ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳಲ್ಕೆರೆ | ವಿಜಯ ಸಂಕಲ್ಪ ಯಾತ್ರೆಗೆ 1 ಲಕ್ಷ ಜನ ಸೇರುವ ನಿರೀಕ್ಷೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ಭಾಗಿ
Last Updated 19 ಮಾರ್ಚ್ 2023, 6:55 IST
ಅಕ್ಷರ ಗಾತ್ರ

ಹೊಳಲ್ಕೆರೆ: ಪಟ್ಟಣದ ಕೊಟ್ರೆ ನಂಜಪ್ಪ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಾರ್ಚ್ 19ರಂದು ನಡೆಯುವ ವಿಜಯ ಸಂಕಲ್ಪ ಯಾತ್ರೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ 1 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಶಾಸಕ
ಎಂ. ಚಂದ್ರಪ್ಪ ತಿಳಿಸಿದರು.

ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಸ್. ಯಡಿಯೂರಪ್ಪ ಆಗಮಿಸುತ್ತಿದ್ದು, ಪಟ್ಟಣದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸುವರು.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಎ. ನಾರಾಯಣ ಸ್ವಾಮಿ, ಸಚಿವರಾದ ಬಿ.ಸಿ. ಪಾಟೀಲ್, ಶ್ರೀರಾಮುಲು, ಆರ್.ಅಶೋಕ್, ಜೆ.ಸಿ. ಮಾಧುಸ್ವಾಮಿ, ಡಾ.ಕೆ. ಸುಧಾಕರ್, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ, ಎಸ್.ಟಿ. ಸೋಮಶೇಖರ್, ಸಿ.ಸಿ. ಪಾಟೀಲ್, ಎಂಟಿಬಿ ನಾಗರಾಜ್, ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲೆಯ ಎಲ್ಲಾ ಶಾಸಕರು, ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ
ಎಂದರು.

‘ತಾಲ್ಲೂಕಿನ ಶಿವಮೊಗ್ಗ ರಸ್ತೆಯ ಬಸಾಪುರ ಗೇಟ್‌ನಿಂದ ಸುಮಾರು 3,000 ಬೈಕ್‌ಗಳಿಂದ ರ‍್ಯಾಲಿ ನಡೆಸಲಾಗುವುದು. 9000 ಫಲಾನುಭವಿಗಳಿಗೆ ಆಶ್ರಯ ಯೋಜನೆಯ ಹಕ್ಕುಪತ್ರ ವಿತರಿಸಲಾಗುವುದು. ಅಂಗವಿಕರಿಗೆ ತ್ರಿಚಕ್ರ ವಾಹನಗಳು, ಆಯುಷ್ಮಾನ್ ಭಾರತ್ ಕಾರ್ಡ್, ಮಹಿಳೆಯರಿಗೆ ಸಾಲ ಸೇರಿದಂತೆ 10000 ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಿಸಲಾಗುವುದು. ಸರ್ಕಾರಿ ಶಾಲೆಗೆ ಈಗಾಗಲೇ 2 ಬಸ್ ನೀಡಿದ್ದು, ಈಗ ಮತ್ತೆ 3 ಬಸ್ ಲೋಕಾರ್ಪಣೆ ಮಾಡಲಾಗುವುದು. ಐದು ವರ್ಷಗಳಲ್ಲಿ ಕ್ಷೇತ್ರವನ್ನು
₹ 4,150 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿ ಮಾಡಿದ್ದು, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿದ್ದೇನೆ’ ಎಂದು ಚಂದ್ರಪ್ಪ ತಿಳಿಸಿದರು.

ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ

ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಬರಲಿರುವ ಹಿನ್ನೆಲೆಯಲ್ಲಿ ವಾಹನಗಳ ಪಾರ್ಕಿಂಗ್‌ಗೆ ಹಲವು ಕಡೆ ವ್ಯವಸ್ಥೆ ಮಾಡಲಾಗಿದೆ.

ಶಿವಮೊಗ್ಗ ಕಡೆಯಿಂದ ಬರುವ ವಾಹನಗಳಿಗೆ ವಾಲ್ಮೀಕಿ ಭವನದ ಪಕ್ಕದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಹೊಸದುರ್ಗ, ಚಿತ್ರದುರ್ಗ, ದಾವಣಗೆರೆ ಕಡೆಯಿಂದ ಬರುವ ವಾಹನಗಳು ಎಂಎಂ ಕಾಲೇಜು ಆವರಣದಲ್ಲಿ ವಾಹನ ನಿಲುಗಡೆ ಮಾಡಬೇಕು. ದ್ವಿಚಕ್ರ ವಾಹನಗಳಿಗೆ ಶಾದಿ ಮಹಲ್ ಆವರಣ, ವಿವಿಐಪಿ ವಾಹನಗಳಿಗೆ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸರು ತಿಳಸಿದ್ದಾರೆ. ಭಾನುವಾರ ನಡೆಯಬೇಕಿದ್ದ ವಾರದ ಸಂತೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವಾಸಿಂ ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್. ಯಡಿಯೂರಪ್ಪ ಇಬ್ಬರೂ ಬರುವುದರಿಂದ ಕಾರ್ಯಕರ್ತರು ಹಾಗೂ ಜನರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

-ಎಂ. ಚಂದ್ರಪ್ಪ, ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT