ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟೆನಾಡಿನಲ್ಲಿ ಕಾಂಗ್ರೆಸ್‌ ಐಕ್ಯತಾ ಸಮಾವೇಶ ಇಂದು

Last Updated 7 ಜನವರಿ 2023, 19:45 IST
ಅಕ್ಷರ ಗಾತ್ರ

ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ಪಂಗಡದ ಮತಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಜ.8ರಂದು ಕಾಂಗ್ರೆಸ್‌ ಹಮ್ಮಿಕೊಂಡಿರುವ ‘ಐಕ್ಯತಾ ಸಮಾವೇಶ’ಕ್ಕೆ ಕೋಟೆನಾಡು ಸಜ್ಜಾಗಿದೆ. ಮಧ್ಯ ಕರ್ನಾಟಕದಿಂದ ಚುನಾವಣೆಯ ರಣಕಹಳೆ ಮೊಳಗಿಸಲು ಕಾಂಗ್ರೆಸ್‌ ಮುಂದಾಗಿದೆ.

ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಅಂತಿಮ ಹಂತದ ಸಿದ್ಧತೆಗಳು ಶನಿವಾರ ಪೂರ್ಣಗೊಂಡವು. ಎಐಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ ನೇತೃತ್ವದಲ್ಲಿ ಸಮಾವೇಶವನ್ನು ಸಂಘಟಿಸಲಾಗಿದ್ದು, ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್‌ ಹೇಳಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಬಿ.ಕೆ.ಹರಿಪ್ರಸಾದ್‌ ಸೇರಿ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಉಪಾಧ್ಯಕ್ಷ ಕೆ.ಎಚ್‌. ಮುನಿಯಪ್ಪ, ಡಾ.ಎಚ್‌.ಸಿ. ಮಹದೇವಪ್ಪ, ಎಚ್‌. ಆಂಜನೇಯ, ಬಿ.ಎನ್‌. ಚಂದ್ರಪ್ಪ, ಟಿ.ಪಿ.ಪರಮೇಶ್ವರ ನಾಯ್ಕ ಸೇರಿ ಅನೇಕರು ರಾಜ್ಯ ಸಂಚರಿಸಿ ಸಮಾವೇಶಕ್ಕೆ ಕಾರ್ಯಕರ್ತರನ್ನು ಕರೆತರಲು ಪ್ರಯತ್ನಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ಸಮಸ್ಯೆ, ಬೇಡಿಕೆಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಯಲಿದೆ. ಮೀಸಲಾತಿ ಪ್ರಮಾಣ ಹೆಚ್ಚಿಸಿ ಪಾರಂಪರಿಕ ಮತಬುಟ್ಟಿಗೆ ಕೈಹಾಕಿರುವ ಬಿಜೆಪಿಗೆ ಪ್ರತಿತಂತ್ರ ರೂಪಿಸುವ ಉದ್ದೇಶದಿಂದ ಕಾಂಗ್ರೆಸ್‌ ಈ ಸಮಾವೇಶ ಸಂಘಟಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿಡುವ ಅನುದಾನದಲ್ಲಿ ಉಂಟಾಗಿರುವ ವ್ಯತ್ಯಾಸ, ಎಸ್‌ಇಪಿ–ಟಿಎಸ್‌ಪಿ ಅನ್ಯ ಉದ್ದೇಶಕ್ಕೆ ಬಳಕೆ ಸೇರಿ ಹಲವು ವಿಚಾರಗಳನ್ನು ಸಮಾವೇಶದಲ್ಲಿ ಕಾಂಗ್ರೆಸ್‌ ಪ್ರಸ್ತಾಪಿಸಲು ಸಿದ್ಧತೆ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT