ಶುಕ್ರವಾರ, ಜನವರಿ 27, 2023
27 °C
ಬಹಿರಂಗ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿಶ್ವಾಸ

ಜಿಲ್ಲೆಯಾದ್ಯಂತ ಕಾಂಗ್ರೆಸ್‌ ಗೆಲುವು: ಡಿ.ಕೆ.ಶಿವಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಸೋಮವಾರ ನಡೆಸಿದ ‘ಸಂವಿಧಾನ ಬಚಾವೋ’ ಪಾದಯಾತ್ರೆಯ ಬಹಿರಂಗ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಬಿಜೆಪಿಯ ಭ್ರಷ್ಟ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಶೇ 40ರಷ್ಟು ಕಮಿಷನ್‌ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಬಡವರು, ರೈತರು ಜೀವನ ನಡೆಸಲು ಸಾಧ್ಯವಾಗದೇ ಕಂಗಾಲಾಗಿದ್ದಾರೆ. ನಿರುದ್ಯೋಗ ಸಮಸ್ಯೆ ಉಲ್ಬಣಗೊಂಡಿದ್ದು ಯುವಸಮೂಹ ಭ್ರಮನಿರಸಗೊಂಡಿದೆ. ಬಿಜೆಪಿ ಮತ್ತೆ ಅಧಿಕಾರ ಹಿಡಿಯದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಕಾಂಗ್ರೆಸ್‌ ಕಾರ್ಯಕರ್ತರ ಮೇಲಿದೆ’ ಎಂದರು.

‘ಪಕ್ಷದ ಟಿಕೆಟ್‌ಗೆ ಅರ್ಜಿ ಹಾಕಿದವರು ಮನೆಯಲ್ಲಿ ಕುಳಿತುಕೊಳ್ಳಬಾರದು. ಪ್ರತಿ ಬೂತ್‌ಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಶೀಲಿಸಬೇಕು. ಪಿಕ್‌ ಪಾಕೇಟ್‌, ಲಂಚಗುಳಿತನದ ಮಾದರಿಯಲ್ಲಿ ಮತ ಕದಿಯುವ ಪ್ರಯತ್ನಕ್ಕೆ ಬಿಜೆಪಿ ಕೈಹಾಕಿದೆ. ಮತದಾರರ ಪಟ್ಟಿಯಲ್ಲಿರುವ ಆಯ್ದ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ. ಮತದಾರರ ಪಟ್ಟಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು’ ಎಂದು ತಾಕೀತು ಮಾಡಿದರು.

‘ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಉಳಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ದೇಶ ರಕ್ಷಣೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಸಾಗಿದ 105 ಕಿ.ಮೀ ಭಾರತ್‌ ಜೋಡೊ ಯಾತ್ರೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹೆಜ್ಜೆ ಹಾಕಿ ರಾಹುಲ್ ಗಾಂಧಿ ಅವರಿಗೆ ಶಕ್ತಿ ತುಂಬಿದ್ದೀರಿ. ಪಕ್ಷವನ್ನು ಅಧಿಕಾರಕ್ಕೆ ತರುವವರೆಗೆ ಈ ಬದ್ಧತೆ ಇರಬೇಕು’ ಎಂದು ಸಲಹೆ ನೀಡಿದರು.

‘ಬಡವರಿಗೆ ಮನೆ, ಭೂಮಿ, ನಿವೇಶನ ನೀಡಿದ್ದು ಕಾಂಗ್ರೆಸ್‌. ಬ್ಯಾಂಕ್ ರಾಷ್ಟ್ರೀಕರಣಗೊಳಿಸಿ ಬಡವರು ಬ್ಯಾಂಕ್‌ಗೆ ಬರುವಂತೆ ಮಾಡಿದ್ದು ಕಾಂಗ್ರೆಸ್‌. ಮೊಬೈಲ್ ಫೋನ್, ಟಿವಿ ಬಂದಿರುವುದಕ್ಕೆ ರಾಜೀವ್ ಗಾಂಧಿ ಕಾರಣ. ಆಹಾರ ಭದ್ರತೆ, ನರೇಗಾದಂತಹ ಜನಪರ ಯೋಜನೆ ಜಾರಿಗೊಳಿಸಿದ್ದು ಮನಮೋಹನ್‌ ಸಿಂಗ್‌. ಪಕ್ಷದ ಸಾಧನೆಯನ್ನು ಜನರ ಮುಂದೆ ಇಡಬೇಕು’ ಎಂದರು.

‘ಹಿಂದೂ–ಮುಸ್ಲಿಂ ಎಂಬ ತಾರತಮ್ಯದ ಸಮಾಜವನ್ನು ಸೃಷ್ಟಿಸಲು ಬಿಜೆಪಿ ಹವಣಿಸುತ್ತಿದೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಂದೇ ಎಂಬುದು ಕಾಂಗ್ರೆಸ್‌ ಸಿದ್ಧಾಂತ. ಪ್ರತಿಯೊಬ್ಬರು ಮಾನವ ಧರ್ಮ ಪಾಲನೆ ಮಾಡಬೇಕು. ಮನುಷ್ಯತ್ವ ಎಲ್ಲದಕ್ಕಿಂತ ಮುಖ್ಯ’ ಎಂದು ಹೇಳಿದರು.

ಶಾಸಕ ಟಿ.ರಘುಮೂರ್ತಿ, ಮಾಜಿ ಶಾಸಕ ಡಿ.ಸುಧಾಕರ ಇದ್ದರು.

‘ಮಣಿಯಲಿದೆ ಮನುವಾದ’

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಪ್ರತಿಪಾದಿಸುವ ಮನುವಾದಕ್ಕೆ ಅಂಬೇಡ್ಕರ್‌ ವಾದದಿಂದ ಮಾತ್ರ ಪ್ರತ್ಯುತ್ತರ ನೀಡಲು ಸಾಧ್ಯ. ಅಂಬೇಡ್ಕರ್‌ ವಿಚಾರಧಾರೆ ಮನುವಾದವನ್ನು ಮಣಿಸಲಿದೆ ಎಂದು ಎಐಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ರಾಜೇಶ್‌ ಲಿಲೋಠಿಯಾ ಅಭಿಪ್ರಾಯಪಟ್ಟರು.

‘ಈ ದೇಶದಲ್ಲಿ ಎಲ್ಲರೂ ಬದುಕುವ ಹಕ್ಕನ್ನು ಸಂವಿಧಾನ ನೀಡಿದೆ. ಸಂವಿಧಾನದ ಆಶಯಗಳನ್ನು ಮುಗಿಸುವ ಕೆಲಸವನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮಾಡುತ್ತಿವೆ. ಇದರ ವಿರುದ್ಧ ಹೋರಾಟ ಮಾಡಲು ಕಾಂಗ್ರೆಸ್ ಸಜ್ಜಾಗಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ರಕ್ಷಣೆ ಮಾಡಲಿದ್ದೇವೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು