ಸ್ವರ್ಗದ ಬದಲು ನರಕ ತೋರಿಸಿದ ಬಿಜೆಪಿ: ಕಾಂಗ್ರೆಸ್

ಚಿತ್ರದುರ್ಗ: ಅಧಿಕಾರಕ್ಕೆ ಬಂದರೆ ಸ್ವರ್ಗ ತೋರಿಸುವ ಭರವಸೆ ನೀಡಿದ್ದ ಬಿಜೆಪಿ, ನರಕ ದರ್ಶನದ ಮಾಡಿಸುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿರುವ ತುಘಲಕ್ ಸರ್ಕಾರಗಳು ಜನರನ್ನು ಆಪತ್ತಿಗೆ ದೂಡುತ್ತಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಆರೋಪಿಸಿದರು.
ಮಂಗಳವಾರ ಕಾರ್ಯಕರ್ತರ ಸಭೆಗೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿವೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವುದನ್ನು ಮರೆತು ಮುಖ್ಯಮಂತ್ರಿ ಬದಲಾವಣೆ, ಸಚಿವ ಸ್ಥಾನಕ್ಕೆ ಲಾಬಿ ನಡೆಯುತ್ತಿದೆ. ಪ್ರಧಾನಿ ಮೋದಿ ಸುಳ್ಳಿನ ಸರಮಾಲೆ ಬಿಚ್ಚಿಡುತ್ತಿದ್ದಾರೆ. ಮನ್‌ಕಿ ಬಾತ್ ಬದಲು ಕಾಮ್ ಕಿ ಬಾತ್ ತೋರಿಸಿ’ ಎಂದು ಹೇಳಿದರು.
‘ಕೋವಿಡ್ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿ ಅಮಾನವೀಯವಾಗಿದೆ. ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಆಗದೆ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಈ ವೈಫಲ್ಯಕ್ಕೆ ಯಾವೊಬ್ಬ ಅಧಿಕಾರಿಯನ್ನು ಹೊಣೆ ಮಾಡಿಲ್ಲ. ಮುಖ್ಯಮಂತ್ರಿ ಹಾಗೂ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿಲ್ಲ’ ಎಂದು ಕಿಡಿಕಾರಿದರು.
‘ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿನ ಬಗ್ಗೆ ಸರ್ಕಾರ ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಜನರ ನೋವು, ಆಕ್ರಂದನ ಸರ್ಕಾರಕ್ಕೆ ಕೇಳುತ್ತಿಲ್ಲ. ಸರ್ಕಾರಕ್ಕೆ ಕಣ್ಣು, ಕಿವಿ ಯಾವುದೂ ಇಲ್ಲ. ಹೀಗಾಗಿ ಕೋವಿಡ್ ಸಾವಿನ ನಿಖರ ಮಾಹಿತಿ ಕಲೆ ಹಾಕುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ’ ಎಂದು ಹೇಳಿದರು.
‘ಮೊದಲ ಅಲೆಯ ಸಂದರ್ಭದಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರ ನಡೆದಿದೆ. ಕೋವಿಡ್ ನಿರ್ವಹಣೆಗೆ ಮಾಡಿದ ಖರ್ಚಿನ ಲೆಕ್ಕೆ ನೀಡಲು ಶ್ವೇತಪತ್ರ ಹೊರಡಿಸಬೇಕು ಎಂಬ ಒತ್ತಾಯಕ್ಕೆ ಸರ್ಕಾರ ಈವರೆಗೆ ಸ್ಪಂದಿಸಿಲ್ಲ. ಎರಡನೇ ಅಲೆಯ ಬಗ್ಗೆ ತಜ್ಞರು ಸುಳಿವು ನೀಡಿದರೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಿಲ್ಲ. ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಸಿ.ಡಿ. ಪ್ರಕರಣದಿಂದ ರಕ್ಷಿಸಲು ಸರ್ಕಾರ ಪ್ರಯತ್ನಿಸಿತು. ಇದರಿಂದ ಸಾವಿರಾರು ಜನರು ಪ್ರಾಣ ಕಳೆದುಕೊಳ್ಳಬೇಕಾಯಿತು’ ಎಂದು ದೂರಿದರು.
