ಸೋಮವಾರ, ಏಪ್ರಿಲ್ 12, 2021
26 °C
ಮುಷ್ಕರಕ್ಕೆ ಸಾರಿಗೆ ನೌಕರರ ತೀರ್ಮಾನ, ವೇತನ ಪರಿಷ್ಕರಣೆಗೆ ಆಗ್ರಹ

ಬಸ್‌ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ವೇತನ ಪರಿಷ್ಕರಣೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬುಧವಾರ ಮುಷ್ಕರ ನಡೆಸಲು ಸಾರಿಗೆ ನೌಕರರು ತೀರ್ಮಾನಿಸಿದ್ದಾರೆ. ಇದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್‌ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಚಿತ್ರದುರ್ಗ ವಿಭಾಗದ ವ್ಯಾಪ್ತಿಯ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ ಹಾಗೂ ಪಾವಗಡ ಡಿಪೊದಲ್ಲಿ 1,250 ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲ ನೌಕರರು ಸೇವೆಗೆ ಹಾಜರಾಗುವುದು ಅನುಮಾನವಾಗಿದೆ. 260 ಮಾರ್ಗಗಳಲ್ಲಿ ಸಂಚರಿಸಬೇಕಿದ್ದ 294 ಬಸ್‌ಗಳು ರಸ್ತೆಗೆ ಇಳಿಸುವುದಿಲ್ಲ. ಇದರಿಂದ ಈ ವಿಭಾಗಕ್ಕೆ ₹ 30 ಲಕ್ಷ ನಷ್ಟ ಉಂಟಾಗಲಿದೆ ಎಂದು ಅಂದಾಜಿಸಲಾಗಿದೆ.

ಕೆಲಸಕ್ಕೆ ಹಾಜರಾಗುವಂತೆ ಸಾರಿಗೆ ಇಲಾಖೆ ನೌಕರರಿಗೆ ನೋಟಿಸ್‌ ಜಾರಿ ಮಾಡಿದೆ. ಮುಷ್ಕರದಲ್ಲಿ ಪಾಲ್ಗೊಂಡರೆ ಗೈರು ಹಾಜರಿ ಎಂದು ಪರಿಗಣಿಸಿ ಸಂಬಳ ಕಡಿತ ಮಾಡುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ. ಕರ್ತವ್ಯಕ್ಕೆ ಹಾಜರಾಗಲು ಮುಂದೆ ಬರುವವರಿಗೆ ಸೂಕ್ತ ರಕ್ಷಣೆ ನೀಡುವ ಭರವಸೆಯನ್ನು ಪೊಲೀಸರು ನೀಡುತ್ತಿದ್ದಾರೆ.

ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆಯೇ ಜೀವಾಳ. ಸಾರಿಗೆ ಸಂಚಾರ ಸ್ಥಗಿತಗೊಂಡರೆ ಸಾರ್ವಜನಿಕರ ಜನಜೀವನದ ಮೇಲೆ ಪರಿಣಾಮ ಬೀರಲಿದೆ. ಕಾಲೇಜಿಗೆ ಬರುವ ವಿದ್ಯಾರ್ಥಿಗಳು, ಮಾರುಕಟ್ಟೆ ಸಂಪರ್ಕಿಸುವ ರೈತರು, ಕಾರ್ಮಿಕರು ಸೇರಿ ಹಲವು ವರ್ಗದ ಜನರು ತೊಂದರೆ ಅನುಭವಿಸಲಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ಜಿಲ್ಲಾಡಳಿತ ಆಶ್ವಾಸನೆ ನೀಡಿದೆ.

ಸಾರಿಗೆ ನೌಕರರ ಮನವೊಲಿಸಲು ಮಂಗಳವಾರ ಇಡೀ ದಿನ ಅಧಿಕಾರಿಗಳು ಪ್ರಯತ್ನಿಸಿದರು. ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ್‌ ಡಿಪೊಗಳಿಗೆ ಭೇಟಿ ನೀಡಿ ನೌಕರರೊಂದಿಗೆ ಚರ್ಚೆ ನಡೆಸಿದರು. ಉಪ ಚುನಾವಣೆ ಮುಕ್ತಾಯವಾದ ಬಳಿಕ ಬೇಡಿಕೆಗೆ ಸ್ಪಂದಿಸಲು ಸರ್ಕಾರ ಸಿದ್ಧವಿದೆ ಎಂಬುದನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದರು.

ಖಾಸಗಿ ಬಸ್ ಸೇವೆ

ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಿದೆ. ಖಾಸಗಿ ಬಸ್‌ ಹಾಗೂ ಮ್ಯಾಕ್ಸಿ ಕ್ಯಾಬ್‌ಗಳನ್ನು ಒದಗಿಸಲು ಮುಂದಾಗಿದೆ.

ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಹಾಗೂ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ್‌ ನೇತೃತ್ವದಲ್ಲಿ ಪರ್ಯಾಯ ವ್ಯವಸ್ಥೆಗೆ ಸಿದ್ಧತೆಗಳು ನಡೆದಿವೆ.

ಜಿಲ್ಲೆಯಲ್ಲಿ 470 ಖಾಸಗಿ ಬಸ್‌ಗಳಿದ್ದು, ಎಲ್ಲವನ್ನು ರಸ್ತೆಗೆ ಇಳಿಸಲು ಬಸ್‌ ಮಾಲೀಕರು ಒಲವು ತೋರಿದ್ದಾರೆ. ತೆರಿಗೆ ಪಾವತಿಸಲು ಸಾಧ್ಯವಾಗದೇ ಆರ್‌ಟಿಒ ಕಚೇರಿಗೆ ಒಪ್ಪಿಸಿದ ವಾಹನಗಳು ಕೂಡ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆ ಹಾಗೂ ಅಂತರ ಜಿಲ್ಲಾ ಮಾರ್ಗಗಳಲ್ಲಿ ಬಸ್‌ ಸಂಚರಿಸಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

***

ಸಾರಿಗೆ ನೌಕರರ ಮುಷ್ಕರ ಸಾರ್ವಜನಿಕರ ಜನಜೀವನದ ಮೇಲೆ ಪರಿಣಾಮ ಬೀರದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಖಾಸಗಿ ಬಸ್‌ ಹಾಗೂ ಕ್ಯಾಬ್‌ಗಳ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ.

–ಕವಿತಾ ಎಸ್‌.ಮನ್ನಿಕೇರಿ
ಜಿಲ್ಲಾಧಿಕಾರಿ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು