ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಹತ್ಯೆ ಖಂಡಿಸಿ ಪ್ರತಿಭಟನೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಿಡುಗಡೆಗೆ ಕಾಂಗ್ರೆಸ್‌ ಆಗ್ರಹ
Last Updated 6 ಅಕ್ಟೋಬರ್ 2021, 12:05 IST
ಅಕ್ಷರ ಗಾತ್ರ

ಚಿತ್ರದುರ್ಗ: ಉತ್ತರಪ್ರದೇಶದ ಲಿಖಿಂಪುರದಲ್ಲಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಗೃಹ ಬಂಧನದಿಂದ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್‌ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಕೆಲ ಹೊತ್ತು ಧರಣಿ ನಡೆಸಿ ಉಪವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ರವಾನಿಸಿದರು.

ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಕಾರು ಹರಿಸಿದ್ದಾರೆ. ಘಟನೆಯಲ್ಲಿ ರೈತರು ಸೇರಿ ಎಂಟು ಜನರು ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಕೇಂದ್ರ ಹಾಗೂ ಉತ್ತರಪ್ರದೇಶ ಸರ್ಕಾರದ ಪ್ರತಿಕ್ರಿಯೆ ಅಘಾತಕಾರಿಯಾಗಿದೆ. ರೈತರ ವಿರುದ್ಧವೇ ಪ್ರಕರಣ ದಾಖಲಿಸಿ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಸಂತ್ರಸ್ತ ರೈತರ ಕುಟುಂಬಗಳನ್ನು ಭೇಟಿ ಮಾಡಲು ತೆರಳುತ್ತಿದ್ದ ಉತ್ತರಪ್ರದೇಶದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಕಾನೂನು ಬಾಹಿರವಾಗಿ ವಶಕ್ಕೆ ಪಡೆಯಲಾಗಿದೆ. ಈ ವೇಳೆ ಅವರನ್ನು ಗೌರವಯುತವಾಗಿ ನಡೆಸಿಕೊಂಡಿಲ್ಲ. ಅಕ್ರಮವಾಗಿ ಬಂಧನದಲ್ಲಿ ಇಟ್ಟು ಮಾನಸಿಕವಾಗಿ ಹಿಂಸೆ ನೀಡಲಾಗಿದೆ. ಉತ್ತರಪ್ರದೇಶದ ಸರ್ಕಾರ ರೈತರ ಚಳವಳಿಯನ್ನು ದಮನ ಮಾಡಲು ಸರ್ವ ರೀತಿಯಲ್ಲಿಯೂ ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದರು.

ಮಾಜಿ ಸಚಿವ ಎಚ್‌.ಆಂಜನೇಯ ಮಾತನಾಡಿ, ‘ಕೃಷಿ ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಹತ್ಯೆ ಮಾಡಿದ್ದು ಅಮಾನವೀಯವಾಗಿದೆ. ಇಡಿ ದೇಶವೇ ತಲೆತಗ್ಗಿಸುವಂತಹ ಘಟನೆ ಇದಾಗಿದೆ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ’ ಎಂದರು.

‘ಪ್ರಿಯಾಂಕಾ ಗಾಂಧಿ ಅವರು ಈ ದೇಶದ ಹೆಮ್ಮೆಯ ಮಗಳು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಶ್ರೀಮಂತರಾಗಿದ್ದ ಅವರ ಕುಟುಂಬ ದೇಶಕ್ಕಾಗಿ ಹಲವು ರೀತಿಯ ತ್ಯಾಗಗಳನ್ನು ಮಾಡಿದೆ. ಅಂತಹ ಕುಟುಂಬದ ಹೆಣ್ಣು ಮಗಳನ್ನು ಸರ್ಕಾರ ಗೌರವಯುತವಾಗಿ ನಡೆಸಿಕೊಂಡಿಲ್ಲ. ಸಾಮಾನ್ಯ ಕೊಠಡಿಯಲ್ಲಿ ಕೂಡಿಹಾಕಿ ಹಿಂಸಿಸಿದೆ’ ಎಂದು ಆಕ್ರೋಶ ಹೊರಹಾಕಿದರು.

‘ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ನಿರ್ಮಾಣವಾಗಿದೆ. ಆದಾಯ ತೆರಿಗೆ ಇಲಾಖೆ, ಸಿಬಿಐ ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳನ್ನು ಬೆದರಿಸಲು ಪ್ರಯತ್ನಿಸುತ್ತಿದೆ. ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಮೋದಿ ಅವರ ಸರ್ಕಾರ ಉಳಿದಿದೆ. ಇಲ್ಲವಾದರೆ ಕಾಂಗ್ರೆಸ್‌ ಕಾರ್ಯಕರ್ತರು ದೇಶದ ಎಲ್ಲೆಡೆ ಹೋರಾಟ ನಡೆಸುತ್ತಿದ್ದರು’ ಎಂದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲೇಶ್‌ ಇದ್ದರು.

***

ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುರ್ತುಪರಿಸ್ಥಿತಿಯನ್ನು ಅಧಿಕೃತವಾಗಿ ಹೇರುವ ಧೈರ್ಯವಿಲ್ಲ. ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಸುತ್ತಿದ್ದಾರೆ. ಬೆದರಿಸುವ ತಂತ್ರ ಅನುಸರಿಸುತ್ತಿದ್ದಾರೆ.

ಎಚ್‌.ಆಂಜನೇಯ,ಮಾಜಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT