ಚಿಕ್ಕಮಗಳೂರು: ವಿದ್ಯಾರ್ಥಿಗಳು ಮತ್ತು ಯುವಜನ ತಮ್ಮ ಉಜ್ವಲ ಭವಿಷ್ಯಕ್ಕಾಗಿ ದುಶ್ಚಟಗಳಿಂದ ದೂರವಿರಬೇಕು ಎಂದು ಬಸವತತ್ವ ಪೀಠದ ಬಸವ ಮರುಳಸಿದ್ದ ಸ್ವಾಮೀಜಿ ಸಲಹೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘ ಶನಿವಾರ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ದೆಸೆಯಲ್ಲಿ ಹಲವು ಆಕರ್ಷಣೆಗಳಿರುತ್ತವೆ. ಅವುಗಳ ಹಿಂದೆ ಹೋದರೆ ವಿದ್ಯಾಭ್ಯಾಸ ಮೊಟಕಾಗುತ್ತದೆ. ಬದುಕಿನ ಹಾದಿ ತಪ್ಪುತ್ತದೆ, ಜೀವನದ ಅಧಃಪತನವಾಗುತ್ತದೆ ಎಂದು ಎಚ್ಚರಿಸಿದರು.

ಮಾದಕ ವಸ್ತುಗಳ ವ್ಯಾಪಾರಸ್ಥರು ವಿದ್ಯಾರ್ಥಿಗಳು ಮತ್ತು ಯುವಜನರನ್ನು ಗುರಿಯಾಗಿಸಿಕೊಂಡಿದ್ದಾರೆ. ಮೊಬೈಲ್ ಫೋನ್ನಲ್ಲಿ ಜೂಜಾಟದ ಆ್ಯಪ್ಗಳಿವೆ. ದೊಡ್ಡ ದೊಡ್ಡ ಸೆಲೆಬ್ರೆಟಿಗಳು ಯುವಜನರಿಗೆ ಜೂಜಾಟವಾಡುವಂತೆ ಪತ್ರಿಕೆಗಳ ಮುಖಪುಟಗಳಲ್ಲಿ ಜಾಹೀರಾತುಗಳ ಮೂಲಕ ಬಹಿರಂಗವಾಗಿಯೇ ಪ್ರೇರೇಪಿಸುತ್ತಿದ್ದಾರೆ. ಅಂಗಡಿಗಳಲ್ಲಿ ಗುಟ್ಕಾ, ತಂಬಾಕು, ಸಿಗರೇಟು, ಬೀಡಿ, ಮದ್ಯದ ರೀತಿಯ ರಕ್ತ ಬೀಜಾಸುರರು ರಾರಾಜಿಸುತ್ತಿದ್ದಾರೆ. ವಿದ್ಯಾರ್ಥಿಗಳು ಮತ್ತು ಯುವಜನತೆ ಇವುಗಳ ವಿಷಯದಲ್ಲಿ ಜಾಗರೂಕತೆ ವಹಿಸಬೇಕು. ಉತ್ತಮ ಭವಿಷ್ಯಕ್ಕಾಗಿ ಅವುಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು.

ಭವಿಷ್ಯದ ಜೀವನ ಉಜ್ವಲವಾಗಬೇಕಾದರೆ ವರ್ತಮಾನದಲ್ಲಿ ನಮ್ಮ ನಡತೆ ಉತ್ತಮವಾಗಿರಬೇಕು. ಪ್ರತಿಭಾ ಪುರಸ್ಕಾರ ಎನ್ನುವುದು ಕೇವಲ ಬೆನ್ನು ತಟ್ಟುವುದು ಎಂಬುದನ್ನು ವಿದ್ಯಾರ್ಥಿಗಳು ಅರಿಯಬೇಕು. ಪ್ರತಿಭಾ ಪುರಸ್ಕಾರ, ಸನ್ಮಾನಗಳಿಂದ ಮೈಮರೆಯಬಾರದು. ಯಾವುದೇ ಭ್ರಮೆಗೊಳಗಾಗದೆ ಮುಂದಿನ ಶಿಕ್ಷಣವನ್ನು ಶ್ರದ್ಧೆ ಮತ್ತು ಪರಿಶ್ರಮದಿಂದ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಎಚ್.ಡಿ.ತಮ್ಮಯ್ಯ, ‘ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುವುದರಿಂದ ಇನ್ನೂ ಹೆಚ್ಚು ಸಾಧಿಸುವಂತೆ ಅವರನ್ನು ಪ್ರೇರೇಪಿಸಿದಂತಾಗುತ್ತದೆ’ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ‘ವಿದ್ಯಾರ್ಥಿಗಳು ಯಾವುದೇ ಪರಿಸ್ಥಿತಿಯಲ್ಲೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು. ಒಂದು ಅವಕಾಶ ತಪ್ಪಿದರೆ ಇನ್ನೊಂದು ಅವಕಾಶದ ಬಾಗಿಲು ತೆರೆಯುತ್ತದೆ ಎಂಬುದನ್ನು ಮನಗಾಣಬೇಕು’ ಎಂದು ತಿಳಿಸಿದರು.

ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿ, ‘ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಅಂಕ ಗಳಿಕೆ ಮುಖ್ಯವಲ್ಲ. ಯಾವುದೇ ಕಪ್ಪುಚುಕ್ಕೆ ಇಲ್ಲದೆ ಬದುಕುವುದು ಮುಖ್ಯ’ ಎಂದರು.

ಸರ್ಕಾರಿ ನೌಕರರು, ಅಧಿಕಾರಿಗಳು ರೈತ ಪರ ಮತ್ತು ಬಡವರ ಪರವಾಗಿರಬೇಕು. ರೈತರು ಸಹಾಯ ಕೇಳಿ ಬಂದಾಗ ಅವರನ್ನು ಕೂರಿಸಿ ಮಾತನಾಡಿಸಬೇಕು. ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದೇವೇಂದ್ರ, ಪ್ರಧಾನ ಕಾರ್ಯದರ್ಶಿ ಎಚ್.ಗಿರಿಗೌಡ, ಸರ್ಕಾರಿ ನೌಕರರ ಸಂಘದ ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ.ಕೃಷ್ಣೇಗೌಡ, ರಾಜ್ಯ ಖಜಾಂಚಿ ವಿ.ವಿ.ಶಿವರುದ್ರಯ್ಯ, ಗೌರವಾಧ್ಯಕ್ಷ ಎಸ್.ಬಸವರಾಜು, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ.ಬಳ್ಳಾರಿ, ಹಿರಿಯ ಉಪಾಧ್ಯಕ್ಷ ಸುರೇಶ ಸಿ.ಶಡಶ್ಯಾಳ, ಆರ್.ಮೋಹನ್ಕುಮಾರ್, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನ ಭಾಗವಹಿಸಿದ್ದರು.

ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ 579 ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಗೌರವಿಸಲಾಯಿತು.

‘ಭವನ ಅಭಿವೃದ್ಧಿಗೆ ಅನುದಾನ ನೀಡಿ’:

ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ ‘ನಾನು ಸಂಘದ ಅಧ್ಯಕ್ಷನಾದ ನಂತರ 5 ವರ್ಷಗಳಿಂದ ಪ್ರತಿ ವರ್ಷ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ’ ಎಂದರು.

ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮುಂದುವರಿಸುವ ಕುರಿತು ಸರ್ಕಾರದೊಂದಿಗೆ ಹಲವು ಬಾರಿ ಚರ್ಚಿಸಲಾಗಿದೆ. ಹಳೆ ಪಿಂಚಣಿ ಯೋಜನೆ ಆದಷ್ಟು ಶೀಘ್ರ ಜಾರಿಗೆ ಬರಲಿದೆ ಎಂದು ತಿಳಿಸಿದರು. ನಗರದಲ್ಲಿ ನಿರ್ಮಿಸಿರುವ ಸರ್ಕಾರಿ ನೌಕರರ ಭವನದ ಅಭಿವೃದ್ಧಿಗೆ ಅನುದಾನ ನೀಡುವಂತೆ ವೇದಿಕೆಯಲ್ಲಿದ್ದ ಸಿ.ಟಿ.ರವಿ ಮತ್ತು ಎಚ್.ಡಿ.ತಮ್ಮಯ್ಯ ಅವರಿಗೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.