‘ಹಣವಿದ್ದರೂ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲುಮಾರ್ಗ ವಿಳಂಬ’

7
ಚಿತ್ರದುರ್ಗ ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಕೋದಂಡರಾಮಯ್ಯ ಬೇಸರ

‘ಹಣವಿದ್ದರೂ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲುಮಾರ್ಗ ವಿಳಂಬ’

Published:
Updated:
Deccan Herald

ಚಿತ್ರದುರ್ಗ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗಕ್ಕೆ ಸರ್ಕಾರ ಅನುದಾನ ಮೀಸಲಿಟ್ಟಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳದ ಪರಿಣಾಮ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಚಿತ್ರದುರ್ಗ ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಕೋದಂಡರಾಮಯ್ಯ ಬೇಸರ ವ್ಯಕ್ತಪಡಿಸಿದರು.

‘ನೇರ ರೈಲು ಮಾರ್ಗಕ್ಕೆ 2,500 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಿದೆ. ಆದರೆ, ಈವರೆಗೆ 135 ಎಕರೆ ಮಾತ್ರ ವಶಪಡಿಸಿಕೊಳ್ಳಲಾಗಿದೆ. ಇದರಿಂದ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ಭದ್ರಾ ಮೇಲ್ದಂಡೆ ಯೋಜನೆಗೆ 2003ರಲ್ಲಿ ಮಂಜೂರಾತಿ ದೊರೆಯಿತು. 15 ವರ್ಷ ಕಳೆದರೂ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ಈ ಎರಡೂ ಯೋಜನೆಗಳ ಅನುಷ್ಠಾನಕ್ಕೆ ಆಡಳಿತ ಪಕ್ಷಗಳು ಇಚ್ಛಾಶಕ್ತಿ ಪ್ರದರ್ಶಿಸಿಲ್ಲ. ಮಧ್ಯ ಕರ್ನಾಟಕವನ್ನು ಎಲ್ಲ ರಾಜಕೀಯ ಪಕ್ಷಗಳು ಸಂಪೂರ್ಣ ನಿರ್ಲಕ್ಷಿಸಿವೆ’ ಎಂದು ಆರೋಪಿಸಿದರು. 

‘ರೈಲ್ವೆ ಯೋಜನೆಯ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಈ ಹಿಂದೆ ಸಭೆ ನಡೆಯಿತು. ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ನಿವೃತ್ತ ಅಧಿಕಾರಿಗಳನ್ನು ನೇಮಿಸಲು ತೀರ್ಮಾನಿಸಲಾಗಿತ್ತು. ಆ ಪ್ರಕಾರ ತುಮಕೂರಿಗೆ ಈಗಾಗಲೇ ಒಬ್ಬರನ್ನು ನೇಮಿಸಲಾಗಿದೆ. ಚಿತ್ರದುರ್ಗ, ದಾವಣಗೆರೆಯಲ್ಲೂ ಈ ನೇಮಕಾತಿ ಪ್ರಕ್ರಿಯೆ ನಡೆಯಬೇಕಿದೆ’ ಎಂದರು.

‘ಭೂಸ್ವಾಧೀನ ಪ್ರಕ್ರಿಯೆ ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡುತ್ತದೆ. ಹೀಗಾಗಿ, ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅವರನ್ನು ಶೀಘ್ರದಲ್ಲೇ ಭೇಟಿಯಾಗಿ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಮನವಿ ಮಾಡಲಾಗುವುದು. ಅಲ್ಲದೆ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಜತೆಗೂ ಚರ್ಚಿಸಲಾಗುವುದು’ ಎಂದು ಹೇಳಿದರು.

‘ಮೂಲ ಸೌಕರ್ಯ ಒದಗಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಇನ್ನಾದರೂ ರಾಜ್ಯ ಸರ್ಕಾರ ಇತ್ತ ಗಮನಹರಿಸಿ ಎರಡೂ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಒತ್ತಾಯಿಸಿದರು.

‘ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಕಂದಾಯ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವರು ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಅದಕ್ಕೆ ಸಮಿತಿಯ ಅಧ್ಯಕ್ಷರು ಪಾಲ್ಗೊಳ್ಳಲು ಅವಕಾಶ ಮಾಡಿಕೊಡಬೇಕು’ ಎಂದು ಕೋರಿದರು.

ಸಮಿತಿ ಮುಖಂಡರಾದ ಮುರುಘಾರಾಜೇಂದ್ರ ಒಡೆಯರ್, ರಮಾ ನಾಗರಾಜ್, ನುಲೇನೂರು ಶಂಕರಪ್ಪ, ಎನ್.ಡಿ. ಕುಮಾರ್, ಎಂ.ಡಿ. ರವಿ, ಕುರುಬರಹಳ್ಳಿ ಶಿವಣ್ಣ, ಜಿ.ಎಸ್. ಉಜ್ಜಿನಪ್ಪ, ಧನಂಜಯ್ಯ, ಕರಿಯಪ್ಪ, ಕೆ.ಸಿ. ಹೊರಕೇರಪ್ಪ, ಪಾತಣ್ಣ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !