ಹಾಸ್ಟೆಲ್‌, ಕಾಲೇಜು ಕಟ್ಟಡ ನಿರ್ಮಾಣಕ್ಕೆ ಜಾಗ ಒದಗಿಸಲು ಕ್ರಮ: ಡಿ.ಸಿ

7

ಹಾಸ್ಟೆಲ್‌, ಕಾಲೇಜು ಕಟ್ಟಡ ನಿರ್ಮಾಣಕ್ಕೆ ಜಾಗ ಒದಗಿಸಲು ಕ್ರಮ: ಡಿ.ಸಿ

Published:
Updated:
Deccan Herald

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಒಟ್ಟು 13 ವಿದ್ಯಾರ್ಥಿನಿಲಯ ಕಟ್ಟಡಗಳ ನಿರ್ಮಾಣಕ್ಕೆ ಜಾಗ ಮಂಜೂರು ಮಾಡುವಂತೆ ಮನವಿ ಸಲ್ಲಿಕೆಯಾಗಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಜಾಗ ಕೋರಿದ್ದಾರೆ. ಶಾಲೆ, ಕಾಲೇಜು ಇರುವ ಸ್ಥಳದ ಸನಿಹದಲ್ಲಿ ಸರ್ಕಾರಿ ಜಾಗ ಲಭ್ಯ ಇದ್ದರೆ ಪರಿಶೀಲಿಸಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.

ಚಿಕ್ಕಮಗಳೂರಿನ ವಿವಿಧ ಬಡಾವಣೆಗಳಲ್ಲಿ 29 ಸಿಎ (ನಾಗರಿಕ ಸೌಕರ್ಯ) ನಿವೇಶನಗಳು ಇವೆ. ಜಾಗ ಕೋರಿರುವವರಿಗೆ ಈ ನಿವೇಶನಗಳ ಪಟ್ಟಿ ತೋರಿಸಿ, ಶಾಲೆ–ಕಾಲೇಜು ಸನಿಹದಲ್ಲಿರುವ ಜಾಗ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಎಂದರು.

ನಗರದಲ್ಲಿ ಸರ್ಕಾರಿ ಮಹಿಳಾ ಕಾಲೇಜು ನಿರ್ಮಾಣಕ್ಕೂ ಜಾಗ ಕೋರಿ ಮನವಿ ಸಲ್ಲಿಕೆಯಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎ ನಿವೇಶನಗಳ ಪಟ್ಟಿಯನ್ನು ಪಡೆದುಕೊಂಡಿದ್ದೇನೆ. ಜಾಗ ಮಂಜೂರಾತಿ ನಿಟ್ಟಿನಲ್ಲಿ ಸಭೆ ನಡೆಸಿ, ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಈಚೆಗೆ ಮುಖ್ಯಮಂತ್ರಿಯವರು ನಡೆಸಿದ ಸಭೆಯಲ್ಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಚರ್ಚೆಯಾಯಿತು. ನಿವೇಶನ ಹಂಚಿಕೆ ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ. ಅದರಂತೆ, ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಜಂಟಿಸಭೆ ನಡೆಸಿ ಸರ್ಕಾರಿ ಜಾಗ ಲಭ್ಯತೆ ಮಾಹಿತಿ ಪಡೆದುಕೊಳ್ಳಲಾಗುವುದು. ನಂತರ ನಿವೇಶನ ಹಂಚಿಕೆಗೆ ಕ್ರಮ ವಹಿಸಲಾಗುವುದು ಎಂದರು.

ಅತಿವೃಷ್ಟಿ ಹಾನಿ ನಿರ್ವಹಣೆಗೆ ₹ 37.32 ಕೋಟಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಜಿಲ್ಲೆಯ ಕಡೂರು ಮತ್ತು ಚಿಕ್ಕಮಗಳೂರು ತಾಲ್ಲೂಕಿನ ಐದು ಹೋಬಳಿಗಳಲ್ಲಿ ಅನಾವೃಷ್ಟಿಗೆ ಸಂಬಂಧಿಸಿದಂತೆ ಅಂದಾಜುಪಟ್ಟಿ ಸಲ್ಲಿಸಲಾಗಿದೆ. ಕಡೂರು ಭಾಗದ 13 ಗ್ರಾಮಗಳಿಗೆ ಟ್ಯಾಂಕರ್‌ನಲ್ಲಿ ನೀರು ಪೂರೈಸಲಾಗುತ್ತಿದೆ. ಈ ಭಾಗದಲ್ಲಿ ಸ್ವಲ್ಪ ಮಳೆಯಾಗಿದೆ ಆದರೆ, ಅಂತರ್ಜಲ ಮರುಪೂರಣವಾಗುವಷ್ಟು ಆಗಿಲ್ಲ. ಹೀಗಾಗಿ, ಇಲ್ಲಿ ನೀರಿನ ಸಮಸ್ಯೆ ಇದೆ ಎಂದು ತಿಳಿಸಿದರು.

