ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸಗೊಬ್ಬರದ ಕೃತಕ ಅಭಾವಕ್ಕೆ ಕ್ರಮ: ಅಧಿಕಾರಿಗಳ ಸಭೆಯಲ್ಲಿ ಬಿ.ಸಿ. ಪಾಟೀಲ ಎಚ್ಚರಿಕೆ

Last Updated 21 ಮೇ 2022, 4:14 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುಂಗಾರು ಬಿತ್ತನೆಗೆ ಸಿದ್ಧತೆ ನಡೆಯುತ್ತಿದೆ. ಕೆಲವೆಡೆ ಬಿತ್ತನೆ ಕಾರ್ಯ ಪ್ರಗತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಎಚ್ಚರಿಕೆ ನೀಡಿದರು.

ಇಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಮುಂಗಾರು ಪೂರ್ವ ಮಳೆಯಿಂದ ಉಂಟಾಗಿರುವ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಹಾಗೂ ಮುನ್ನೆಚ್ಚರಿಕೆಯಾಗಿ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಿದರು.

‘ರಾಜ್ಯದಲ್ಲಿ 11,18, 519 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಸಂಗ್ರಹ ಇದೆ. ಏಪ್ರಿಲ್‌ ಮೊದಲ ವಾರದಿಂದಲೇ ದಾಸ್ತಾನು ಇಟ್ಟುಕೊಳ್ಳಲಾಗಿದೆ. ಕಾಲಕಾಲಕ್ಕೆ ಇದನ್ನು ಪರಿಶೀಲನೆ ಮಾಡಲಾಗುತ್ತಿದೆ. ಯಾವುದೇ ಭಾಗದಲ್ಲಿಯೂ ರಸಗೊಬ್ಬರಕ್ಕೆಸಮಸ್ಯೆ ಇಲ್ಲ. ಸಮಸ್ಯೆ ಆಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು’ ಎಂದು ತಾಕೀತು ಮಾಡಿದರು.

‘ಕೇಂದ್ರ ಸರ್ಕಾರ ರಸಗೊಬ್ಬರ ಖರೀದಿಗೆ ರಿಯಾಯಿತಿ ನೀಡುತ್ತಿದೆ. ಇದಕ್ಕಾಗಿ ದೇಶದಾದ್ಯಂತ ₹ 2.39 ಲಕ್ಷ ಕೋಟಿ ಮೀಸಲಿಡಲಾಗಿದೆ. 50 ಕೆ.ಜಿ. ಚೀಲದ ಗೊಬ್ಬರದಮೇಲೆ ದೊಡ್ಡ ಪ್ರಮಾಣದಲ್ಲಿ ರಿಯಾಯಿತಿ ನೀಡಲಾಗುತ್ತಿದೆ.ಡಿಎಪಿ ಗೊಬ್ಬರದ ಬೆಲೆ ₹ 3,851. ಇದರಲ್ಲಿ ಕೇಂದ್ರ ಸರ್ಕಾರ ₹ 2,501 ರಿಯಾಯಿತಿ ನೀಡಿದೆ. ರೈತರು ಖರೀದಿಸುವ ದರ ₹ 1,350. ಇತರ ಎಲ್ಲ ರಸಗೊಬ್ಬರ ಮೇಲೆಯೂ ರಿಯಾಯಿತಿ ಇದೆ’ ಎಂದು ಹೇಳಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್‌ಕುಮಾರ್‌ಇದ್ದರು.

*
ಜಿಲ್ಲೆಯಲ್ಲಿ 240 ಹೆಕ್ಟೇರ್ ತೋಟಗಾರಿಕೆ ಹಾಗೂ 40 ಹೆಕ್ಟೇರ್ ಖುಷ್ಕಿ ಬೆಳೆಗೆ ಹಾನಿಯಾಗಿದೆ. ₹ 37 ಲಕ್ಷ ಮೌಲ್ಯದ ಹಾನಿ ಸಂಭವಿಸಿದೆ. ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಲಾಗುವುದು.
-ಬಿ.ಸಿ.ಪಾಟೀಲ, ಕೃಷಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT