ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಧಾನ್ಯ ಪ್ರೋತ್ಸಾಹ: ₹15 ಸಾವಿರಕ್ಕೆ ಕೋರಿಕೆ- ಸಚಿವ ಬಿ.ಸಿ.ಪಾಟೀಲ

ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿಕೆ
Last Updated 26 ಜನವರಿ 2023, 10:37 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಿರಿಧಾನ್ಯ ಪ್ರೋತ್ಸಾಹಿಸುವ ಉದ್ದೇಶದಿಂದ ನೀಡುವ ಧನವನ್ನು ₹ 10 ಸಾವಿರದಿಂದ ₹ 15 ಸಾವಿರಕ್ಕೆ ಏರಿಕೆ ಮಾಡುವಂತೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಫೆ.17ರಂದು ಮಂಡನೆಯಾಗುವ ಬಜೆಟ್‌ನಲ್ಲಿ ಇದು ಸೇರ್ಪಡೆ ಆಗುವ ವಿಶ್ವಾಸವಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.

‘ಅನುದಾನದ ಕೊರತೆಯ ಕಾರಣಕ್ಕೆ ಪ್ರೋತ್ಸಾಹ ಧನವನ್ನು ಕಡಿಮೆ ಮಾಡುವ ಸಾಧ್ಯತೆ ಇತ್ತು. ಆದರೆ, ಸಿರಿಧಾನ್ಯ ಬೆಳೆಯುವ ರೈತರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಪ್ರಸಕ್ತ ವರ್ಷವೂ ₹ 10 ಸಾವಿರ ಪ್ರೋತ್ಸಾಹ ಧನ ನೀಡಲಾಗಿದೆ. ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷಾಚರಣೆ ಹಿನ್ನೆಲೆಯಲ್ಲಿ ಈ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಅಡಿಕೆ ಚಿತ್ರದುರ್ಗ ಜಿಲ್ಲೆಯ ಸಾಂಪ್ರದಾಯಿಕ ಬೆಳೆಯಲ್ಲ ಎಂಬ ಕಾರಣಕ್ಕೆ ನರೇಗಾ ಹಾಗೂ ಹನಿ ನೀರಾವರಿ ಸಬ್ಸಿಡಿಗೆ ಸೇರ್ಪಡೆಯಾಗಿಲ್ಲ. ಭೀಮಸಮುದ್ರದಲ್ಲಿ ಅಡಿಕೆಯ ದೊಡ್ಡ ಮಾರುಕಟ್ಟೆ ಇದೆ. ಹೊಸದುರ್ಗ, ಹೊಳಲ್ಕೆರೆ ಸೇರಿ ಹಲವಡೆ ಅಡಿಕೆ ಬೆಳೆಯಲಾಗುತ್ತಿದೆ. ಪ್ರಸ್ತಾವವೊಂದನ್ನು ಕಳುಹಿಸಿದರೆ ಪರಿಶೀಲನೆ ನಡೆಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ಚುನಾವಣೆಗೆ ಈಗಾಗಲೇ ತಯಾರಿ ನಡೆಯುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಸಲಾಗುತ್ತಿದೆ. ಹಲವು ಕ್ಷೇತ್ರಗಳಲ್ಲಿ ಸಮೀಕ್ಷೆ ಕೂಡ ನಡೆಯುತ್ತಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ. ಜನಾರ್ದನ ರೆಡ್ಡಿ ಅವರ ಹೊಸ ಪಕ್ಷದಿಂದ ಬಿಜೆಪಿಗೆ ಯಾವುದೇ ತೊಂದರೆ ಆಗದು’ ಎಂದು ಹೇಳಿದರು.

‘ಜನ ದೇಣಿಗೆ ನೀಡಿದರೆ ತಪ್ಪೇನು’

‘ಕ್ರೀಡಾಕೂಟ, ಕ್ರೀಡಾಪಟುಗಳಿಗೆ ಸಾರ್ವಜನಿಕರು ದೇಣಿಗೆ ನೀಡಿದರೆ ತಪ್ಪೇನು. ಇದರಿಂದ ಜನರ ಪಾಲ್ಗೊಳ್ಳುವಿಕೆ ಹೆಚ್ಚಾಗುವುದಿಲ್ಲವೇ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಪ್ರಶ್ನಿಸಿದರು.

ಹಿರಿಯೂರು ತಾಲ್ಲೂಕಿನ ವದ್ದಿಕೆರೆಯ ವಿದ್ಯಾರ್ಥಿನಿ ವೈಶಾಲಿ, ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಮಲೇಷ್ಯಾಕ್ಕೆ ತೆರಳಲು ಸರ್ಕಾರದ ಅನುದಾನ ಸಿಗದಿರುವುದಕ್ಕೆ ಸಂಬಂಧಿಸಿದ ಸುದ್ದಿಗಾರರ ಪ್ರಶ್ನೆಗೆ ಸಚಿವರು ಅಸಮಾಧಾನಗೊಂಡರು.

ಮಧ್ಯಪ್ರವೇಶಿಸಿದ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ, ‘ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಸಿಗುತ್ತಿದೆ. ಅಂತರರಾಷ್ಟ್ರೀಯ ಕ್ರೀಡಾಕೂಟಕ್ಕೆ ತೆರಳಲು ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವ ಸ್ಥಿತಿ ವಿದ್ಯಾರ್ಥಿನಿಗೆ ನಿರ್ಮಾಣವಾಗಿದ್ದು ಬೇಸರದ ಸಂಗತಿ. ಸರ್ಕಾರದ ನೆರವು ಸಿಕ್ಕಿದ್ದರೆ ಇನ್ನಷ್ಟು ಅನುಕೂಲವಾಗುತ್ತಿತ್ತು. ಈ ನಿಟ್ಟಿನಲ್ಲಿ ಕ್ರೀಡಾ ನೀತಿ ಪರಿಷ್ಕರಿಸುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.

‘ಮೋದಿ ಬರುವ ಸಾಧ್ಯತೆ’

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರುವರಿ ತಿಂಗಳಲ್ಲಿ ಚಿತ್ರದುರ್ಗಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ತಿಳಿಸಿದರು.

‘ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ಸಿಗುತ್ತಿದೆ. ಮೋದಿ ಅವರು ಇಲ್ಲಿಗೆ ಆಗಮಿಸಿದಾಗಲೇ ಇದನ್ನು ಘೋಷಣೆ ಮಾಡುವ ಸಾಧ್ಯತೆ ಇದೆ’ ಎಂದು ಮಾಹಿತಿ ನೀಡಿದರು.

‘ಸರ್ಕಾರಿ ವೈದ್ಯಕೀಯ ಕಾಲೇಜು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೇ ಸ್ಥಾಪಿಸಲಾಗುತ್ತಿದೆ. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸೂಚಿಸಿದ ಸ್ಥಳ ಅರಣ್ಯ ಇಲಾಖೆಯ ಅಧೀನದಲ್ಲಿದ್ದು, ಅನುಮತಿ ಸಿಗುವುದು ವಿಳಂಬವಾಗುವ ಸಾಧ್ಯತೆ ಇದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT