ಶನಿವಾರ, ಏಪ್ರಿಲ್ 1, 2023
25 °C
ಮಾಜಿ ಸಚಿವ ಶಿವಮೂರ್ತಿ ನಾಯ್ಕ ಒತ್ತಾಯ

ತಾಂಡಾಗೆ ಕಂದಾಯ ಗ್ರಾಮ ಮಾನ್ಯತೆ ಕಲ್ಪಿಸಿ: ಅಭಿಯಾನ ಆರಂಭಿಸಿದ ಕಾಂಗ್ರೆಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ‘ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆದರೂ, ರಾಜ್ಯದಲ್ಲಿ ಅನುಷ್ಠಾನವಾಗುತ್ತಿಲ್ಲ. ಈ ಕುರಿತು ಕಾಂಗ್ರೆಸ್‌ನಿಂದ ರಾಜ್ಯದಾದ್ಯಂತ ಸಂವಾದ ನಡೆಸಲಾಗುವುದು’ ಎಂದು ಮಾಜಿ ಸಚಿವ ಕೆ.ಶಿವಮೂರ್ತಿ ನಾಯ್ಕ ತಿಳಿಸಿದರು.

‘ಕಂದಾಯ ಗ್ರಾಮ ಮಾನ್ಯತೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದರೂ ಜಾರಿಗೆ ಬಂದಿಲ್ಲ. ಈ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ. ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ. ಆದರೆ, ಎಲ್ಲಿಯೂ ಜಾರಿಯಾಗಿಲ್ಲ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ಹೊರಹಾಕಿದರು.

‘ಆಳುವ ಸರ್ಕಾರ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಈ ಪ್ರಕ್ರಿಯೆ ನೆನಗುದಿಗೆ ಬಿದ್ದಿದೆ. ಅದಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎಲ್ಲ ಜಿಲ್ಲೆಯ ತಾಂಡ, ಗೊಲ್ಲರಹಟ್ಟಿ, ಕಾಲೊನಿ, ಹಾಡಿ, ವಾಡಿ, ದೊಡ್ಡಿಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ’ ಎಂದು ಹೇಳಿದರು.

‘ಜುಲೈ 15ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಸೇರಿ ವಿವಿಧ ಗ್ರಾಮೀಣ ಭಾಗಗಳಲ್ಲಿನ ಇಂತಹ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿರುವವರ ಜೊತೆ ಚರ್ಚಿಸಲಿದ್ದಾರೆ. ಜನರ ಕಷ್ಟ ಆಲಿಸಲಿದ್ದಾರೆ. ವಲಸೆ ಹೋಗಿರುವವರ ಕುರಿತು ಮಾಹಿತಿ ಪಡೆಯಲಿದ್ದಾರೆ’ ಎಂದರು.

‘ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಖಲೆ ರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವಂತೆ ಅನೇಕ ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರುತ್ತಿದ್ದೇನೆ. ಆದರೆ, ಆಯಾ ಜಿಲ್ಲೆಗಳ ಜಿಲ್ಲಾಡಳಿತ ಅಪೂರ್ಣ ಮಾಹಿತಿ ನೀಡಿ ಸರ್ಕಾರದ ದಿಕ್ಕು ತಪ್ಪಿಸುತ್ತಿದೆ. ಸಾಮಾಜಿಕ ನ್ಯಾಯ, ಬಡವರ ಕುರಿತು ಕಾಳಜಿ ಇಲ್ಲವಾಗಿದೆ. ಅದಕ್ಕಾಗಿ ಅಭಿಯಾನದ ರೀತಿಯಲ್ಲಿ ಕಾಂಗ್ರೆಸ್ ಮಾಹಿತಿ ಪಡೆಯಲಿ’ ಎಂದು ತಿಳಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಮುಖಂಡರಾದ ಕೆ.ಪಿ.ಸಂಪತ್‌ಕುಮಾರ್, ಗೀತಾ ನಂದಿನಿಗೌಡ, ಬಾಲಕೃಷ್ಣಸ್ವಾಮಿ ಯಾದವ್, ಮೋಕ್ಷಾ ರುದ್ರಸ್ವಾಮಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು