ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘಪರಿವಾರದ ಕಾರ್ಯಕರ್ತರಿಗೆ ಸರ್ಕಾರ ಕಿರುಕುಳ: ಬಿಜೆಪಿ ವಕ್ತಾರ ನವೀನ್‌ ವಾಗ್ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಕ್ತಾರ ಕೆ.ಎಸ್‌.ನವೀನ್‌
Published 5 ಜನವರಿ 2024, 16:10 IST
Last Updated 5 ಜನವರಿ 2024, 16:10 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್‌, ಅಭಿವೃದ್ಧಿ ಮರೆತು ಸಂಘಪರಿವಾರದ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ. ಹಳೆಯ ಪ್ರಕರಣಗಳನ್ನು ಕೆದಕಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ. ಇದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾಗುತ್ತದೆ ಎಂದು ಬಿಜೆಪಿ ವಕ್ತಾರ ಕೆ.ಎಸ್‌.ನವೀನ್‌ ವಾಗ್ದಾಳಿ ನಡೆಸಿದರು.

‘ದಶಕಗಳ ಹಿಂದಿನ ಪ್ರಕರಣಗಳನ್ನು ಕೆದಕಿ ಜೈಲಿಗೆ ಕಳುಹಿಸುವ ಪ್ರಯತ್ನಕ್ಕೆ ಸರ್ಕಾರ ಮುಂದಾಗಿರುವುದು ಖಂಡನೀಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿ ಹಿಂದೂಗಳನ್ನು ಜೈಲಿಗೆ ಕಳುಹಿಸುವ ಸೂಚನೆ ನೀಡಿದ್ದಾರೆ’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ಸಮಾಜದ ಸಾಮರಸ್ಯವನ್ನು ಕದಡುವ ಕೆಲಸವನ್ನು ಆಡಳಿತಾರೂಢ ಕಾಂಗ್ರೆಸ್‌ ಮಾಡುತ್ತಿದೆ. ಕಾಂಗ್ರೆಸ್‌ ಮುಖಂಡರಾದ ಬಿ.ಕೆ.ಹರಿಪ್ರಸಾದ್‌, ವಿ.ಎಸ್‌.ಉಗ್ರಪ್ಪ ಹಾಗೂ ಎಚ್‌.ಆಂಜನೇಯ ಹಿಂದೂ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಓಲೈಕೆಗಾಗಿ ಹಿಂದೂಗಳ ಮೇಲೆ ಪ್ರಕರಣ ದಾಖಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುವ ಕಾರ್ಯವನ್ನು ಸರ್ಕಾರ ಹಾಗೂ ಆಡಳಿತಾರೂಢ ಪಕ್ಷ ಮಾಡುತ್ತಿದೆ’ ಎಂದು ದೂರಿದರು.

‘ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದಿವೆ. ಆದರೂ ಅಭಿವೃದ್ಧಿ ಕಾರ್ಯ ಇನ್ನೂ ಆರಂಭವಾಗಿಲ್ಲ. ಬಿಜೆಪಿ ಅವಧಿಯಲ್ಲಿ ಪ್ರಗತಿಯಲ್ಲಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ತೊಂದರೆಗೆ ಸಿಲುಕಿದ್ದಾರೆ. ಜನರು ಕೆಲಸ ಇಲ್ಲದೇ ಗುಳೆ ಹೋಗುತ್ತಿದ್ದಾರೆ. ಜಾನುವಾರುಗಳಿಗೆ ಮೇವು, ನೀರು ಇಲ್ಲದೇ ಸಮಸ್ಯೆ ಎದುರಿಸುತ್ತಿದ್ದಾರೆ. ದಮನಕಾರಿ ನೀತಿ ಕೈಬಿಟ್ಟು ಬರ ನಿರ್ವಹಣೆಯತ್ತ ಗಮನ ಹರಿಸಿ’ ಎಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರಳಿ, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಯಾದವ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಜಿಲ್ಲಾ ವಕ್ತಾರರಾದ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್ ಇದ್ದರು.

ಹಿಂದೂಗಳನ್ನು ದಮನ ಮಾಡಲು ಸರ್ಕಾರಕ್ಕೆ ಸಾಧ್ಯವಿಲ್ಲ. ಸರ್ಕಾರದ ಈ ಕಾರ್ಯವೈಖರಿ ಮುಂದುವರಿದರೆ ಜನರೇ ಸರ್ಕಾರವನ್ನು ದಮನ ಮಾಡಲಿದ್ದಾರೆ.

-ಕೆ.ಎಸ್‌.ನವೀನ್‌ ಬಿಜೆಪಿ ವಕ್ತಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT