ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಂತ ಹಣದಿಂದ ಗ್ರಾಮಕ್ಕೆ ನೀರು ಪೂರೈಕೆ

ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಆರ್.ಸದಾಶಿವ ಕಾರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ
Last Updated 27 ಏಪ್ರಿಲ್ 2020, 9:54 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಕ್ಕೆ ಸ್ವಂತ ವೆಚ್ಚದಿಂದ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿರುವ ಜಿಲ್ಲಾ ಪಂಚಾಯಿತಿ ಸದಸ್ಯರ ಕಾರ್ಯ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.

ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ತಾಲ್ಲೂಕಿನ ಗಡಿಗ್ರಾಮವಾದ ಮರಾಠಿ ಕ್ಯಾಂಪ್‌ನಲ್ಲಿ 50ಕ್ಕೂ ಹೆಚ್ಚು ಮನೆಗಳಿವೆ. ಈ ಗ್ರಾಮಕ್ಕೆ ನೀರು ಪೂರೈಸುತ್ತಿದ್ದ ಕೊಳವೆಬಾವಿಯಲ್ಲಿ ನೀರು ಕಡಿಮೆಯಾಗುತ್ತಿದೆ ಎಂದು ಗ್ರಾಮಸ್ಥರು ಗಮನಕ್ಕೆ ತಂದಿದ್ದರಿಂದ ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾ ಪಂಚಾಯಿತಿ ಸದಸ್ಯರು ಟಾಸ್ಕ್‌ಫೋರ್ಡ್‌ನಿಂದ ಗ್ರಾಮದ ವ್ಯಾಪ್ತಿಯಲ್ಲಿ ಕೊಳವೆಬಾವಿ ಕೊರೆಸಿದ್ದರು. ಅದರಲ್ಲಿ 3.50 ಇಂಚು ನೀರು ಸಹ ಬಂತು. ಈ ನಡುವೆ ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಸರ್ಕಾರ ಲಾಕ್‌ಡೌನ್ ಘೋಷಿಸಿದ್ದರಿಂದ ಗುತ್ತಿಗೆದಾರರಿಗೆ ಶಿವಮೊಗ್ಗದಿಂದ ಕೊಳವೆಬಾವಿಗೆ ಮೋಟಾರ್ ಮತ್ತಿತರ ಸಲಕರಣೆಗಳನ್ನು ತರಲು ಪೊಲೀಸ್ ಇಲಾಖೆಯಿಂದ ಅನುಮತಿ ನೀಡದಿದ್ದರಿಂದ ಇದು ನನೆಗುದಿಗೆ ಬಿದ್ದು, ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗಲಿಲ್ಲ.

ಕಳೆದ ಸಾಲಿನಲ್ಲಿ ನೀರಿನ ಸಮಸ್ಯೆಯಾದಾಗ ರೈತರು ಹೊಂದಿರುವ ಖಾಸಗಿಯ ಕೊಳವೆಬಾವಿ ಮೂಲಕ ನೀರು ಪೂರೈಸುವ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಈ ಖಾಸಗಿ ಕೊಳವೆಬಾವಿ ಹೊಂದಿದವರಿಗೆ ಸರ್ಕಾರ ನಿಗದಿಪಡಿಸಿದ್ದ ₹ 10 ಸಾವಿರ ಬಾಡಿಗೆಯೂ ಪಾವತಿಸದೆ ಇದ್ದುದರಿಂದ ಅವರು ನೀರು ಪೂರೈಸಲು ನಿರಾಕರಿಸಿದ್ದರು.

20 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿದೆ. ಆಲ್ದಾರ, ಬೈರಾಪುರ, ಮರಾಠಿ ಕ್ಯಾಂಪ್ ಗ್ರಾಮಕ್ಕೆ ಲಾಕ್‌ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಕಾರ್ಮಿಕರಿಗೆ ಪಿ.ಆರ್.ಸದಾಶಿವ ಆಹಾರ ಸಾಮಗ್ರಿ ಕಿಟ್ ವಿತರಿಸಲು ಹೋಗಿದ್ದಾಗ ಕುಡಿಯಲು ನೀರು ಸಿಗದಿರುವ ಬಗ್ಗೆ ಗಮನಕ್ಕೆ ತಂದಿದ್ದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಪಂಚಾಯಿತಿ ಸದಸ್ಯರು ಸ್ವಂತ ವೆಚ್ಚದಿಂದ ಟ್ಯಾಂಕರ್ ಮೂಲಕ ನೀರು ಪೂರೈಸುವ ವ್ಯವಸ್ಥೆ ಮಾಡಿದರು.

ಮರಾಠಿ ಕ್ಯಾಂಪ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಮನ ಸೆಳೆದಾಗ ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಹಣದ ಕೊರತೆಯಿದೆ ಎಂದರು. ಹಾಗಾಗಿ ಗ್ರಾಮಸ್ಥರಿಗೆ ಸಮಸ್ಯೆಯಾಗಬಾರದೆಂಬ ಕಾರಣಕ್ಕೆ ಗ್ರಾಮಕ್ಕೆ ಟ್ರ್ಯಾಕ್ಟರ್ ಮತ್ತು ಟ್ಯಾಂಕರ್ ಕಳುಹಿಸಿ 7 ದಿನಗಳಿಂದ ನೀರು ಪೂರೈಸುತ್ತಿರುವುದಾಗಿ ಪಿ.ಆರ್.ಸದಾಶಿವ ತಿಳಿಸಿದರು.

ಸದಾಶಿವ ಅವರು ಗ್ರಾಮಕ್ಕೆ ಕುಡಿಯುವ ನೀರಿಗೆ ಸೌಲಭ್ಯ ಒದಗಿಸಿರುವುದಕ್ಕೆ ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್ ಮತ್ತು ಡಕ್ಕಮ್ಮ ಕೃತಜ್ಞತೆ ಸಲ್ಲಿಸಿದ್ದಾರೆ.

ಮರಾಠಿ ಕ್ಯಾಂಪ್ ಗ್ರಾಮಕ್ಕೆ ಕುಡಿಯುವ ನೀರಿನ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅವಶ್ಯಕವಿರುವ ಸಲಕರಣೆ ಶಿವಮೊಗ್ಗದಿಂದ ತರಲು ಗುತ್ತಿಗೆದಾರರಿಗೆ ಅನುಮತಿ ನೀಡಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT