ಶನಿವಾರ, ಡಿಸೆಂಬರ್ 14, 2019
24 °C
ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್‌.ಮಂಜುನಾಥ್‌ ಟೀಕೆ

ದೇವರು, ಧರ್ಮ ಬೀದಿಗೆಳೆದ ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಧಾರ್ಮಿಕ ಭಾವನೆಗಳನ್ನು ಬಂಡವಾಳ ಮಾಡಿಕೊಂಡು ಅಧಿಕಾರ ಹಿಡಿದ ಬಿಜೆಪಿ, ಜಾತಿ–ಧರ್ಮ–ದೇವರನ್ನು ಬೀದಿಗೆ ಎಳೆದು ತಂದಿದೆ ಎಂದು ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್‌.ಮಂಜುನಾಥ್‌ ಆರೋಪಿಸಿದರು.

ಚಿತ್ರದುರ್ಗದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಅಂಬೇಡ್ಕರ್‌, ಇಂದಿರಾಗಾಂಧಿ ಸೇರಿದಂತೆ ಮಹನೀಯರ ಸೇವೆ ಅರಿಯದ ಯುವ ಪೀಳಿಗೆಯನ್ನು ಬಿಜೆಪಿ ದಿಕ್ಕು ತಪ್ಪಿಸುತ್ತಿದೆ. ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ್ದು ಕಾಂಗ್ರೆಸ್‌ ಪಕ್ಷವೇ ಹೊರತು ಬಿಜೆಪಿ ಅಲ್ಲ. ಕಾಂಗ್ರೆಸ್‌ ಆಡಳಿತ ಅವಧಿಯಲ್ಲಿ ದೇಶದಲ್ಲಿ 211 ಜಲಾಶಯಗಳನ್ನು ನಿರ್ಮಿಸಲಾಗಿದೆ. ಅಭಿವೃದ್ಧಿಗೆ ಬಿಜೆಪಿ ಏನು ಕೊಡುಗೆ ನೀಡಿದೆ’ ಎಂದು ಪ್ರಶ್ನೆ ಮಾಡಿದರು.

‘ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿದ್ದ ಕೋಟ್ಯಂತರ ಹಣವನ್ನು ಬಿಜೆಪಿ ಸರ್ಕಾರ ವಶಕ್ಕೆ ಪಡೆದಿದೆ. ಆಪತ್ಕಾಲದಲ್ಲಿ ನೆರವಿಗೆ ಬರುವ ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿಯ ಹಗರಣಗಳ ಬಗ್ಗೆ ಮಾತನಾಡಿದರೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ’ ಎಂದು ಕಿಡಿಕಾರಿದರು.

ಮಾಜಿ ಸಚಿವ ಕೆ.ಶಿವಮೂರ್ತಿ ನಾಯ್ಕ್‌ ಮಾತನಾಡಿ, ‘ಕಂದಾಯ ರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಣೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಅಗತ್ಯವಿದೆ. ಈ ಮೂಲಕ ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದ ಇಂದಿರಾ ಗಾಂಧಿ ಅವರಿಗೆ ನಮನ ಸಲ್ಲಿಸಬೇಕಿದೆ’ ಎಂದರು.

‘ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದ ಆರ್ಥಿಕ ದಿಕ್ಕು ಬದಲಾಗಿದೆ. ದೇಶದಲ್ಲಿ ಆರ್ಥಿಕ ಪ್ರಗತಿ ತೀರಾ ಮಂದಗತಿಯಲ್ಲಿ ಸಾಗುತ್ತಿದೆ. ಸುಪ್ರೀಂ ಕೋರ್ಟ್‌ ಕೂಡ ಕೇಂದ್ರ ಸರ್ಕಾರದ ಸೂಚನೆಯಂತೆ ನಡೆಯುತ್ತಿದೆ. ಪ್ರಜಾತಂತ್ರ ವ್ಯವಸ್ಥೆಯೇ ಅಪಾಯಕ್ಕೆ ಸಿಲುಕಿದ ಆತಂಕ ಎದುರಾಗಿದೆ’ ಎಂದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌, ಕಾರ್ಯಾಧ್ಯಕ್ಷ ಸಿ.ಶಿವು ಯಾದವ, ಹಿರಿಯ ಉಪಾಧ್ಯಕ್ಷ ಶಬ್ಬೀರ್‌ ಅಹಮ್ಮದ್‌, ಆರ್‌.ಕೆ.ನಾಯ್ಡು, ಪ್ರಧಾನ ಕಾರ್ಯದರ್ಶಿ ಬಿ.ಜಿ.ಶ್ರೀನಿವಾಸ, ಮಹಿಳಾ ಘಟಕದ ಅಧ್ಯಕ್ಷ ಪಿ.ಕೆ.ಮೀನಾಕ್ಷಿ ಇದ್ದರು.

ಪ್ರತಿಕ್ರಿಯಿಸಿ (+)