ಮಂಗಳವಾರ, ನವೆಂಬರ್ 19, 2019
23 °C
ಚಿಕ್ಕಮಗಳೂರು: ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ, ಆಕ್ರೋಶ

ಅನುದಾನ ಹಿಂಪಡೆಯದಂತೆ ಒತ್ತಾಯ

Published:
Updated:
Prajavani

ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿದ್ದ ಅನುದಾನವನ್ನು ರಾಜ್ಯ ಸರ್ಕಾರ ತರಾತುರಿಯಲ್ಲಿ ಹಿಂಪಡೆಯಲು ಮುಂದಾಗಿದೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಕಾರಣ ನೀಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಮೀಸಲಿರುವ ಹಣವನ್ನು ರಾಜ್ಯ ಸರ್ಕಾರ ಹಿಂಪಡೆಯಲು ಹುನ್ನಾರ ನಡೆಸಿದೆ. ಸರ್ಕಾರದ ವಿರುದ್ಧ ನ್ಯಾಯಾಲಯ ದಲಿತ ದೌರ್ಜನ್ಯ ಕಾಯ್ದೆಯಡಿ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಳ್ಳಬೇಕು. ದಲಿತರಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಮೂಡಿಗೆರೆ ಮಾಜಿ ಶಾಸಕ ಬಿ.ಬಿ.ನಿಂಗಯ್ಯ ಮಾತನಾಡಿ, ಉಪ
ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಮೇಲೆ ದಲಿತರ ಹಿತ ಕಾಯುವ ಜವಾಬ್ದಾರಿ ಇದೆ. ದಲಿತರು ಜಮೀನು ಖರೀದಿಸಲು ಪ್ರೋತ್ಸಾಧನ ನೀಡುವ ನಿಮಿತ್ತ ₹1 ಸಾವಿರ ಕೋಟಿ ಅನುದಾನ ಮೀಸಲಿಡಬೇಕು ಎಂದರು.

ದಲಿತರ ಅಭಿವೃದ್ಧಿಗೆ ಮೀಸಲಿರುವ ಅನುದಾನಕ್ಕೆ ಕೈ ಹಾಕಿರುವ ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುವ ಅಗತ್ಯ ಇದೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳ ಎದುರು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದರು.

ಜೆಡಿಎಸ್‌ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಎಚ್.ದೇವರಾಜ್ ಮಾತನಾಡಿ, ದಲಿತರ ಪ್ರತಿಭಟನೆಗೆ ಕೆಲವರು ಸರ್ಕಾರದ ಪರವಾಗಿ ಪ್ರತಿಕ್ರಿಯಿಸುತ್ತಾರೆ. ಅದಕ್ಕೆಲ್ಲ ದಲಿತರು ತಲೆಕೆಡಿಸಿಕೊಳ್ಳಬಾರದು. ಅವರ ಹಕ್ಕುಗಳಿಗೆ ಹೋರಾಟ ನಡೆಸಬೇಕು ಎಂದರು.

ಬಿಎಸ್‌ಪಿ ಜಿಲ್ಲಾಘಟಕದ ಅಧ್ಯಕ್ಷ ಕೆ.ಟಿ.ರಾಧಕೃಷ್ಣ, ಬಿಡಿಎಸ್‌ಎಸ್ ಸಂಘಟನೆಯ ಜಿಲ್ಲಾ ಸಂಚಾಲಕ ಕೆ.ಜೆ.ಮಂಜುನಾಥ್, ದಲಿತ ಸಂಘರ್ಷ ಸಮಿತಿಯ ಶ್ರೀನಿವಾಸ್, ಕೆ.ಪಿ.ರಾಜ
ರತ್ನಂ, ವಸಂತ್‌ಕುಮಾರ್, ಲೋಕೇಶ್, ಹಿರೇಮಗಳೂರು ರಾಮಚಂದ್ರ ಇದ್ದರು.

ಪ್ರತಿಕ್ರಿಯಿಸಿ (+)