ಮಸಗಲಿ ಅರಣ್ಯ ವ್ಯಾಪ್ತಿಯಲ್ಲಿರುವವರ ಪುನರ್ವಸತಿಗೆ ಸಂಬಂಧಿಸಿದಂತೆ ಈಗಾಗಲೇ ಎರಡು ಸಭೆ ನಡೆದಿದೆ. ಈ ವ್ಯಾಪ್ತಿಯಲ್ಲಿ 211 ಕುಟುಂಬಗಳನ್ನು ಗುರುತಿಸಲಾಗಿದೆ. ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಪರಿಶೀಲನಾ ಸಮಿತಿ (ಸ್ಕ್ರೀನಿಂಗ್‌ ಸಮಿತಿ) ರಚಿಸಲಾಗಿದೆ. ಕಂದಾಯ, ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಿಶೀಲನೆ ಮಾಡಲಿದ್ದಾರೆ. ಜೀವನೋಪಾಯಕ್ಕೆ ಏನೂ ಇಲ್ಲದವರಿಗೆ ಜಾಗ ಒದಗಿಸಲು ನಿಯಮಾನುಸಾರ ಕ್ರಮ ವಹಿಸಲಾಗುವುದು. ಶಿರವಾಸೆಯಲ್ಲಿ ಗುರುತಿಸಿದ್ದ ಜಾಗ ಉಳುಮೆಗೆ ಯೋಗ್ಯವಾಗಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ, ಬೇರೆ ಕಡೆ ಜಾಗ ಗುರುತಿಸಲು ಸೂಚನೆ ನೀಡಲಾಗಿದೆ ಎಂದು ಪ್ರತಿಕ್ರಿಯಿಸಿದರು.

ಕುದುರೆಮುಖದ ಜಾಗವನ್ನು ಅರಣ್ಯ ಇಲಾಖೆಗೆ ಸುಪರ್ದಿಗೆ ವಹಿಸಲಾಗುವುದು. ಖಾಸಗಿ ಜಮೀನಿನವರಿಗೆ ಪರಿಹಾರ ನೀಡಲಾಗುತ್ತಿದೆ. ಈಚೆಗೆ ಈ ಬಾಬ್ತಿಗೆ ₹ 1.04 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ವಸತಿರಹಿತರಿಗೆ ನಿವೇಶನ ಒದಗಿಸಲು ಮಾವಿನಕೆರೆ ಪ್ರದೇಶದಲ್ಲಿ 10 ಎಕರೆ ಜಾಗ ಗುರುತಿಸಲಾಗಿದೆ. ಪುನರ್ವಸತಿಗೆ ಕ್ರಮ ವಹಿಸಲಾಗುವುದು ಎಂದು ಉತ್ತರಿಸಿದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 1.5 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಈವರೆಗೆ 81 ಸಾವಿರ ಹೆಕ್ಟೇರ್‌ನಲ್ಲಿ (ಶೇ 54) ಬಿತ್ತನೆಯಾಗಿದೆ. 17 ಸಾವಿರ ಹೆಕ್ಟೇರ್‌ನಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಗುರಿ ಹೊಂದಿದ್ದು, 12 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ ಎಂದು ತಿಳಿಸಿದರು.

ಮಂಗಳೂರು– ಚಿತ್ರದುರ್ಗ ಚತುಷ್ಪಥ ಹೆದ್ದಾರಿ ಯೋಜನೆಗೆ ಸಂಬಂಧಿಸಿದಂತೆ ಇದೇ 10 ಮತ್ತು 11 ರಂದು ಸಭೆ ನಡೆಲಾಗುವುದು. ರಸ್ತೆ ಹಾದುಹೋಗುವ ಊರುಗಳ (ಅಜ್ಜಂಪುರ, ಕಡೂರು, ಚಿಕ್ಕಮಗಳೂರು, ಮೂಡಿಗೆರೆ) ಗ್ರಾಮಸ್ಥರು ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.

ನಗರದಲ್ಲಿ ಕೈಗೆತ್ತಿಕೊಂಡಿರುವ ಅಮೃತ್‌ ಯೋಜನೆ ಕಾಮಗಾರಿ ಮತ್ತು ಒಳಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಖಡಕ್‌ ಸೂಚನೆ ನೀಡಲಾಗಿದೆ. ನಿರ್ಲಕ್ಷ್ಯ ವಹಿಸಿದರೆ ಕ್ರಿಮಿನಲ್‌ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದೇನೆ ಎಂದರು.

 

 

 

 

 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !