ಭಾನುವಾರ, ಅಕ್ಟೋಬರ್ 24, 2021
20 °C
ಸೇವಾ ಮತ್ತು ಸಮರ್ಪಣಾ ಅಭಿಯಾನದಲ್ಲಿ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ

ಸರ್ಕಾರದ ಸಾಧನೆಗೆ ಕಾಂಗ್ರೆಸ್‌ ಅಪಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಬೆಂಬಲ ಬೆಲೆಗೆ ಆಗ್ರಹಿಸಿ ಪಂಜಾಬಿನ ರೈತರು ನಡೆಸುತ್ತಿರುವ ಹೋರಾಟವನ್ನು ಕಾಂಗ್ರೆಸ್‌ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದೆ. ಕೇಂದ್ರ ಕೃಷಿ ಕಾಯ್ದೆಯ ವಿರುದ್ಧದ ಹೋರಾಟ ಎಂಬ ಅಪಪ್ರಚಾರ ಮಾಡುತ್ತಿದೆ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಆರೋಪಿಸಿದರು.

ನಗರದ ಎಸ್‍ಎಸ್‍ಕೆಎಸ್ ಸಮುದಾಯ ಭವನದಲ್ಲಿ ಬಿಜೆಪಿ ಬುಧವಾರ ಏರ್ಪಡಿಸಿದ್ದ ‘ಸೇವಾ ಮತ್ತು ಸಮರ್ಪಣಾ ಅಭಿಯಾನ’ ಉದ್ಘಾಟಿಸಿ ಅವರು ಮಾತನಾಡಿದರು. ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಗೂ ತಲುಪಿಸಬೇಕು’ ಎಂದು ಸಲಹೆ ನೀಡಿದರು.

‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆಯೂ ಕಾಂಗ್ರೆಸ್ ಅಪಪ್ರಚಾರ ಮಾಡಿತು. ಇದರಿಂದ ಈ ಕಾಯ್ದೆಗೆ ವಿರೋಧ ವ್ಯಕ್ತವಾಯಿತು. ಪಾಕಿಸ್ತಾನ, ಆಫ್ಘಾನಿಸ್ತಾನ ಹಾಗೂ ಬಾಂಗ್ಲಾ ದೇಶದಲ್ಲಿರುವ ಹಿಂದೂಗಳು ಭಾರತಕ್ಕೆ ಬಂದಾಗ ಪೌರತ್ವ ನೀಡುವ ಉದ್ದೇಶದಿಂದ ಈ ಕಾಯ್ದೆ ರೂಪಿಸಲಾಗಿದೆ. ಮುಸ್ಲಿಮರನ್ನು ದೇಶದಿಂದ ಹೊರಗೆ ಹಾಕುವ ಉದ್ದೇಶ ಸರ್ಕಾರಕ್ಕೆ ಇಲ್ಲ’ ಎಂದು ಹೇಳಿದರು.

ಬಿಜೆಪಿ ರಾಜ್ಯ ಮಾಧ್ಯಮ ವಕ್ತಾರ ಮೋಹನ್ ವಿಶ್ವ ಮಾತನಾಡಿ, ‘ಗೋದ್ರಾ ಹತ್ಯಾಕಾಂಡದ ಬಗ್ಗೆ ಮಾಡಿದ ಟೀಕೆಗೆ ನರೇಂದ್ರ ಮೋದಿ ಅವರು ಎದೆಗುಂದಲಿಲ್ಲ. ಅಧಿಕಾರಯುತ ಹುದ್ದೆಯಲ್ಲಿ ಎರಡು ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಜನಸೇವೆ, ಮೌನ, ತಾಳೆ ಹಾಗೂ ಕಠಿಣ ಪರಿಶ್ರಮದ ಮೂಲಕ ಟೀಕಾಕಾರರಿಗೆ ಉತ್ತರಿಸುತ್ತಿದ್ದಾರೆ’ ಎಂದರು.

ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರುಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಬದರೀನಾಥ್, ಬಿಜೆಪಿ ಮುಖಂಡರಾದ ಜಿ.ಅನಿತ್‍ಕುಮಾರ್, ಸುರೇಶ್ ಸಿದ್ದಾಪುರ, ನಂದಿ ನಾಗರಾಜ್, ಎ.ರೇಖಾ ಇದ್ದರು.

ಭಾರತವನ್ನು ವಿಶ್ವಗುರು ಮಾಡಬೇಕೆಂಬುದು ಪ್ರಧಾನಿ ಅವರ ಬಯಕೆ. ನಿಸ್ವಾರ್ಥ ಸೇವೆ ಅವರ ಧ್ಯೇಯ. ಪ್ರಧಾನಿ ಸಾಧನೆಯನ್ನು ಪ್ರತಿ ಮನೆಗೆ ಮುಟ್ಟಿಸುವ ಕೆಲಸವಾಗಬೇಕು.

- ಕೆ.ಶಶಿಧರ್, ನಗರ ಮಂಡಲ ಅಧ್ಯಕ್ಷ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.