‘ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಕಾಂಗ್ರೆಸ್ ಸ್ಪಂದಿಸಿದೆ. 58 ಲಕ್ಷ ಮಾಸ್ಕ್, 3.25 ಲಕ್ಷ ಪಿಪಿಇ ಕಿಟ್ ಹಾಗೂ 84 ಲಕ್ಷ ಸ್ಯಾನಿಟೈಸರ್ ಬಾಟಲಿಗಳನ್ನು ಪಕ್ಷದ ವತಿಯಿಂದ ನೀಡಲಾಗಿದೆ. 1,343 ಆಂಬುಲೆನ್ಸ್ ಒದಗಿಸಲಾಗಿದೆ. 26 ಲಕ್ಷ ಆಹಾರದ ಕಿಟ್‌ಗಳನ್ನು ಬಡವರಿಗೆ ಹಂಚಿದ್ದೇವೆ. 3 ಲಕ್ಷ ಆಮ್ಲಜನಕ ಸಾಂದ್ರಕ ನೀಡಲಾಗಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಸ್ವಂತ ಹಣದಿಂದ ಮಾಡಿದ್ದಾರೆ’ ಎಂದು ಹೇಳಿದರು.
ಚುನಾವಣೆಗೆ ಸಿದ್ಧತೆ ಆರಂಭ
ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಆರಂಭಿಸಿದೆ. ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆಸಿ ಚುನಾವಣೆಗೆ ಸಜ್ಜಾಗುವಂತೆ ಸೂಚನೆ ನೀಡುತ್ತಿದೆ.
‘ಮುಂಬರುವ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಅಗತ್ಯವಿದೆ. ಬೂತ್, ವಾರ್ಡ್ ಹಾಗೂ ಪಂಚಾಯಿತಿ ಮಟ್ಟದ ಸಮಿತಿ ರಚನೆ ಮಾಡಲಾಗುತ್ತದೆ. ಅಕ್ಟೋಬರ್ ಅಂತ್ಯದ ಒಳಗೆ ಜವಾಬ್ದಾರಿ ಹಂಚಿಕೆ ಮಾಡಲಾಗುತ್ತದೆ. ಆರು ವರ್ಷ ಪೂರೈಸಿದ ಬ್ಲಾಕ್ ಸಮಿತಿ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ. ಅವರಿಗೆ ಕೆಪಿಸಿಸಿಯಲ್ಲಿ ಸ್ಥಾನ ಕಲ್ಪಿಸಲಾಗುತ್ತದೆ’ ಎಂದು ಸಲೀಂ ಅಹಮ್ಮದ್ ಮಾಹಿತಿ ನೀಡಿದರು.
ರಸ್ತೆಯಲ್ಲೇ ಪಾರ್ಕಿಂಗ್: ಸಂಚಾರ ಅಸ್ತವ್ಯಸ್ತ
ಕೆಪಿಸಿಸಿ ಕಾರ್ಯಾಧ್ಯಕ್ಷರು ಜಿಲ್ಲೆಗೆ ಭೇಟಿ ನೀಡಿದ್ದು ಕಾಂಗ್ರೆಸ್‌ನಲ್ಲಿ ಸಂಚಲ ಉಂಟು ಮಾಡಿದೆ. ನಿರೀಕ್ಷೆ ಮೀರಿ ಬಂದಿದ್ದ ಕಾರ್ಯಕರ್ತರು ಹಾಗೂ ಮುಖಂಡರು ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದರು.
ಕಾಂಗ್ರೆಸ್ ಕಚೇರಿಗೆ ಸಲೀಂ ಅಹಮ್ಮದ್ ಭೇಟಿ ನೀಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಕೊಂಡರು. ಬಹುತೇಕರ ಮೊಗದಲ್ಲಿ ಮಾಸ್ಕ್ ಇರಲಿಲ್ಲ, ಅಂತರ ಕಾಪಾಡಿಕೊಳ್ಳುವ ಹೊಣೆಗಾರಿಕೆಯನ್ನು ಪ್ರದರ್ಶಿಸಿಸಲಿಲ್ಲ. ಮುಖಂಡರು ಎಚ್ಚರಿಕೆ ನೀಡಿದರೂ ಯಾರೊಬ್ಬರೂ ಪಾಲಿಸಲಿಲ್ಲ.
ಒನಕೆ ಓಬವ್ವ ವೃತ್ತದ ಎಲ್ಲೆಂದರಲ್ಲಿ ಕಾರುಗಳನ್ನು ನಿಲುಗಡೆ ಮಾಡಲಾಗಿತ್ತು. ಇದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು. ಜಿಲ್ಲಾಧಿಕಾರಿ ಕಚೇರಿ, ನ್ಯಾಯಾಲಯಕ್ಕೆ ಭೇಟಿ ನೀಡುವ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಶಾಸಕ ಟಿ.ರಘುಮೂರ್ತಿ, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕರಾದ ಗೋವಿಂದಪ್ಪ, ತಿಪ್ಪೇಸ್ವಾಮಿ, ಉಮಾಪತಿ, ಮುಖಂಡರಾದ ಜಿ.ಎಸ್.ಮಂಜುನಾಥ್, ಹನುಮಲಿ ಷಣ್ಮುಖಪ್ಪ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.