ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಗ್ರಾ.ಪಂ. ಅಧಿಕಾರ ಮೊಟಕಿಗೆ ಹುನ್ನಾರ -ಮಾಜಿ ಸಚಿವ ಎಚ್.ಆಂಜನೇಯ ಆರೋಪ

Last Updated 25 ನವೆಂಬರ್ 2021, 13:21 IST
ಅಕ್ಷರ ಗಾತ್ರ

ಚಿತ್ರದುರ್ಗ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಅಧಿಕಾರವನ್ನು ಮೊಟಕುಗೊಳಿಸಲು ಹುನ್ನಾರ ನಡೆಸುತ್ತಿದೆ. ದೇಶಕ್ಕೆ ಮಾದರಿಯಾಗಿರುವ ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಮುಂದಾಗಿದೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಆರೋಪಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಸತಿ ಯೋಜನೆಯ ಫಲಾನುಭವಿಗಳನ್ನು ಗ್ರಾಮ ಸಭೆ ಮೂಲಕ ಆಯ್ಕೆ ಮಾಡುವ ಅಧಿಕಾರವನ್ನು ಪಂಚಾಯಿತಿ ಹೊಂದಿತ್ತು. ಗ್ರಾಮದ ಪ್ರತಿಯೊಬ್ಬರು ಇದರಲ್ಲಿ ಪಾಲ್ಗೊಂಡು ಪಾರದರ್ಶಕ ಆಯ್ಕೆಗೆ ಅವಕಾಶವಿತ್ತು. ಫಲಾನುಭವಿಗಳ ಆಯ್ಕೆಯ ಅಧಿಕಾರವನ್ನು ಶಾಸಕರಿಗೆ ನೀಡಲು ಸರ್ಕಾರ ಮುಂದಾಗಿದೆ’ ಎಂದು ದೂರಿದರು.

‘ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಕಾಂಗ್ರೆಸ್‌ ಜಾರಿಗೆ ತಂದಿದೆ. ಇದು ಅತ್ಯಂತ ಪರಿಣಾಮಕಾರಿಯಾಗಿ ಕರ್ನಾಟಕದಲ್ಲಿ ಅನುಷ್ಠಾನಗೊಂಡಿದೆ. ಇದೇ ಮಾದರಿಯನ್ನು ದೇಶದ ಇತರ ರಾಜ್ಯಗಳು ಅನುಕರಣೆ ಮಾಡುತ್ತಿವೆ. ಇಂತಹ ವ್ಯವಸ್ಥೆ ಬಿಜೆಪಿ ಅಧಿಕಾರವಧಿಯಲ್ಲಿ ಹಾಳಾಗುತ್ತಿದೆ. ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರವನ್ನು ಕಿತ್ತುಕೊಳ್ಳುವ ಯತ್ನ ನಡೆಯುತ್ತಿದೆ’ ಎಂದು ಅಸಮಾಧಾನ ಹೊರಹಾಕಿದರು.

‘2013ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಮೊದಲು ಆಡಳಿತ ನಡೆಸಿದ್ದ ಬಿಜೆಪಿ, ಆಶ್ರಯ ಮನೆಗಳಿಗೆ ಅನುದಾನ ಮೀಸಲಿಟ್ಟಿರಲಿಲ್ಲ. ಅಂದಾಜು 9 ಲಕ್ಷ ಮನೆಗಳಿಗೆ ಕಾಂಗ್ರೆಸ್‌ ಸರ್ಕಾರ ಅನುದಾನ ಒದಗಿಸಿ ಫಲಾನುಭವಿಗಳಿಗೆ ಅನುಕೂಲ ಮಾಡಿಕೊಟ್ಟಿತು. ಐದು ವರ್ಷಗಳ ಅಧಿಕಾರವಧಿಯಲ್ಲಿ 15 ಲಕ್ಷಕ್ಕೂ ಅಧಿಕ ಮನೆಗಳನ್ನು ನೀಡಿತು. ಬಿಜೆಪಿ ಸರ್ಕಾರ ಕಳೆದ ಒಂದೂವರೆ ವರ್ಷದಿಂದ ಆಶ್ರಯ ಮನೆ ಮಂಜೂರು ಮಾಡುತ್ತಿಲ್ಲ’ ಎಂದು ಕಿಡಿಕಾರಿದರು.

‘ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಅಪಾರ ಕಾಳಜಿ ಹೊಂದಿದೆ. ಪಂಚಾಯತ್‌ ರಾಜ್ಯ ವ್ಯವಸ್ಥೆ ಸುಧಾರಣೆಗೆ ಪ್ರಯತ್ನಿಸಿದೆ. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಈ ವ್ಯವಸ್ಥೆಯನ್ನು ಹಾಳು ಮಾಡುವ ನೀತಿ ರೂಪಿಸಿದೆ. ಈ ಹುನ್ನಾರವನ್ನು ಗ್ರಾಮ ಪಂಚಾಯಿತಿ ಸದಸ್ಯರು ಅರಿಯಬೇಕು. ಒಂದು ವೇಳೆ ಪಂಚಾಯಿತಿ ಅಧಿಕಾರ ಮೊಟಕುಗೊಳಿಸಿದರೆ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ವಿಧಾನಪರಿಷತ್‌ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಬಿ.ಸೋಮಶೇಖರ ಅವರಿಗೆ ಪಂಚಾಯತ್‌ ರಾಜ್‌ ವ್ಯವಸ್ಥೆಯ ಬಗ್ಗೆ ಅಪಾರ ತಿಳಿವಳಿಕೆ ಇದೆ. ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಯಾಗಿ ಕೆಲಸ ಮಾಡಿದ ಅನುಭವವಿದೆ. ಬಿಜೆಪಿ ಸರ್ಕಾರದ ನಡೆಯನ್ನು ಪ್ರಶ್ನಿಸುವ ಶಕ್ತಿ ಅವರಲ್ಲಿದೆ’ ಎಂದರು.

ನ.28ರಂದು ಸಿದ್ದರಾಮಯ್ಯ ಪ್ರಚಾರ
ಕಾಂಗ್ರೆಸ್‌ ಅಭ್ಯರ್ಥಿ ಬಿ.ಸೋಮಶೇಖರ ಪರ ಪ್ರಚಾರ ನಡೆಸಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನ.28ರಂದು ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ ಎಂದು ಎಚ್‌.ಆಂಜನೇಯ ಮಾಹಿತಿ ನೀಡಿದರು.

‘ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿ ಚುನಾವಣೆ ಪ್ರಚಾರ ನಡೆಯುತ್ತಿದೆ. ಸೋಮಶೇಖರ ಅವರು ನ.26ರಂದು ಮೊಳಕಾಲ್ಮುರು ಹಾಗೂ ಚಳ್ಳಕೆರೆ, ನ.27ರಂದು ಹಿರಿಯೂರು ಹಾಗೂ ಹೊಸದುರ್ಗದಲ್ಲಿ ಮತಯಾಚನೆ ಮಾಡಲಿದ್ದಾರೆ. ನ.30ರಂದು ಚಿತ್ರದುರ್ಗ ಹಾಗೂ ಹೊಳಲ್ಕೆರೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಲಿದೆ’ ಎಂದು ಹೇಳಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‌ಕುಮಾರ್‌, ಡಿ.ಎನ್‌.ಮೈಲಾರಪ್ಪ, ಮಹಿಳಾ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎಸ್‌.ಗೀತಾ ನಂದಿನಿಗೌಡ ಇದ್ದರು.

***

ಸರ್ಕಾರದ ಜನವಿರೋಧಿ ನೀತಿ ಕಾಂಗ್ರೆಸ್‌ ಗೆಲುವಿಗೆ ಸಹಕಾರಿಯಾಗಲಿದೆ. ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಶೇ 60ರಷ್ಟು ಸದಸ್ಯರು ಕಾಂಗ್ರೆಸ್‌ ಪಕ್ಷದವರು. ಸೋಮಶೇಖರ ವಿಜಯ ಸಾಧಿಸುವ ವಿಶ್ವಾಸವಿದೆ.
-ಎಚ್‌.ಆಂಜನೇಯ, ಮಾಜಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT