ಚಿತ್ರದುರ್ಗ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ವಿದೇಶದಲ್ಲಿ ಭಾರತದ ಮೀಸಲಾತಿ ವಿರುದ್ಧವಾಗಿ ನೀಡಿರುವ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ‘ದೇಶದ ಒಳಗೆ ಮತ್ತು ಹೊರಗೆ ಭಾರತದ ಘನತೆ, ಸಾರ್ವಭೌಮತ್ವಕ್ಕೆ ಕುಂದು ತರುವಂತೆ ರಾಹುಲ್ ನಡೆದುಕೊಳ್ಳುತ್ತಿದ್ದಾರೆ. ಈ ಮೂಲಕ ದೇಶದ ಮಾನ ಕಳೆಯುತ್ತಿದ್ದಾರೆ’ ಎಂದು ಕಿಡಿಕಾರಿದರು.
‘ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರುವವರೆಗೂ ಮೀಸಲಾತಿ ಮುಂದುವರೆಯುವುದು. ಈ ಬಗ್ಗೆ ಯಾವುದೇ ಭಯಬೇಡ. ಕಾಂಗ್ರೆಸ್ ಕೇವಲ ಅಪಪ್ರಚಾರ ನಡೆಸುತ್ತಿದ್ದು, ಹೇಳಿಕೆಯಿಂದ ರಾಹುಲ್ ಗಾಂಧಿ ಅವರ ಅವರ ನಿಜಬಣ್ಣ ಬಯಲಾಗಿದೆ. ಕಾಂಗ್ರೆಸ್ ನಿಜವಾದ ಮೀಸಲಾತಿ ವಿರೋಧಿ’ ಎಂದರು.
‘ದೇಶ ವಿಭಜಿಸಲು ಸಂಚು ರೂಪಿಸುವ ಶಕ್ತಿಗಳೊಂದಿಗೆ ನಿಲ್ಲುವುದು ಮತ್ತು ದೇಶ ವಿರೋಧಿ ಹೇಳಿಕೆಗಳನ್ನು ನೀಡುವುದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಭ್ಯಾಸವಾಗಿದೆ. ಇವರು ಯಾವಾಗಲೂ ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕುತ್ತಿದ್ದಾರೆ. ಜನರ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ’ ಎಂದು ಆರೋಪಿಸಿದರು.
‘ಉದ್ಯೋಗದಲ್ಲಿ ಮೀಸಲಾತಿ ನೀಡಿದರೆ ಗುಣಮಟ್ಟದಲ್ಲಿ ಕುಸಿತ ಆಗುತ್ತದೆ ಎಂದು ಹಿಂದೆ ನೆಹರೂ ಹೇಳಿದ್ದರು. ಈಗ ರಾಹುಲ್ ಅವರು ಕೂಡ ಅಂಥಹದ್ದೇ ಹೇಳಿಕೆ ನೀಡಿದ್ದಾರೆ. ಇವರು ದಲಿತ ವಿರೋಧಿಗಳಾಗಿದ್ದಾರೆ. ಡಾ.ಬಿ.ಆರ್ .ಅಂಬೇಡ್ಕರ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ’ ಎಂದರು.
ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ಟಿ.ಸುರೇಶ್ ಸಿದ್ದಾಪುರ, ಸಂಪತ್ ಕುಮಾರ್, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಖಜಾಂಚಿ ಮಾಧುರಿ ಗಿರೀಶ್, ಶಿವಣ್ಣಾಚಾರಿ, ಎಸ್ಸಿ ಮೋರ್ಚಾ ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಮಹಿಳಾ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷೆ ಶೈಲಜಾರೆಡ್ಡಿ, ಉಪಾಧ್ಯಕ್ಷೆ ಶ್ಯಾಮಲಾ ಶಿವಪ್ರಕಾಶ್, ಎಸ್‌ಸಿ ಮೋರ್ಚಾ ರಾಜ್ಯ ಘಟಕದ ಕಾರ್ಯಕಾರಿಣಿ ಸದಸ್ಯೆ ಭಾರ್ಗವಿ ದ್ರಾವಿಡ್, ಪ್ರಧಾನ ಕಾರ್ಯದರ್ಶಿ ಶಾಂತಮ್ಮ, ನಗರಸಭೆ ಸದಸ್ಯ ಎಚ್.ಶ್ರೀನಿವಾಸ್, ಹರೀಶ್, ಮಾಧ್ಯಮ ವಕ್ತಾರರಾದ ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.