ಧರ್ಮಪುರ: ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳು ಬಾಲ್ಯ ವಿವಾಹ ಮತ್ತು ಪೋಕ್ಸೊ ಪ್ರಕರಣ ಕುರಿತು ಅರಿವು ಹೊಂದಿರಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕರಾದ ಕೆ.ನಿರ್ಮಲಾ ತಿಳಿಸಿದರು.
ಸಮೀಪದ ರಂಗೇನಹಳ್ಳಿ ಭಗವತೀ ಆಂಜನೇಯ ಪ್ರೌಢಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪೋಷಣ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹದಿಹರೆಯದ ಹೆಣ್ಣುಮಕ್ಕಳು ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಒಳಗಾಗದೇ ಪರಿಸ್ಥಿತಿಯನ್ನು ಧೈರ್ಯವಾಗಿ ಎದುರಿಸಬೇಕು. ಹಳ್ಳಿಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.
ರಂಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ನಿಶಿತ್, ಪೋಷಣ ಅಭಿಯಾನದ ಸಂಯೋಜಕಿ ಧನಲಕ್ಷ್ಮಿ, ಮುಖ್ಯ ಶಿಕ್ಷಕ ಗಿರೀಶ್, ಕುಮಾರ್, ವೀಣಾ, ಶಾಲೆಯ ಸಿಬ್ಬಂದಿ, ಅಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.