ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಭ್ರಷ್ಟಾಚಾರ ತನಿಖೆಗೆ ಒಳಪಡಿಸುತ್ತೇವೆ

‘ಪ್ರಜಾಧ್ವನಿ’ ಯಾತ್ರೆಯಲ್ಲಿ ಡಿ.ಕೆ.ಶಿವಕುಮಾರ್‌ ಹೇಳಿಕೆ
Last Updated 7 ಫೆಬ್ರುವರಿ 2023, 4:32 IST
ಅಕ್ಷರ ಗಾತ್ರ

ಚಳ್ಳಕೆರೆ: 'ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿ ಕೇವಲ 40 ದಿನ ಇದೆ. ಆ ಬಳಿಕ ಜನಾಶೀರ್ವಾದ ಪಡೆದು ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಟೆಂಡರ್‌ ಅಕ್ರಮ, ಭ್ರಷ್ಟಾಚಾರವನ್ನು ತನಿಖೆಗೆ ಒಳಪಡಿಸುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಸೋಮವಾರ ಇಲ್ಲಿ ನಡೆದ ಕಾಂಗ್ರೆಸ್ ‘ಪ್ರಜಾಧ್ವನಿ’ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿರುವುದು ಭ್ರಷ್ಟ ಸರ್ಕಾರ ಎಂಬುದು ವಿರೋಧ ಪಕ್ಷದ ಟೀಕೆಯಲ್ಲ. ಇದೇ ಜಿಲ್ಲೆಯ ಬಿಜೆಪಿ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಸರ್ಕಾರದ ಭ್ರಷ್ಟಾಚಾರವನ್ನು ಬಯಲಿಗೆ ಎಳೆದಿದ್ದು, ನೀರಾವರಿ ಯೋಜನೆಯ ಟೆಂಡರ್‌ನಲ್ಲಿ ₹ 22,000 ಕೋಟಿ ಅಕ್ರಮ ನಡೆದಿದೆ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಈ ಸರ್ಕಾರದ ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷ್ಯ ಬೇಕಾ’ ಎಂದು ಪ್ರಶ್ನಿಸಿದರು.

‘ಶೇ 40ರಷ್ಟು ಕಮಿಷನ್‌ ಸರ್ಕಾರ ಎಂಬುದನ್ನು ಗುತ್ತಿಗೆದಾರರು ಹೇಳಿದ್ದಾರೆ. ಶಾಸಕರು, ಸಚಿವರ ಭ್ರಷ್ಟಾಚಾರಕ್ಕೆ ಮನನೊಂದು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಲಂಚ– ಮಂಚದಲ್ಲಿ ಮುಖಂಡರೊಬ್ಬರು ಸಚಿವ ಸ್ಥಾನವನ್ನೇ ಕಳೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಮತದಾರರು ಈ ಎಲ್ಲ ಸಚಿವರನ್ನು ಮನೆಗೆ ಕಳುಹಿಸಲಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

‘ಶಾಸಕ ಟಿ. ರಘುಮೂರ್ತಿ ಈ ಕ್ಷೇತ್ರವನ್ನು ಮಾದರಿಯಾಗಿ ರೂಪಿಸಿದ್ದಾರೆ. ಸರ್ಕಾರದ ಅನುದಾನವನ್ನು ಸರಿಯಾದ ರೀತಿಯಲ್ಲಿ ಬಳಸಿ ಕ್ಷೇತ್ರ ಅಭಿವೃದ್ಧಿಪಡಿಸಿದ್ದಾರೆ. ಸಾರಿಗೆ ಸಚಿವ ಬಿ.ಶ್ರೀರಾಮುಲು ಪ್ರತಿನಿಧಿಸುವ ಪಕ್ಕದ ಮೊಳಕಾಲ್ಮುರು ಕ್ಷೇತ್ರ ಹೇಗಿದೆ ಎಂಬುದು ಜಿಲ್ಲೆಯ ಜನರಿಗೆ ಗೊತ್ತಿದೆ’ ಎಂದು ವ್ಯಂಗ್ಯವಾಡಿದರು.

‘ರಾಜ್ಯ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕಿದೆ. ಮುಂಬರುವ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೇ ಪಕ್ಷವನ್ನು ಬೆಂಬಲಿಸಬೇಕು’ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದರು.

ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕೆಪಿಪಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಜ್ಯಸಭಾ ಸದಸ್ಯ ಜೆ.ಸಿ. ಚಂದ್ರಶೇಖರ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಎಚ್.ಎಂ. ರೇವಣ್ಣ, ಎಚ್.ಆಂಜನೇಯ, ಶಿವಮೂರ್ತಿ ನಾಯ್ಕ್‌, ವಿ.ಎಸ್. ಉಗ್ರಪ್ಪ, ವಿಧಾನಪರಿಷತ್ ಮಾಜಿ ಸದಸ್ಯೆ ಜಯಮ್ಮ ಬಾಲರಾಜ ಇದ್ದರು.

ನೀರಾವರಿ, ರಸ್ತೆ, ಮೂಲಸೌಕರ್ಯ ಕಲ್ಪಿಸಲಾಗಿದೆ. ಕ್ಷೇತ್ರದ ಇನ್ನು ಕೆಲ ಕಾಮಗಾರಿ ಹಿನ್ನೆಡೆಗೆ ನೇರ ಹೊಣೆ ಬಿಜೆಪಿ. ಅನುದಾನ ಹಂಚಿಕೆ, ಮಂಜೂರಾತಿಯಲ್ಲಿ ತಾರತಮ್ಯ ಮಾಡಿದೆ. ಟಿ. ರಘುಮೂರ್ತಿ, ಶಾಸಕ, ಚಳ್ಳಕೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT