ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಾರ್ಮಿಕ ಪದ್ಧತಿ: ದಾಳಿ ಹೆಚ್ಚಿಸಿ

ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ
Last Updated 1 ಅಕ್ಟೋಬರ್ 2021, 3:55 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಹೊಟೇಲ್, ಬಾರ್ ಅಂಡ್‌ ರೆಸ್ಟೋರೆಂಟ್‌, ಗ್ಯಾರೇಜ್‍ಗಳಲ್ಲಿ ಮಕ್ಕಳು ಸಾಕಷ್ಟು ಸಂಖ್ಯೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ದೂರು ಕೇಳಿ ಬರುತ್ತಿದೆ. ಆದ್ದರಿಂದ ಇಂತಹ ಕಡೆಗಳಲ್ಲಿ ಹೆಚ್ಚಾಗಿ ದಾಳಿ ನಡೆಸಿ ಬಾಲಕಾರ್ಮಿಕ ಪದ್ಧತಿ ತಡೆಯಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ 2021-22ನೇ ಸಾಲಿನ ಜುಲೈ ಮತ್ತು ಆಗಸ್ಟ್ ತಿಂಗಳ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಆದ್ದರಿಂದ ಈ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಸಮೀಕ್ಷೆ ಕೈಗೊಂಡು ಬಾಲಕಾರ್ಮಿಕರನ್ನು ಗುರುತಿಸಿ ಅವರಿಗೆ ವಸತಿ, ಶಿಕ್ಷಣ, ಆರೋಗ್ಯ ಸೌಲಭ್ಯ ಒದಗಿಸಬೇಕು’ ಎಂದು ತಾಕೀತು ಮಾಡಿದರು.

ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಅಡಿಯಲ್ಲಿ ಪರಿಶಿಷ್ಟರಿಗೆ ಹಂಚಿಕೆಯಾದ ಅನುದಾನ ವಿಳಂಬ ಮಾಡಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ‘ನಿಗದಿತ ಕಾಲಮಿತಿಯೊಳಗೆ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆಯ ಅನುದಾನ ತ್ವರಿತವಾಗಿ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡುವ ಮೂಲಕ ಶೇ 100ರಷ್ಟು ಪ್ರಗತಿ ಸಾಧಿಸಬೇಕು’ ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಮತಾ, ‘ಸಣ್ಣ ನೀರಾವರಿ, ವಸತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಿಗೆ ಹಂಚಿಕೆಯಾದ ಎಸ್‍ಸಿಎಸ್‍ಪಿ, ಟಿಎಸ್‍ಪಿ ಅನುದಾನದ ಮೂಲಕ ಶೇ 100ರಷ್ಟು ಪ್ರಗತಿ ಸಾಧಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗಳಿಗೆ ಹಂಚಿಕೆಯಾದ ಅನುದಾನದಲ್ಲಿ ಎಸ್‍ಸಿಎಸ್‌ಪಿ ಶೇ 98, ಟಿಎಸ್‍ಪಿ ಶೇ 91ರಷ್ಟು ಹಾಗೂ ಕೃಷಿ ಇಲಾಖೆ ಕ್ರಮವಾಗಿ ಶೇ 94, ಶೇ 96 ಪ್ರಗತಿಯಾಗಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಎಸ್. ಭಾರತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT