಟಿ ನೆರವನ್ನು ಖಾತೆಗೆ ಜಮೆ ಮಾಡಲಾಗಿದೆ. ಬೆಳೆ ವಿಮೆಗೆ ಸಂಬಂಧಿಸಿದಂತೆ ದೂರುಗಳಿದ್ದರೆ ಬೆಳೆ ಅವಧಿಯ ಎರಡು ತಿಂಗಳೊಳಗೆ ದಾಖಲಿಸಬೇಕು ಎಂದರು.

ಕಾಫಿ ಮಂಡಳಿ ಅಧ್ಯಕ್ಷರಾಗಿ ಎಂ.ಎಸ್‌.ಭೋಜೇಗೌಡ ಅವರು ಎರಡನೇ ಅವಧಿಗೆ ಮುಂದುವರಿದಿದ್ದಾರೆ. ಕೃಷಿ ಉತ್ಪನ್ನಗಳ ರಫ್ತು ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯಲ್ಲಿ ಪ್ರತ್ಯೇಕ ಘಟಕ ವ್ಯವಸ್ಥೆ ಕಲ್ಪಿಸಬೇಕು ಎಂದು ಕೋರಿಕೆ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಮೃತಪಟ್ಟ ಐವರು ಕೋವಿಡ್‌ ವಾರಿಯರ್‌ಗಳಿಗೆ ತಲಾ ₹ 50 ಲಕ್ಷ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.

ಶಾಸಕರಾದ ಡಿ.ಎಸ್‌.ಸುರೇಶ್‌, ಬೆಳ್ಳಿ ಪ್ರಕಾಶ್‌, ಎಂ.ಪಿ.ಕುಮಾರಸ್ವಾಮಿ, ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್‌ , ಮುಖಂಡ ಜೀವರಾಜ್‌, ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್‌.ಭೋಜೇಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಸಿ.ಕಲ್ಮರುಡಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT