ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ ಮೇಲ್ದಂಡೆ ಯೋಜನೆಗೆ ಒತ್ತಾಯಿಸಿ ಇಂದು ಚಿತ್ರದುರ್ಗ ಬಂದ್: ಶಾಲೆ-ಕಾಲೇಜು ರಜೆ

ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯ: ಸಾರಿಗೆ ಸಂಚಾರದಲ್ಲಿ ವ್ಯತ್ಯಯ, ಖಾಸಗಿ ಶಾಲೆ-ಕಾಲೇಜು ರಜೆ
Published 23 ಜನವರಿ 2024, 4:37 IST
Last Updated 23 ಜನವರಿ 2024, 4:37 IST
ಅಕ್ಷರ ಗಾತ್ರ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಮಂಗಳವಾರ ಕರೆ ನೀಡಿರುವ ಚಿತ್ರದುರ್ಗ ನಗರ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ. ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲ ಖಾಸಗಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬಂದ್ ಗೆ ಬಿಜೆಪಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸೇರಿ 20ಕ್ಕೂ ಹೆಚ್ಚು ಸಂಘ ಸಂಸ್ಥೆಗಳು ಬೆಂಬಲ‌ ವ್ಯಕ್ತಪಡಿಸಿವೆ. ಆಟೊ, ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ ಟಿಸಿ) ಬಸ್ ಗಳು ನಗರದ ಹೊರ ಭಾಗದ ಹೆದ್ದಾರಿಯಲ್ಲಿ ಸಂಚರಿಸುತ್ತಿವೆ.

ನಗರದ ಗಾಂಧಿ ವೃತ್ತ, ಮೆದೇಹಳ್ಳಿ ರಸ್ತೆ, ಸಂತೆಹೊಂಡದ ಬಳಿ ಬೆಳಿಗ್ಗೆ ಜಮಾಯಿಸಿದ ಪ್ರತಿಭಟನಕಾರರು ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲು ಮನವಿ ಮಾಡಿದರು. ನಸುಕಿನಿಂದಲೇ ಆರಂಭವಾಗಿದ್ದ ತರಕಾರಿ, ಹೂ ಹಾಗೂ ಹಣ್ಣು ಮಾರುಕಟ್ಟೆ ಬಂದ್ ಮಾಡಿಸಲಾಯಿತು. ಖಾಸಗಿ ಬಸ್ ನಿಲ್ದಾಣಕ್ಕೆ ತೆರಳಿದ ಕೆಲವರು ಸಂಚಾರಕ್ಕೆ ಅಡ್ಡಿಪಡಿಸಿದರು. ಆಟೊ ಚಾಲಕರ ಮನವೊಲಿಸಿ ಬಂದ್ ಗೆ ಬೆಂಬಲ ಕೋರಿದರು.

ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ಕೆಲ ಖಾಸಗಿ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಯಿತು. ಸರ್ಕಾರಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿ ಸಾಗುತ್ತಿರುವುದು ಸಾಮಾನ್ಯವಾಗಿದೆ. ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಬಂದ್ ಬೆಂಬಲಿಸುವಂತೆ ಮನವಿ ಮಾಡಲಾಗುತ್ತಿದೆ. ಹೋಟೆಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಬಂದ್ ಆಗಿವೆ.

ಗಾಂಧಿ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಯಲುಸೀಮೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿವೆ ಎಂದು ಆರೋಪಿಸಿದರು. ರಾಜ್ಯದ ಯಾವುದೇ ನೀರಾವರಿ ಯೋಜನೆ ಇಷ್ಟೊಂದು ನಿರ್ಲಕ್ಷ್ಯಕ್ಕೆ ಒಳಗಾಗಿಲ್ಲ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT