ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ಅಭಿವೃದ್ಧಿಗೆ ನರೇಗಾ ನೆರವು

ಅರಣ್ಯೀಕರಣ, ಕಾಂಪೌಂಡ್, ಶೌಚಾಲಯ, ಆಟದ ಮೈದಾನ ನಿರ್ಮಾಣ
Last Updated 3 ಸೆಪ್ಟೆಂಬರ್ 2022, 16:34 IST
ಅಕ್ಷರ ಗಾತ್ರ

ತರೀಕೆರೆ: ತಾಲ್ಲೂಕಿನ ಸೌಲಭ್ಯ ವಂಚಿತ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ಆಸರೆಯಾಗಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಶಾಲಾ ಕೈತೋಟ, ಹಸಿರು ಗ್ರಾಮ ಯೋಜನೆಯಲ್ಲಿ ಅರಣ್ಯೀಕರಣ, ಶಾಲೆಯ ಕಾಂಪೌಂಡ್, ಶೌಚಾಲಯ, ಆಟದ ಮೈದಾನ, ಬಿಸಿಯೂಟದ ದಾಸೋಹ ಭವನವನ್ನು ನರೇಗಾ ಅಡಿಯಲ್ಲಿ ನಿರ್ಮಿಸುತ್ತಿರುವುದು ಸರ್ಕಾರಿ ಶಾಲೆಗಳಿಗೆ ಪುನರುಜ್ಜೀವನ ನೀಡಿದಂತಾಗಿದೆ.

ತಾಲ್ಲೂಕಿನ ಹಾದೀಕೆರೆ ಗ್ರಾಮ ಪಂಚಾಯಿತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ₹11 ಲಕ್ಷ ವೆಚ್ಚದಲ್ಲಿ ಶಾಲಾ ಆವರಣದ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ. ಇದೇ ಶಾಲೆಯಲ್ಲಿ ₹ 5 ಲಕ್ಷ ವೆಚ್ಚದಲ್ಲಿ ವಾಲಿಬಾಲ್ ಕೋರ್ಟ್‌ ನಿರ್ಮಾಣವಾಗಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡಲು ಶಾಲಾ ಕೈತೋಟ, ಹಸಿರು ಗ್ರಾಮ ಅಭಿಯಾನದಲ್ಲಿ ಶಾಲೆಯಲ್ಲಿ ಅರಣ್ಯೀಕರಣಕ್ಕೆ ಒತ್ತು ನೀಡಲಾಗಿದೆ. ಬಿಸಿಯೂಟ ತಯಾರಿಸಲು ₹ 16 ಲಕ್ಷ ವೆಚ್ಚದಲ್ಲಿ ದಾಸೋಹ ಭವನ ನಿರ್ಮಾಣವಾಗುತ್ತಿದೆ. ಸ್ಥಳೀಯ ಕಾರ್ಮಿಕರಿಗೆ ಉದ್ಯೋಗ ಒದಗಿಸುವ ಜೊತೆಗೆ ಸರ್ಕಾರಿ ಶಾಲೆಗಳಿಗೆ ಭೌತಿಕ ಸೌಲಭ್ಯಗಳಿಗೆ ಆದ್ಯತೆ ನೀಡಿಲು ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೂಳಿಸಲಾಗಿದೆ ಎನ್ನುತ್ತಾರೆ ಪಿಡಿಒ ಭೈರೇಶ್.

ತಾಲ್ಲೂಕಿನ ನಂದಿಬಟ್ಟಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳ್ಳಾವರ ಮೊರಾರ್ಜಿ ವಸತಿ ಶಾಲೆಯಲ್ಲಿ ಹಸಿರು ಗ್ರಾಮ ಅಭಿಯಾನದಲ್ಲಿ 1,100 ಸಸಿಗಳನ್ನು ನಡೆಲಾಗಿದೆ. ₹ 5 ಲಕ್ಷ ವೆಚ್ಚದಲ್ಲಿ ಶಾಲೆಯಲ್ಲಿ ಆಟದ ಮೈದಾನ ನಿರ್ಮಾಣ ಮಾಡಲಾಗಿದೆ. ಲಿಂಗದಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ₹ 10 ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾದ ಥ್ರೋ ಬಾಲ್, ಬಾಸ್ಕೆಟ್ ಬಾಲ್ ಕೋರ್ಟ್‌ ಮಾಡಲಾಗಿದೆ. ಪ್ರಾಥಮಿಕ ಶಾಲೆಯಲ್ಲಿ ದಾಸೋಹ ಭವನ ನಿರ್ಮಾಣಕ್ಕೆ ₹ 16 ಲಕ್ಷದ ಕ್ರಿಯಾಯೋಜನೆಗೆ ಅನುಮೋದನೆ ದೊರೆತಿದೆ.

ತಾಲ್ಲೂಕಿನ ದೋರನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರೌಢಶಾಲೆಗೆ ₹ 10 ಲಕ್ಷ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ. ಹಸಿರು ಗ್ರಾಮ ಯೋಜನೆಯಡಿ 1,100 ಸಸಿಗಳನ್ನು ನೆಡಲಾಗುತ್ತಿದೆ. ₹ 5 ಲಕ್ಷ ವೆಚ್ಚದಲ್ಲಿ ಆಟದ ಮೈದಾನ ನಿರ್ಮಿಸಲಾಗಿದೆ. ಶಿಕ್ಷಣ ಇಲಾಖೆಯ ಅನುದಾನದ ಜತೆಗೆ ನರೇಗಾ ಯೋಜನೆಯ ನೆರವು ಶಾಲೆಗಳ ಅಭಿವೃದ್ಧಿಗೆ ಅನುಕೂಲವಾಗಿದೆ ಎಂದು ವಿವರಿಸಿದರು ಶಿಕ್ಷಕ ಓಂಕಾರಸ್ವಾಮಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT