ಶುಕ್ರವಾರ, ಜೂನ್ 18, 2021
28 °C

ಕೇಂದ್ರದ ನಡೆ ಆಕ್ಷೇಪಾರ್ಹ: ಚಂದ್ರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಆಮ್ಲಜನಕ ಹಾಗೂ ರೆಮ್‌ಡಿಸಿವಿರ್‌ ಚುಚ್ಚುಮದ್ದು ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ನಡೆ ಆಕ್ಷೇಪಾರ್ಹವಾಗಿದೆ. ಸರ್ಕಾರದ ಧೋರಣೆ ಪ್ರಶ್ನಿಸದ ಬಿಜೆಪಿಯ 25 ಸಂಸದರು ಮೌನಕ್ಕೆ ಶರಣಾಗಿರುವುದು ಆತ್ಮವಂಚನೆಯೇ ಸರಿ ಎಂದು ಕೆಪಿಸಿಸಿ ವಕ್ತಾರ ಬಿ.ಎನ್‌.ಚಂದ್ರಪ್ಪ ಆರೋಪಿಸಿದ್ದಾರೆ.

‘ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಹೆಚ್ಚಾಗುತ್ತಿದೆ. ಚಿಕಿತ್ಸೆ, ಔಷಧ ಸಿಗದೇ ಜನರು ನರಳಾಡುತ್ತಿದ್ದಾರೆ. ವೈದ್ಯರು ಎಲ್ಲದಕ್ಕೂ ಸರ್ಕಾರವನ್ನು ಬೇಡುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಪಾಲಿನ ಔಷಧ ಒದಗಿಸದೇ ಕೇಂದ್ರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ನ್ಯಾಯಾಲಯ ಮಧ್ಯಪ್ರವೇಶ ಮಾಡಿದ್ದರಿಂದ ಆಮ್ಲಜನಕ ಸಿಕ್ಕಿದೆ’ ಎಂದು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಅಲ್ಲಿಗೆ ಹೆಚ್ಚಿನ ಆಮ್ಲಜನಕ, ರೆಮ್‌ಡಿಸಿವಿರ್‌ ಪೂರೈಕೆ ಆಗುತ್ತಿದೆ. ಕರ್ನಾಟಕದ ತುರ್ತು ಅಗತ್ಯವನ್ನು ಕೇಂದ್ರ ಸರ್ಕಾರ ಅರ್ಥ ಮಾಡಿಕೊಳ್ಳುತ್ತಿಲ್ಲ. ಪ್ರತಿ ವಿಚಾರದಲ್ಲಿಯೂ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂಬುದನ್ನು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದಾರೆ. ಆದರೂ, ಸಂಸದರು ಮೌನವಾಗಿದ್ದಾರೆ’ ಎಂದು ಕುಟುಕಿದ್ದಾರೆ.

‘ಚಿತ್ರದುರ್ಗ ಜಿಲ್ಲೆಯಲ್ಲಿ ನಿತ್ಯ ಸರಾಸರಿ 200ಕ್ಕೂ ಹೆಚ್ಚು ಕೋವಿಡ್‌ ಪ್ರಕರಣ ವರದಿ ಆಗುತ್ತಿವೆ. ಆಸ್ಪತ್ರೆಗೆ ದಾಖಲು ಅಗುವರ ಸಂಖ್ಯೆ ಹೆಚ್ಚಾಗುತ್ತಿದೆ. ಔಷಧ, ಆಮ್ಲಜನಕಕ್ಕೆ ವೈದ್ಯರು, ರೋಗಿಗಳ ಸಂಬಂಧಿಕರು ಪರದಾಡುತ್ತಿದ್ದಾರೆ. ಉಸ್ತುವಾರಿ ಸಚಿವರು, ಸಂಸದರು ನಾಮಕಾವಸ್ಥೆಗೆ ಸಭೆ ನಡೆಸಿ ಕೈತೊಳೆದುಕೊಂಡಿದ್ದಾರೆ’ ಎಂದು ದೂರಿದ್ದಾರೆ.

‘ಸರ್ಕಾರದ ಮೇಲೆ ಒತ್ತಡ ಹೇರಿ ಜಿಲ್ಲೆಗೆ ಅಗತ್ಯ ಇರುವಷ್ಟು ಔಷಧ, ಆಮ್ಲಜನಕವನ್ನು ತುರ್ತಾಗಿ ಒದಗಿಸಬೇಕು. ಆಸ್ಪತ್ರೆ ಹಾಸಿಗೆ ಸೌಲಭ್ಯವನ್ನು ಹೆಚ್ಚಿಸಬೇಕು. ಲಸಿಕೆ ಪಡೆಯಲು ಉಂಟಾಗಿರುವ ಹಾಹಾಕಾರವನ್ನು ನೀಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

***

ಬಿಜೆಪಿ ಶಾಸಕರು, ಸಂಸದರು ಜವಾಬ್ದಾರಿ ಮರೆತು ವರ್ತಿಸುತ್ತಿದ್ದಾರೆ. ಕೇವಲ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದ್ದಾರೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಬಡವರಿಗೆ ಸರ್ಕಾರ ಪರಿಹಾರ ಘೋಷಿಸಬೇಕು.

ಬಿ.ಎನ್‌.ಚಂದ್ರಪ್ಪ
ಕೆಪಿಸಿಸಿ ವಕ್ತಾರ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು