ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು | ಬಾಲಕಾರ್ಮಿಕರ ಕೆಲಸಕ್ಕೆ ನೇಮಿಸಿಕೊಂಡರೆ ಕಾನೂನು ಕ್ರಮ- ಡಿ.ಸಿ

Published 1 ಜೂನ್ 2024, 14:02 IST
Last Updated 1 ಜೂನ್ 2024, 14:02 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಯಾವುದೇ ಕಾರ್ಖಾನೆ ಅಥವಾ ಅಂಗಡಿಗಳಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾರ್ಮಿಕರ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಶನಿವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

18 ವರ್ಷ ವಯಸ್ಸಿನೊಳಗಿನ ಮಕ್ಕಳನ್ನು ಯಾವುದೇ ವಾಣಿಜ್ಯ ಉದ್ದಿಮೆ, ಹೋಟೆಲ್, ಗ್ಯಾರೇಜ್‍ಗಳು, ಕಾಫಿ ಪ್ಲಾಂಟೇಷನ್ ಮತ್ತಿತರ ಪ್ರದೇಶಗಳಲ್ಲಿ ನೇಮಕ ಮಾಡಿಕೊಳ್ಳುವಂತಿಲ್ಲ. ಈ ಬಗ್ಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ತಪಾಸಣೆ ಕೈಗೊಂಡು ಕ್ರಮಕೈಗೊಳ್ಳಬೇಕು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂಗಡಿ ವಾಣಿಜ್ಯ ಸಂಸ್ಥೆಗಳಿಗೆ ಪರವಾನಿಗೆ ನೀಡುವಾಗ ಮಾಲೀಕರಿಗೆ ಬಾಲ ಮತ್ತು ಕಿಶೋರ ಕಾರ್ಮಿಕನನ್ನು ನೇಮಿಸಿಕೊಳ್ಳದಂತೆ ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಈವರೆಗೆ 2,176 ಸಾರಿ ತಪಾಸಣೆ ನಡೆಸಿ 23 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಈ ಪೈಕಿ 22 ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳಲಾಗಿದ್ದು 10 ಪ್ರಕರಣಗಳಲ್ಲಿ ದಂಡ ಹಾಕಲಾಗಿದೆ. ಇದೇ 12ರಂದು ಬಾಲ ಕಾರ್ಮಿಕರ ನಿರ್ಮೂಲನ ದಿನ ಕಾರ್ಯಕ್ರಮವಿದ್ದು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದರು. 

ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹನುಮಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಸಹಾಯಕ ಕಾರ್ಮಿಕ ಆಯುಕ್ತ ಕೆ.ಎಲ್. ರವಿಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT