ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿವೃಷ್ಟಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲ

ಪ್ರಕೃತಿ ವಿಕೋಪ ನಿರ್ವಹಣೆಯ ಮುಂಜಾಗ್ರತಾ ಸಭೆಯಲ್ಲಿ ಟಿ.ಡಿ.ರಾಜೇಗೌಡ
Last Updated 5 ಜುಲೈ 2020, 8:47 IST
ಅಕ್ಷರ ಗಾತ್ರ

ನರಸಿಂಹರಾಜಪುರ: ‘ಮಳೆಗಾಲ ಆರಂಭವಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಅತಿವೃಷ್ಟಿ ಅನಾಹುತ ಸಂಭವಿಸಿದರೆ ಅದನ್ನು ಎದುರಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಸನ್ನದ್ಧವಾಗಿರಬೇಕು’ ಎಂದು ಶಾಸಕ ಟಿ.ಡಿ.ರಾಜೇಗೌಡ ಖಡಕ್ ಸೂಚನೆ ನೀಡಿದರು.

ಪ್ರಕೃತಿ ವಿಕೋಪ ನಿರ್ವಹಣೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಲ್ಲಿನ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಅತಿವೃಷ್ಟಿ ಸಂದರ್ಭದಲ್ಲಿ ಅಧಿಕಾರಿಗಳು ಮೊಬೈಲ್ ಸ್ವಿಚ್ ಆಫ್ ಮಾಡಬಾರದು. ಕೊರೊನಾ ವೈರಸ್‌ ಸೋಂಕು ಹರಡುತ್ತಿರುವ ಪ್ರಸ್ತುತ ದಿನಗಳಲ್ಲಿ ಈ ಸವಾಲಿನ ನಡುವೆ ಅತಿವೃಷ್ಟಿಯನ್ನು ಎದುರಿಸುವುದು ಒಂದು ಸವಾಲಾಗಿದ್ದು, ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಅತಿವೃಷ್ಟಿಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ತಾಲ್ಲೂಕು ಕಚೇರಿ, ಮೆಸ್ಕಾಂ ಕಚೇರಿ, ಪಟ್ಟಣ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಅಗ್ನಿಶಾಮಕ ಇಲಾಖೆಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ದೂರವಾಣಿ ಸಂಖ್ಯೆ, ಅಧಿಕಾರಿಗಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ. 15 ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಒಳಗೊಂಡ ಪ್ರಕೃತಿ ವಿಕೋಪ ನಿರ್ವಹಣಾ ತಂಡ ರಚಿಸಲಾಗಿದೆ. ವೈದ್ಯಾಧಿಕಾರಿಗಳ ಮಾಹಿತಿ ಪಡೆಯಲಾಗಿದೆ. ಜೆಸಿಬಿ, ಹಿಟಾಚಿ ಯಂತ್ರಗಳ ಮಾಹಿತಿ ಸಂಗ್ರಹಿಸಲಾಗಿದೆ. 10 ಮುಳುಗು ತಜ್ಞರನ್ನು ಗುರುತಿಸಲಾಗಿದೆ’ ಎಂದುಕಂದಾಯ ಇಲಾಖೆ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

‘ಅತಿವೃಷ್ಟಿ ಸಂಭವಿಸಿದರೆ ಜನರನ್ನು ಸ್ಥಳಾಂತರಿಸಲು ಮುತ್ತಿನಕೊಪ್ಪ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ 12 ಹಾಗೂ ಬಿ.ಕಣಬೂರು ಹೋಬಳಿ ವ್ಯಾಪ್ತಿಯಲ್ಲಿ 11 ಶಾಲೆಗಳನ್ನು, ತಾಲ್ಲೂಕಿನ ವ್ಯಾಪ್ತಿಯಲ್ಲಿ 7 ಸಮುದಾಯ ಭವನಗಳನ್ನು ಗುರುತಿಸಲಾಗಿದೆ. ಪ್ರಕೃತಿ ವಿಕೋಪದಿಂದ ಜಾನುವಾರಿಗೆ ಸಮಸ್ಯೆವುಂಟಾದರೆ ಚಿಕಿತ್ಸೆ ನೀಡಲು ತಾಲ್ಲೂಕಿನ ವ್ಯಾಪ್ತಿಯ 6 ಜನ ಪಶುವೈದ್ಯಾಧಿಕಾರಿಗಳ ಮಾಹಿತಿ ಸಂಗ್ರಹಿಸಲಾಗಿದೆ’ ಎಂದು ಹೇಳಿದರು.

