ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರು ಮೆಚ್ಚುವಂತೆ ಕೆಲಸ ಮಾಡಿ: ಈಶ್ವರಪ್ಪ

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕಾರ್ಯಾಗಾರ
Last Updated 25 ಆಗಸ್ಟ್ 2021, 4:42 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಗೆಲ್ಲಿಸಿದ್ದು ಸಾರ್ಥಕವಾಯಿತು ಎಂಬ ಭಾವನೆ ಜನರಲ್ಲಿ ಮೂಡುವಂತೆ ಕೆಲಸ ಮಾಡಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್.ಈಶ್ವರಪ್ಪ ಕಿವಿಮಾತು ಹೇಳಿದರು .

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಎಐಟಿ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕಾರ್ಯಾಗಾರದಲ್ಲಿ ಮಾತನಾಡಿದರು. ಯೋಜನೆ ಗಳನ್ನು ಸಮರ್ಪಕವಾಗಿ ಕಾರ್ಯಗತ ಗೊಳಿಸಬೇಕು, ಸವಲತ್ತುಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು. ಗುರಿ ಸಾಧನೆ ಸಂಕಲ್ಪ ತೊಡಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿಯ ಸದಸ್ಯರಿಗೂ ಒಂದು ದಿನದ ಕಾರ್ಯಾಗಾರವನ್ನು ವಿಧಾನಸಭಾ ಕ್ಷೇತ್ರವಾರು ಆಯೋಜಿಸಲು ಉದ್ದೇಶಿಸಲಾಗಿದೆ. ಅವರಿಗೂ ಯೋಜನೆಗಳು ಬಗ್ಗೆ ಸಮಗ್ರ ಮಾಹಿತಿ ನೀಡಲಾಗುವುದು ಎಂದರು.

ಕೆರೆಗಳ ಅಭಿವೃದ್ಧಿ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿಗಳ ನಿರ್ವಹಿಸಬೇಕು. ಮಳೆ ನೀರು ಸಂಗ್ರಹಕ್ಕೆ ಆದ್ಯ ಗಮನ ಹರಿಸಬೇಕು. ಮಳೆ ನೀರನ್ನು ಇಂಗಿಸುವುದಕ್ಕೆ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕವು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ವಿವರಿಸಿದರು.

ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಸೌರ ವಿದ್ಯುತ್ ಸೌಲಭ್ಯವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಪ್ರತಿ ಮನೆಗೂ ಶೌಚಾಲಯ ಕಲ್ಪಿಸುವ ಪ್ರತಿಜ್ಞೆ ಮಾಡಬೇಕು. ಆ ನಿಟ್ಟಿನಲ್ಲಿ ಯಶಸ್ವಿಯೂ ಆಗಬೇಕು ಎಂದರು.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಜಾಗ ಒದಗಿಸಬೇಕು. ಕಸ ಸಂಗ್ರಹಣೆ ವಾಹನಗಳಿಗೆ ಚಾಲಕಿಯರನ್ನು ನೇಮಿಸಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಚೇರಿಯಲ್ಲಿ ಇರಲ್ಲ ಎಂದು ದೂರುಗಳಿದ್ದರೆ ಪರಿಶೀಲಿಸಿ ಅಂಥವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

‘ಗೌರವಧನ ಹೆಚ್ಚಿಸಿ’

ಗ್ರಾಮ ಪಂಚಾಯಿತಿಗೆ ಒದಗಿಸುವ ಅನುದಾನ ಹೆಚ್ಚಿಸಬೇಕು. ಸದಸ್ಯರ ಗೌರವಧನವನ್ನು ಹೆಚ್ಚಳ ಮಾಡಬೇಕು ಎಂದು ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್‌ ಮನವಿ ಮಾಡಿದರು.

‘ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಬಡ್ತಿ ನೀಡಲು ಕ್ರಮ ವಹಿಸಬೇಕು. ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಿ.ಪ್ರಭು ಪ್ರಾಸ್ತವಿಕವಾಗಿ ಮಾತನಾಡಿದರು. ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT