ಹೊಳಲ್ಕೆರೆ: ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಕಾಮಗಾರಿಗೆ ಆಗ್ರಹಿಸಿ ರೈತ ಸಂಘ ಮಾರ್ಚ್ 4ರಂದು ಪಟ್ಟಣ ಬಂದ್‌ಗೆ ಕರೆ ನೀಡಿದೆ.
ಬೆಳಿಗ್ಗೆ 6ರಿಂದ ರಾತ್ರಿ 8ರವರೆಗೆ ಬಂದ್ ನಡೆಯಲಿದ್ದು, 22 ಸಂಘಟನೆಗಳು ಬೆಂಬಲ ನೀಡಿವೆ. ಸಂಜೆ 6.30ಕ್ಕೆ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ರೈತ ಸಂಘದ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬಯಲು ಸೀಮೆಯ ಆಶಾಕಿರಣವಾಗಿರುವ ಭದ್ರಾ ಮೇಲ್ದಂಡೆ ಯೋಜನೆ ನನೆಗುದಿಗೆ ಬಿದ್ದಿದ್ದು, ರೈತರು ಹತಾಶರಾಗಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಕಿತ್ತಾಟಗಳ ನಡುವೆ ರೈತರು ಸೊರಗಿದ್ದಾರೆ. ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಿದ್ದರೂ ಅನುದಾನ ಬಿಡುಗಡೆ ಮಾಡಿಲ್ಲ. ಯೋಜನೆಯ ಕಾಮಗಾರಿಗೆ ವೇಗ ಮುಟ್ಟಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಅಪ್ಪರಸನಹಳ್ಳಿ ಬಸವರಾಜಪ್ಪ, ಉಪಾಧ್ಯಕ್ಷ ಸದಾಶಿವಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ್, ರಂಗಪ್ಪ, ಜಯಣ್ಣ, ಮಹಾದೇವಪ್ಪ ಇದ್ದರು.