‘ಕೊರೊನಾ ವೈರಸ್‌ ಸೋಂಕಿನ ಜತೆ ಮಳೆಗಾಲದಲ್ಲಿ ಉಲ್ಭಣಿಸುವ ಡೆಂಗಿ, ಮಲೇರಿಯಾ ರೋಗಗಳು ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ನೀರು ಅತಿಯಾಗಿ ನಿಲ್ಲುವ ಸ್ಥಳದಲ್ಲಿ ಲಾರ್ವ ಮೀನುಗಳನ್ನು ಬಿಡಲಾಗಿದೆ. ಆಸ್ಪತ್ರೆಯ ಸಿಬ್ಬಂದಿಯನ್ನು ವಿಪತ್ತು ನಿರ್ವಹಣೆಗೆ ತರಬೇತಿಗೊಳಿಸಲಾಗಿದೆ. ಕೊರೊನಾ ಸೋಂಕು ಉಲ್ಭಣಗೊಂಡರೆ ಇದಕ್ಕಾಗಿ 30 ಹಾಸಿಗೆಗಳನ್ನು ಮೀಸಲಿಡಲು ಕ್ರಿಯಾಯೋಜನೆ ರೂಪಿಸಲಾಗಿದೆ’ ಎಂದು ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ.ವೀರಪ್ರಸಾದ್ ತಿಳಿಸಿದರು.

‘ಭಂಡಿಮಠದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 16 ಮನೆಗಳಿಗೆ ಪರಿಹಾರ ಬಂದಿಲ್ಲ. ಗಡಿಗೇಶ್ವರ ಗ್ರಾಮದಲ್ಲಿ ರಸ್ತೆಯ ಮೇಲೆ ಚರಂಡಿ ನೀರು ಹರಿಯುತ್ತಿದೆ. ಇದರಿಂದ ಮಳೆಗಾಲದಲ್ಲಿ ಮನೆಹಾನಿಯಾಗುವ ಸಾಧ್ಯತೆಯಿದೆ. ಇದರ ಬಗ್ಗೆ ಗಮನಹರಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರವೀಣ್ ಒತ್ತಾಯಿಸಿದರು.

’ಮಡಬೂರು ಗ್ರಾಮಕ್ಕೆ ಹೋಗುವ ಮುಖ್ಯರಸ್ತೆಯ ಎರಡು ಬದಿ ಮಣ್ಣು ಕುಸಿದು ಮರ ಉರುಳಿ ಬೀಳುವ ಸಾಧ್ಯತೆ ಇದೆ. ಇದರ ಬಗ್ಗೆ ಗಮನಹರಿಸಿಲ್ಲ’ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಪ್ರಶಾಂತ್ ಶೆಟ್ಟಿ ಗಮನಸೆಳೆದರು.

ರಸ್ತೆ ಬದಿಯಲ್ಲಿ ಒಣಗಿರುವ, ಬೀಳುವ ಸ್ಥಿತಿಯಲ್ಲಿರುವ ಮರಗಳನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಬೇಕು. ಒಂದು ವೇಳೆ ನಿರ್ಲಕ್ಷ್ಯವಹಿಸಿ ಅನಾಹುತ ಸಂಭವಿಸಿದರೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಮೊಕದ್ದಮೆ ದಾಖಲಿಸಲಾಗುವುದು ಎಂದು ಶಾಸಕರು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಪಿ.ಆರ್.ಸದಾಶಿವ, ಚಂದ್ರಮ್ಮ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಈ.ಸಿ.ಜಯಶ್ರೀಮೋಹನ್, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎನ್.ನಾಗೇಶ್, ಇಓ ಎಸ್.ನಯನ, ತಹಶೀಲ್ದಾರ್ ಪರಮೇಶ್ವರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT