ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಜನರ ಬದುಕು ದುಸ್ತರ

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಟೀಕೆ
Last Updated 11 ಜುಲೈ 2021, 3:20 IST
ಅಕ್ಷರ ಗಾತ್ರ

ಕಡೂರು: ಜೀವನಾವಶ್ಯಕ ಪದಾರ್ಥಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕನ್ನು ದುಸ್ತರಗೊಳಿಸಿರುವುದೇ ಬಿಜೆಪಿ ಸರ್ಕಾರದ ಸಾಧನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಟೀಕಿಸಿದರು.

ಬೆಲೆ ಏರಿಕೆ ವಿರುದ್ಧ ಕಡೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ತೈಲ ಬೆಲೆ ಏರಿಕೆಯಿಂದ ಉಳಿದ ಅವಶ್ಯ ವಸ್ತುಗಳ ಬೆಲೆಯೂ ಹೆಚ್ಚಳ ಗೊಂಡು ಜನರು ತತ್ತರಿಸಿದ್ದಾರೆ. ಕಾಂಗ್ರೆಸ್ ಸರ್ಕಾರವಿದ್ದಾಗ ಆಹಾರ ಭದ್ರತೆಗೆ ಒತ್ತು ನೀಡಲಾಗಿತ್ತು. ಕಡಿಮೆ ಬೆಲೆಯಲ್ಲಿ ಉತ್ತಮ ಆಹಾರ ಸಿಗುವಂತೆ ನೋಡಿಕೊಳ್ಳಲಾಗಿತ್ತು. ಉದ್ಯೋಗ ಖಾತ್ರಿ ಯೋಜನೆ ಇಲ್ಲದಿದ್ದರೆ ಲಾಕ್‌ಡೌನ್ ಸಮಯದಲ್ಲಿ ಬಡವರ ಪರಿಸ್ಥಿತಿ ಏನಾಗುತ್ತಿತ್ತು ಎಂದು ಊಹಿಸಲೂ ಅಸಾಧ್ಯ. ಎನ್‌ಡಿಎ ಅಧಿಕಾರಕ್ಕೆ ಬಂದಂದಿನಿಂದಲೂ ಜನರು ಬದುಕದಂತಹ ಪರಿಸ್ಥಿತಿ ತಂದೊಡ್ಡಿರುವುದೇ ಅವರ ಪ್ರಮುಖ ಸಾಧನೆಯಾಗಿದೆ’ ಎಂದು ಟೀಕಿಸಿದರು.

‘ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರ್ಕಾರವಿದು ಎಂದು ಆಡಳಿತ ಪಕ್ಷದ ಮುಖಂಡರೇ ಹೇಳುತ್ತಿರುವುದು ಸರ್ಕಾರದ ಆಡಳಿತ ವೈಖರಿಗೆ ಉದಾ ಹರಣೆಯಾಗಿದೆ. ಈ ಜನವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ನಮ್ಮ ಹೋರಾಟ ನಿರಂತರ’ ಎಂದರು.

ಕೆಪಿಸಿಸಿ ಸದಸ್ಯ ಕೆ.ಎಸ್.ಆನಂದ್ ಮಾತನಾಡಿ, ‘ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಲ್ಲಿ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚುತ್ತಿದೆ. ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ಮುಂಚೂಣಿ ಹೋರಾಟದಲ್ಲಿರುತ್ತದೆ. ಸ್ಥಳೀಯ ಆಡಳಿತದಲ್ಲಿ ಹಾಸುಹೊಕ್ಕಾಗಿರುವ ಭ್ರಷ್ಟಾಚಾರದ ವಿರುದ್ಧವೂ ನಿರಂತರ ವಾಗಿ ಹೋರಾಟ ಮಾಡುತ್ತಿದ್ದೇವೆ. ಕಾಂಗ್ರೆಸ್‌ ಜನಪರ ಹೋರಾಟದಲ್ಲಿಯೇ ಇರುವ ಪಕ್ಷ’ ಎಂದರು.

ಎಪಿಎಂಸಿ ಮೈದಾನದಿಂದ ಸಂಗೊಳ್ಳಿ ರಾಯಣ್ಣ ವೃತ್ತದ ವರೆಗೆ ಆಟೊಕ್ಕೆ ಹಗ್ಗ ಕಟ್ಟಿಕೊಂಡು ಪೆಟ್ರೋಲ್ ಡೀಸೆಲ್ ಬೆಲೆಯೇರಿಕೆ ವಿರುದ್ಧ ಘೋಷಣೆ ಕೂಗುತ್ತ ಸಾಗಿದ ಕಾಂಗ್ರೆಸ್ ಕಾರ್ಯಕರ್ತರ ಹಿಂದೆ ಆರ್.ಧ್ರುವನಾರಾಯಣ್ ಎತ್ತನಗಾಡಿಯಲ್ಲಿ ಬಂದರು.

ಮಾಜಿ ಸಂಸದ ಜವರೇಗೌಡ, ಸಂದೀಪ್, ಡಾ.ಅಂಶುಮಂತ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೆಂಪರಾಜು, ಮಾಜಿ ಸದಸ್ಯರಾದ ಶರತ್ ಕೃಷ್ಣಮೂರ್ತಿ, ಕಡೂರು ಮತ್ತು ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಸೂರು ಚಂದ್ರಮೌಳಿ, ಆಸಂದಿ ಕಲ್ಲೇಶ್, ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಎಚ್.ಚಂದ್ರಪ್ಪ, ಮುಖಂಡರಾದ ಕೆ‌.ಜಿ‌. ಶ್ರೀನಿವಾಸಮೂರ್ತಿ, ವಿನಯ್ ವಳ್ಳು, ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಲಿಂಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT