ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಮಾದಕ ವಸ್ತು ಮಾರಿದರೆ ಕ್ರಮ

ಮಾದಕ ವಸ್ತುಗಳ ಮಾರಾಟ ತಡೆ ಸಭೆಯಲ್ಲಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ
Last Updated 9 ಜನವರಿ 2020, 10:18 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಜಿಲ್ಲೆಯಲ್ಲಿರುವ ಶಾಲಾ-ಕಾಲೇಜು ಸಮೀಪ ತಾಂಬಾಕು ಸೇರಿ ಯಾವುದೇ ರೀತಿಯ ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟ ಮಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ತಿಳಿಸಿದರು.

ಬುಧವಾರ ಮಾದಕ ವಸ್ತುಗಳ ಮಾರಾಟ ತಡೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಶಾಲಾ–ಕಾಲೇಜುಗಳ ಕ್ಯಾಂಪಸ್ ಆವರಣದಲ್ಲಿ ಗಾಂಜಾ, ಅಫೀಮು ಸೇರಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳ ಗಮನಕ್ಕೆ ತನ್ನಿ’ ಎಂದು ಸೂಚನೆ ನೀಡಿದರು.

‘ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳು ಮಾದಕ ವ್ಯಸನಗಳಲ್ಲಿ ತೊಡಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ. ಮುಂದೆಯೂ ಆಗಬಾರದು. ಆದ್ದರಿಂದ ಅಧಿಕಾರಿಗಳು ಹೆಚ್ಚು ನಿಗಾವಹಿಸಬೇಕು. ಪ್ರಕರಣ ಜಿಲ್ಲೆಯಲ್ಲಿ ಸಂಭವಿಸದಂತೆ ಎಚ್ಚರವಹಿಸಬೇಕು’ ಎಂದರು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರ ಬಿ.ಎಂ. ಪ್ರಭುದೇವ್, ‘ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜ್‌ಗಳಲ್ಲೂ ತಂಬಾಕು ನಿಯಂತ್ರಣ ಸಮಿತಿ ರಚಿಸಲಾಗಿದೆ. ಸುಮಾರು 37 ಶಾಲೆಗಳನ್ನು ತಂಬಾಕು ಮುಕ್ತ ಶಾಲೆ ಎಂಬುದಾಗಿ ಘೋಷಿಸಲಾಗಿದೆ’ ಎಂದು ತಿಳಿಸಿದರು.

‘ಶಾಲಾ, ಕಾಲೇಜು ಆವರಣ ಸೇರಿ ಸುತ್ತಮುತ್ತ ಮಾದಕ ವಸ್ತುಗಳ ಮಾರಾಟ ಮಾಡುವ ಪ್ರಕರಣ ಕಂಡು ಬಂದಲ್ಲಿ ಅದರ ಕುರಿತು ಅಬಕಾರಿ ಅಧಿಕಾರಿಗಳು ಸಂಪೂರ್ಣ ನಿಗಾವಹಿಸಬೇಕು’ ಎಂದು ಮನವಿ ಮಾಡಿದ ಅವರು, ‘ಈ ಕುರಿತು ಪೊಲೀಸ್ ಇಲಾಖೆಯಿಂದಲೂ ವ್ಯಾಪಕ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿ. ಪ್ರಸನ್ನ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT