ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ರಾಹುಲ್ ಬಂಧನ; ಕಾಂಗ್ರೆಸ್ ಆಕ್ರೋಶ

ಎಪಿಎಂಸಿ, ಭೂ ಸುಧಾರಣೆ, ಕಾರ್ಮಿಕ ಕಾಯ್ದೆ ಜಾರಿ ವಿರೋಧಿಸಿದ ಕಾರ್ಯಕರ್ತರು
Last Updated 2 ಅಕ್ಟೋಬರ್ 2020, 16:15 IST
ಅಕ್ಷರ ಗಾತ್ರ

ಚಿತ್ರದುರ್ಗ: ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಉತ್ತರಪ್ರದೇಶದ ಹಾಥರಸ್‌ಗೆ ಹೊರಟ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮೇಲೆ ಅಲ್ಲಿನ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಪಕ್ಷದ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಿಸಿದ ನಂತರ ಕಚೇರಿ ಮುಂಭಾಗ ಪ್ರತಿಭಟನೆಗೆ ಮುಂದಾದರು. ಇದೇ ವೇಳೆ ಜನವಿರೋಧಿ ಕಾಯ್ದೆ ಜಾರಿಗೆ ಮುಂದಾಗಿರುವ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್ ಮುಖಂಡ ಚಂದ್ರಪ್ಪ, ‘ವಾಲ್ಮೀಕಿ ಸಮುದಾಯದ ಯುವತಿ ಮೇಲೆ ಅತ್ಯಾಚಾರವಾಗಿದೆ. ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಬಿಜೆಪಿ ನೇತೃತ್ವದ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ದೂರಿದರು.

‘ಯುವತಿಯ ದೇಹವನ್ನು ಕುಟುಂಬದವರಿಗೆ ನೀಡದೆಯೇ ರಾತ್ರೋರಾತ್ರಿ ಸುಟ್ಟುಹಾಕಿರುವುದು ಅಲ್ಲಿನ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದ ಪಕ್ಷದ ನಾಯಕರಾದ ರಾಹುಲ್‌ಗಾಂಧಿ, ಪ್ರಿಯಾಂಕಾ ಅವರನ್ನು ತಡೆದು ಪೊಲೀಸರು ದುರ್ವರ್ತನೆ ತೋರಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರದ ಕುಮ್ಮಕ್ಕಿದೆ’ ಎಂದು ಆರೋಪಿಸಿದರು.

‘ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ ಜಾರಿಗೊಳಿಸಿದ್ದು ಕಾಂಗ್ರೆಸ್. ಆದರೆ, ಬಿಜೆಪಿ ಸರ್ಕಾರ ುಳುವ ಭೂಮಿ ಅದಾನಿ, ಅಂಬಾನಿ ಸೇರಿ ಶ್ರೀಮಂತರ ಪಾಲಾಗಲು ಕಾಯ್ದೆ ತಿದ್ದುಪಡಿಗೆ ಮುಂದಾಗಿದೆ. ಶ್ರೀಮಂತ ಹಾಗೂ ಬಡವರ ಮಧ್ಯೆ ಸಾಕಷ್ಟು ಅಂತರ ಸೃಷ್ಟಿಸುತ್ತಿದೆ’ ಎಂದು ದೂರಿದರು.

‘ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಹಾಗೂ ವಿದ್ಯುತ್ ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ಮುಂದಾಗಿರುವ ಎಲ್ಲ ಕಾಯ್ದೆಗಳು ಕಾರ್ಪೊರೇಟ್ ಪರವಾಗಿವೆ. ಇದರಿಂದ ರೈತರಿಗೆ, ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರಿಗೆ ಯಾವ ಪ್ರಯೋಜವೂ ಇಲ್ಲ. ಎಲ್ಲ ಕ್ಷೇತ್ರವನ್ನೂ ಖಾಸಗೀಕರಣ ಮಾಡಲು ಹೊರಟಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುಪಿ ಸಿ.ಎಂ ವಿರುದ್ಧ ಘೋಷಣೆ

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕೃತಿ ದಹಿಸಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾದ ವೇಳೆ ಗಾಂಧಿ ಜಯಂತಿ ಇರುವ ಕಾರಣಕ್ಕೆ ದಹಿಸುವಂತಿಲ್ಲ ಎಂದು ಪೊಲೀಸರು ತಡೆದರು. ಈ ವೇಳೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ತಳ್ಳಾಟಕ್ಕೂ ಮುಂದಾದರು. ಬಿಜೆಪಿ ನೇತೃತ್ವದ ಸರ್ಕಾರಗಳು ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾಗಿವೆ ಎಂದು ಪ್ರತಿಭಟನಕಾರರು ದೂರಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಆರ್.ನರಸಿಂಹರಾಜು, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಮುಖಂಡರಾದ ಜಿ.ಎಸ್.ಮಂಜುನಾಥ್, ಜಯಮ್ಮಬಾಲರಾಜ್, ಭೀಮಸಮುದ್ರದ ಜಿ.ಎಸ್. ಮಂಜುನಾಥ್, ಬಿ.ಟಿ.ಜಗದೀಶ್, ಎನ್‌.ಡಿ.ಕುಮಾರ್, ಡಿ.ಟಿ.ಅಜ್ಜಪ್ಪ, ಆರ್.ಕೆ.ನಾಯ್ಡು, ಡಿ.ಎನ್. ಮೈಲಾರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT