ಬುಧವಾರ, ನವೆಂಬರ್ 13, 2019
28 °C

ಡಿ.14ರಂದು ರಾಷ್ಟ್ರೀಯ ಮೀನುಗಾರರ ಸ್ವಾಭಿಮಾನಿ ವಿಕಾಸ ಸಮಾವೇಶ

Published:
Updated:
Prajavani

ಚಿಕ್ಕಮಗಳೂರು: ರಾಷ್ಟ್ರೀಯ ಮೀನುಗಾರರ ಸಂಘದ ವತಿಯಿಂದ ಡಿಸೆಂಬರ್ 14ರಂದು ಬೆಂಗಳೂರಿನ ನ್ಯಾಶನಲ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಮೀನುಗಾರರ ಸ್ವಾಭಿಮಾನಿ ವಿಕಾಸ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ದೇವಿಪ್ರಸಾದ್ ಹೇಳಿದರು.

ನಗರದ ಜಿಲ್ಲಾ ಗಂಗಾಮತಸ್ಥರ ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿನ ಮೀನುಗಾರರ ಸಮಸ್ಯೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಳ್ಳುವರು ಎಂದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಡಿ.ರವಿಕುಮಾರ್ ಮಾತನಾಡಿ, ಬೆಸ್ತ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು. ಸಮುದಾಯದ ಜನಪ್ರತಿನಿಧಿಗಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು. ಅಂಬಿಗರ ಚೌಡಯ್ಯ ನಿಗಮಕ್ಕೆ ಹೆಚ್ಚಿನ ಅನುದಾನ ಒದಗಿಸಬೇಕು. ಸಮುದಾಯದ ವಿದ್ಯಾರ್ಥಿನಿಲಯಗಳು, ದೇವಾಲಯಗಳಿಗೆ ಅನುದಾನ ಬಿಡುಗಡೆಗೆ ಸಮಾವೇಶದಲ್ಲಿ ಒತ್ತಾಯಿಸಲಾಗುವುದು ಎಂದರು.

ಜಿಲ್ಲಾ ಗಂಗಾ ಮತಸ್ಥರ ಸಂಘದ ಅಧ್ಯಕ್ಷ ಕೆ.ಎಂ.ಧನಂಜಯ ಮಾತನಾಡಿ, ಸಮುದಾಯದವರು ಸಂಘಟಿತರಾಗಬೆಕು. ಆಗ ಮಾತ್ರ ಸರ್ಕಾರ ಸೌಲಭ್ಯಗಳು ಶೀಘ್ರ ದೊರೆಯಲಿವೆ ಎಂದರು. 
ಸಮಾರಂಭದಲ್ಲಿ ಸಂಘದ ನೂತನ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಾಯಿತು.
ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಕೆ.ರಾಮಣ್ಣ, ಜಿಲ್ಲಾ ಗಂಗಾಮತಸ್ಥರ ಸಂಘದ ಗೌರವಾಧ್ಯಕ್ಷ ಜಿ.ಪುಟ್ಟಪ್ಪ, ಪ್ರಧಾನ ಕಾರ್ಯದರ್ಶಿ ಸಿ.ಟಿ.ಅಶೋಕ್, ತಾಲ್ಲೂಕು ಅಧ್ಯಕ್ಷ ಎ.ಟಿ.ಧರ್ಮೇಶ್, ಪ್ರಧಾನ ಕಾರ್ಯದರ್ಶಿ ಎಂ.ಪಿ.ಗೋಪಾಲ್ ಇದ್ದರು.

 

ಪ್ರತಿಕ್ರಿಯಿಸಿ (+)